
ಕಾರವಾರ, ಸೆಪ್ಟೆಂಬರ್ 17: ಗಣೇಶೋತ್ಸವ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ ಹಾಗೂ ಮದರಸಾ ಮೇಲೆ ಕಲ್ಲು ತೂರಾಟ ನಡೆಸಿದ ಆರೋಪ ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕೇಳಿಬಂದಿದೆ. ಬುಧವಾರ ರಾತ್ರಿ ಭಟ್ಕಳ ತಾಲೂಕಿನ ಗುಳ್ಮಿ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ಘಟನೆ ನಡೆದಿದೆ. ಭಟ್ಕಳದ ತಲಾಂದದಿಂದ ಸಾರ್ವಜನಿಕ ಗಣೇಶ ವಿಸರ್ಜನಾ ಮೆರವಣಿಗೆ ಆರಂಭವಾಗಿತ್ತು. ಮೆರವಣಿಗೆ ಗುಳ್ಮಿ ರೈಲ್ವೆ ಬ್ರಿಡ್ಜ್ ದಾಟಿ ರೈಲ್ವೆ ಸ್ಟೇಷನ್ ರಸ್ತೆಯ ಮೂಲಕ ಸಾಗುತ್ತಿದ್ದ ವೇಳೆ, ರಸ್ತೆಯ ಪಕ್ಕದಲ್ಲಿರುವ ಇಸ್ಮಾಯಿಲ್ ಸುನ್ನಿ ಜಾಮೀಯಾ ಮಸೀದಿ ಹಾಗೂ ನೆಲಮಹಡಿಯಲ್ಲಿರುವ ತಾಜುಸುನ್ನಾ ಅರೇಬಿಕ್ ಮದರಸಾ ಮೇಲೆ ಅಪರಿಚಿತರು ಕಲ್ಲು ತೂರಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ಸ್ಥಳೀಯ ಅಬ್ದುಲ್ ಅಲಿಂ ಎಂಬವರು ಭಟ್ಕಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಲ್ಲು ತೂರಾಟದಿಂದ ಕಟ್ಟಡದ ಎರಡು ಕಿಟಕಿ ಗಾಜುಗಳಿಗೆ ಹಾನಿಯಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಘಟನೆಗೆ ಸಂಬಂಧಿಸಿದ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಸ್ಥಳೀಯ ಮುಸ್ಲಿಮರು ಪೊಲೀಸ್ ಠಾಣೆ ಮುಂದೆ ಜಮಾಯಿಸಿದ್ದರು.

ವಿಷಯ ತಿಳಿದು ಸ್ಥಳಕ್ಕೆ ಉತ್ತರಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೃತ್ಯ ಎಸಗಿದವರನ್ನು ಬಂಧಿಸುವುದಾಗಿ ಎಸ್ಪಿ ಭರವಸೆ ನೀಡಿದ ಬಳಿಕ ಸ್ಥಳೀಯರು ಪೊಲೀಸ್ ಠಾಣೆಯಿಂದ ತೆರಳಿದ್ದಾರೆ.
ಘಟನೆ ಹಿನ್ನೆಲೆಯಲ್ಲಿ ಭಟ್ಕಳದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಕಲ್ಲು ತೂರಾಟದ ಆರೋಪದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಮೆರವಣಿಗೆಯ ಸಂದರ್ಭದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಗಳು ಹಾಗೂ ಇತರ ಮಾಹಿತಿಗಳನ್ನು ಪರಿಶೀಲಿಸಲಿದ್ದಾರೆ.
ಕಲ್ಲು ತೂರಾಟ ಘಟನೆ ಸಂಬಂಧ ತಲಾಂದ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ರಾಜು ಸಹ ಪ್ರತಿ ದೂರು ನೀಡಿದ್ದಾರೆ. ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಅಪರಿಚಿತ ಕಿಡಿಗೇಡಿಗಳು ಮೂರ್ತಿಯತ್ತ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಅವರು ಆರೋಪ ಮಾಡಿದ್ದಾರೆ. ಕಲ್ಲು ತೂರಾಟ ಮಾಡಿ ಕೋಮು ಸಾಮರಸ್ಯಕ್ಕೆ ಧಕ್ಕೆ ಉಂಟು ಮಾಡುವ ಪ್ರಯತ್ನ ಮಾಡಲಾಗಿದೆ. ಆರೋಪಿಗಳನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಬೇಡ್ತಿ-ಅಘನಾಶಿನಿ ನದಿ ತಿರುವು, ಜೋಡಣೆ ಯೋಜನೆಗೆ ವಿರೋಧ; ಸರ್ಕಾರದ ವಿರುದ್ಧ ಸಿಡಿದೆದ್ದ ಕರಾವಳಿ, ಮಲೆನಾಡಿಗರು
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:25 am, Thu, 17 September 26