ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ ಪ್ರಸ್ತಾವಕ್ಕೆ ಹಣಕಾಸು ಇಲಾಖೆ ನಕಾರ: ಜಿಲ್ಲೆಯಲ್ಲಿ ಬೇಸರ

ಕಾರವಾರದ ಕ್ರಿಮ್ಸ್​ನಿಂದ ಕಳುಹಿಸಿದ್ದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣದ ಕುರಿತ ಪ್ರಸ್ತಾವವನ್ನು ಕರ್ನಾಟಕ ಸರ್ಕಾರದ ಆರ್ಥಿಕ ಇಲಾಖೆಯು ತಿರಸ್ಕರಿಸಿದೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ ಪ್ರಸ್ತಾವಕ್ಕೆ ಹಣಕಾಸು ಇಲಾಖೆ ನಕಾರ: ಜಿಲ್ಲೆಯಲ್ಲಿ ಬೇಸರ
ಉತ್ತರ ಕನ್ನಡ ಜಿಲ್ಲಾಸ್ಪತ್ರೆ
TV9kannada Web Team

| Edited By: Ghanashyam D M | ಡಿ.ಎಂ.ಘನಶ್ಯಾಮ

Sep 16, 2022 | 2:50 PM

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜನರು ಹಲವು ದಶಕಗಳಿಂದ ಕೇಳುತ್ತಿದ್ದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ (Super Speciality Hospital) ಕನಸಿಗೆ ಸರ್ಕಾರ ತಣ್ಣೀರೆರಚಿದೆ. ಕಾರವಾರದ ಕ್ರಿಮ್ಸ್​ನಿಂದ ಕಳುಹಿಸಿದ್ದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣದ ಕುರಿತ ಪ್ರಸ್ತಾವವನ್ನು ಕರ್ನಾಟಕ ಸರ್ಕಾರದ ಆರ್ಥಿಕ ಇಲಾಖೆಯು ತಿರಸ್ಕರಿಸಿದೆ. ಈ ಮೂಲಕ ಉತ್ತರ ಕನ್ನಡ ಜಿಲ್ಲೆಯ ಜನರ ಹಲವು ವರ್ಷಗಳ ಬೇಡಿಕೆಯನ್ನು ನಿರ್ಲಕ್ಷಿಸಿರುವ ಜಿಲ್ಲೆಯ ಜನರ ಅಸಮಾಧಾನಕ್ಕೆ ಕಾರಣವಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಒತ್ತಾಯಿಸಿ ಕಳೆದ ಮೂರು ವರ್ಷಗಳಿಂದ ಹೋರಾಟ, ಪ್ರತಿಭಟನೆಗಳು ತೀವ್ರಗೊಂಡಿದ್ದವು. ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮಾಡುವುದಾಗಿ ಸರ್ಕಾರ ಭರವಸೆ ನೀಡಿದ ನಂತರ ಕಾರವಾರದ ಕ್ರಿಮ್ಸ್ ವೈದ್ಯಕೀಯ ಕಾಲೇಜಿನಿಂದ ಆಸ್ಪತ್ರೆ ನಿರ್ಮಾಣಕ್ಕೆ ಪ್ರಸ್ತಾವನೆ ಕಳಿಸಲಾಗಿತ್ತು. ಈ ಪ್ರಸ್ತಾವವನ್ನೇ ಆರ್ಥಿಕ ಇಲಾಖೆಯು ತಿರಸ್ಕರಿಸಿರುವುದು ವಿಧಾನಸಭೆ ಅಧಿವೇಶನದಲ್ಲಿ ಬೆಳಕಿಗೆ ಬಂದಿದೆ. ಆಸ್ಪತ್ರೆಯ ಬೇಡಿಕೆ ಕುರಿತಂತೆ ಅಧಿವೇಶನದಲ್ಲಿ ಕಾರವಾರ ಶಾಸಕಿ ರೂಪಾಲಿ ನಾಯ್ಕ ಅವರು ಚುಕ್ಕೆ ಗುರುತಿನ ಪ್ರಶ್ನೆ ಕೇಳಿದ್ದರು.

ಉತ್ತರ ಕನ್ನಡ ಜಿಲ್ಲಾ ಕೇಂದ್ರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಇಲ್ಲದಿರುವುದರಿಂದ ಸಾರ್ವಜನಿಕರು ಅನುಭವಿಸುತ್ತಿರುವ ತೊಂದರೆಗಳ ಬಗ್ಗೆ ಸರ್ಕಾರದ ಗಮನಕ್ಕೆ ಬಂದಿದೆಯೇ ಎಂಬ ಪ್ರಶ್ನೆಗೆ ಆರೋಗ್ಯ ಸಚಿವ ಡಾ ಸುಧಾಕರ್ ಪ್ರತಿಕ್ರಿಯೆ ನೀಡಿ, ಕಾರವಾರದ ಕ್ರಿಮ್ಸ್ ನಿರ್ದೇಶಕರು ಸಲ್ಲಿಸಲಾದ ಪ್ರಸ್ತಾವವನ್ನು ಆರ್ಥಿಕ ಇಲಾಖೆ ತಿರಸ್ಕರಿಸಿದೆ. ಮತ್ತೊಮ್ಮೆ ಪ್ರಸ್ತಾವ ಸಲ್ಲಿಸಿ ಒಪ್ಪಿಗೆ ಪಡೆಯಲಾಗುವುದು ಎಂದು ಹೇಳಿದರು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಹೋರಾಟ ಹೆಚ್ಚಾದಾಗ ಸ್ವತಃ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಹ ಪ್ರತಿಕ್ರಿಯಿಸಿದ್ದರು. ಉತ್ತರ ಕನ್ನಡಕ್ಕೇ ಬಂದು ಈ ಬಗ್ಗೆ ಘೋಷಣೆ ಮಾಡುವುದಾಗಿ ತಿಳಿಸಿದ್ದರು. ಆದರೆ ಈವರೆಗೆ ಮುಖ್ಯಮಂತ್ರಿ ಜಿಲ್ಲೆಯತ್ತ ಕಾಲಿಟ್ಟಿಲ್ಲ. ಈ ನಡುವೆ ಜಿಲ್ಲಾಸ್ಪತ್ರೆ ಕಳುಹಿಸಿದ್ದ ಪ್ರಸ್ತಾವನೆಯನ್ನೂ ಅವರದೇ ಅಧೀನದಲ್ಲಿರುವ ಆರ್ಥಿಕ ಇಲಾಖೆಯು ತಿರಸ್ಕರಿಸಿದೆ. ಈ ಎಲ್ಲ ಅಂಶಗಳೂ ಜನರ ಅಸಮಾಧಾನಕ್ಕೆ ಕಾರಣವಾಗಿದೆ.

ಉತ್ತರ ಕನ್ನಡ ಜಿಲ್ಲೆಯವರೇ ಆದ ವಿಧಾನಸಭಾಧ್ಯಕ್ಷರು, ನಾಲ್ವರು ಬಿಜೆಪಿ ಶಾಸಕರು, ಓರ್ವ ಕಾಂಗ್ರೆಸ್ ಶಾಸಕ, ಓರ್ವ ಬಿಜೆಪಿ ಸಚಿವರು ಅಧಿವೇಶನದಲ್ಲಿದ್ದರೂ ಉತ್ತರ ಕನ್ನಡದ ಅಗತ್ಯವಾಗಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಬಗ್ಗೆ ಚಕಾರವೆತ್ತಿಲ್ಲ. ಕಾರವಾರ ಶಾಸಕಿ ರೂಪಾಲಿ ನಾಯ್ಕ ಮಾತನಾಡಲು ಮುಂದಾದರೂ ಕೂಡ ಶಿರಸಿ ಶಾಸಕ ಕಾಗೇರಿಯವರು ವಿಧಾನಸಭಾಧ್ಯಕ್ಷ ಸ್ಥಾನದ ಅಧಿಕಾರದ ಮೂಲಕ ಅವರಿಗೆ ಸಮಸ್ಯೆಯ ಬಗ್ಗೆ ಧ್ವನಿ ಎತ್ತಲು ಬಿಟ್ಟಿಲ್ಲ ಎಂದು ಜನರು ಬೇಸರ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಸ್ವತಃ ಈ ಬಗ್ಗೆ ಗಮನ ಹರಿಸಬೇಕು. ಇಲ್ಲದಿದ್ದರೆ ಉತ್ತರ ಕನ್ನಡದ ಜನರು ಮತ್ತೆ ಪ್ರತಿಭಟನೆ ಆರಂಭಿಸುತ್ತಾರೆ ಎಂದು ಜನಶಕ್ತಿ ವೇದಿಕೆಯ ಹೋರಾಟಗಾರ ಮಾಧವ ನಾಯ್ಕ ಹಾಗೂ ಸ್ಥಳೀಯರಾದ ಸಂತೋಷ ನಾಯ್ಕ ಹೇಳಿದರು.

ಭಟ್ಕಳದ ಶಿರೂರು ಟೋಲ್​ ಬಳಿ ಸಂಭವಿಸಿದ ಅಪಘಾತದಲ್ಲಿ ಆ್ಯಂಬುಲೆನ್ಸ್​ ಉರುಳಿ ನಾಲ್ವರು ಮೃತಪಟ್ಟಿದ್ದರು. ಈ ಘಟನೆಯ ನಂತರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಕೂಗು ಹೆಚ್ಚಾಗಿತ್ತು. ಮುಖ್ಯಮಂತ್ರಿ ಬೊಮ್ಮಾಯಿ ಭಟ್ಕಳಕ್ಕೆ ಬಂದಾಗಲೂ ಸೂಪರ್ ಸ್ಪೆಷಾಲಿಟಿ ಆ್ಪಸ್ಪತ್ರೆಯ ವಿಚಾರ ಪ್ರಸ್ತಾಪಿಸಿದ್ದರು. ಆದರೆ ಈವರೆಗೆ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಸಂಬಂಧಿಸಿದ ಯಾವುದೇ ಮಹತ್ವದ ಬೆಳವಣಿಗೆ ನಡೆದಿಲ್ಲ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada