ಉಡುಪಿ: ಕರ್ನಾಟಕದ ಅನೇಕ ಕಡೆ ಮಳೆ ಜೋರಾಗಿದೆ(Karnataka Rain). ಅದರಲ್ಲೂ ಕರಾವಳಿ ಭಾಗದಲ್ಲಿ(Coastal Karnataka) ಮುಂಗಾರು ಚುರುಕುಗೊಂಡಿದೆ. ಉತ್ತರ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುತ್ತಿರುವ ಕಾರಣ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹಾಗೂ ದಕ್ಷಿಣ ಕನ್ನಡದಲ್ಲಿ ಇಂದು ಕೂಡ ರಜೆ ವಿಸ್ತರಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಭಾರಿ ಮಳೆ ಹಿನ್ನೆಲೆ ಉತ್ತರ ಕನ್ನಡ ಜಿಲ್ಲೆಯ 5 ತಾಲೂಕುಗಳಲ್ಲಿ ರಜೆ ಘೋಷಣೆ ಮಾಡಿ ಉತ್ತರ ಕನ್ನಡ ಡಿಸಿ ಪ್ರಭುಲಿಂಗ್ ಕವಲಿಕಟ್ಟಿ ಆದೇಶ ಹೊರಡಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದ ಕಾರವಾರ, ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ ತಾಲೂಕುಗಳಲ್ಲಿ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಮಳೆಯಿಂದಾಗಿ ಕಾರವಾರದ ಹಬ್ಬುವಾಡದಲ್ಲಿರುವ ಸರಕಾರಿ ಬಸ್ ನಿಲ್ದಾಣ ಡಿಪೋ ಕಚೇರಿಯೊಳಗೆ ಮಳೆ ನೀರು ನುಗ್ಗಿತ್ತು. ಡಿಪೋ ಕಚೇರಿಯ ಎಲೆಕ್ಟ್ರಾನಿಕ್ ವಸ್ತುಗಳಿಗೆ ಹಾನಿಯಾಗಿದ್ದು ದಾಖಲೆಗಳು ನೀರು ಪಾಲಾಗಿವೆ. ಮಳೆಗೆ ಕಾರವಾರ, ಭಟ್ಕಳ ನಗರ ರಸ್ತೆಗಳು ಜಲಾವೃತಗೊಂಡಿವೆ. ಹೆಚ್ಚಿನ ಮಳೆಯಾದಲ್ಲಿ ಸೋನಾರವಾಡ, ಎಲ್.ಐಸಿ ಕಾಲೋನಿ, ಗುನಿಗಿ ವಾಡದ ಮನೆಗಳಿಗೂ ನೀರು ತುಂಬುವ ಆತಂಕ ಎದುರಾಗಿದೆ.
ಇದನ್ನೂ ಓದಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳು, ಪಿಯು ಕಾಲೇಜಿಗೆ ಇಂದು ರಜೆ ನೀಡಿ ಉಡುಪಿ ಡಿಸಿ ಕೂರ್ಮಾರಾವ್ ಆದೇಶಿಸಿದ್ದಾರೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಹಿನ್ನೆಲೆ ನಿನ್ನೆ ರಜೆ ಘೋಷಣೆ ಮಾಡಲಾಗಿತ್ತು. ಇಂದು ಕೂಡ ಮಳೆ ಮುಂದುವರಿದ ಕಾರಣ ರಜೆ ವಿಸ್ತರಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಇಂದು ಕೂಡ ರಜೆ ಘೋಷಿಸಿ ದಕ್ಷಿಣ ಕನ್ನಡ ಡಿಸಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ಕರಾವಳಿ ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಎಚ್ಚರವಹಿಸುವಂತೆ ಸೂಚಿಸಲಾಗಿದೆ. ಜುಲೈ 4 ರಿಂದ ಜುಲೈ 8 ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 45-55 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 7:08 am, Wed, 5 July 23