PSI Recruitment Scam: ಸಿಐಡಿ ವಿಚಾರಣೆ ಎದುರಿಸಿದ್ದ ಗಣಪತಿ ಭಟ್ ನೇಣು ಬಿಗಿದು ಆತ್ಮಹತ್ಯೆ
545 ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಸಿಐಡಿ ವಿಚಾರಣೆ ಎದುರಿಸಿದ್ದ ಗಣಪತಿ ಭಟ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಾರವಾರ: ಇಡೀ ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ 545 ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣಕ್ಕೆ(PSI Recruitment Scam) ಸಂಬಂಧಿಸಿದಂತೆ ವಿಚಾರಣೆ ಎದುರಿಸಿದ್ದ ಗಣಪತಿ ಭಟ್(Ganapathi Bhat) ತೋಟದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಿದ್ದಾಪುರ ತಾಲೂಕಿನ ನೆಲೆಮಾವು ಗ್ರಾಮದ ಗಣಪತಿ ಭಟ್ (63) ಕಳೆದ ಜುಲೈ 13 ರಂದು ಸಿಐಡಿ(CID) ವಿಚಾರಣೆ ಎದುರಿಸಿದ್ದರು. ಶುಕ್ರವಾರ(ಮಾರ್ಚ್ 24) ಹೆರೂರು ಗ್ರಾಮದ ತಟ್ಟೀಕೈ ಎಂ.ಆರ್.ಭಟ್ಟ ಅವರ ತೋಟದ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪಿಎಸ್‍ಐ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿ, ಲಕ್ಷಾಂತರ ರೂಪಾಯಿ ನೀಡಿ ಅಕ್ರಮವಾಗಿ ಎಸ್ಐ ಹುದ್ದೆಗೆ ಆಯ್ಕೆಯಾಗಿದ್ದ ಇಬ್ಬರು ಅಭ್ಯರ್ಥಿಗಳು ಗಣಪತಿ ಭಟ್ ಹೆಸರು ಪ್ರಸ್ತಾಪಿಸಿದ್ದರು. ಈ ಕಾರಣಕ್ಕಾಗಿ ಮಧ್ಯಸ್ಥಿಕೆ ವಹಿಸಿದ್ದರು ಎಂಬ ಆರೋಪದಡಿ ಸಿಐಡಿ ವಿಚಾರಣೆ ನಡೆಸಿತ್ತು. ಆದ್ರೆ ಈಗ ಗಣಪತಿ ಭಟ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: 545 ಪಿಎಸ್ಐ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣ; ಗಣಪತಿ ಭಟ್ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿರುವ ಸಿಐಡಿ
ನೆಲೆಮಾಂವ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿದ್ದ ಅವರು ಈ ಹಿಂದೆ ಅಣಲೆಬೈಲ್ ಗ್ರಾಮ ಪಂಚಾಯ್ತಿ ಸದಸ್ಯರಾಗಿ ಕೆಲಸ ಮಾಡಿದ್ದರು. ಹಲವು ರಾಜಕಾರಣಿಗಳು, ಪೊಲೀಸ್ ಅಧಿಕಾರಿಗಳೊಂದಿಗೆ ಉತ್ತಮ ಸಂಬಂಧ ಹೊಂದಿದ್ದರು. ಅಧಿಕಾರಿಗಳ ವರ್ಗಾವಣೆ ಸೇರಿದಂತೆ ಹಲವು ವಿಷಯಗಳಲ್ಲಿ ಬ್ರೋಕರಿಂಗ್ ಕೆಲಸ ಮಾಡುತ್ತಿದ್ದರು ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ಸಿಕ್ಕಿದೆ.
ಮೃತರಿಗೆ ಪತ್ನಿ, ಪುತ್ರ ಇದ್ದಾರೆ. ಗಣಪತಿ ಭಟ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಸಿದ್ದಾಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 8:29 am, Sat, 25 March 23