ಬೆಂಗಳೂರು, ಜೂ. 01: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣ ಪ್ರಕರಣಕ್ಕೆ ಸಂಬಂಧ ಇಬ್ಬರು ಅಧಿಕಾರಿಗಳನ್ನು ವಿಶೇಷ ತನಿಖಾ ದಳ (SIT) ಬಂಧಿಸಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ನಿಗಮದ ಲೆಕ್ಕಾಧಿಕಾರಿ ಪರಶುರಾಮ್ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಿದ್ದಾರೆ.
ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ ಎಸ್ಐಟಿ ಅಧಿಕಾರಿಗಳ ಮುಂದೆ ಸಚಿವರ ಹೆಸರು ಹೇಳಿದರೇ, ಬಿ. ನಾಗೇಂದ್ರ ಅವರು ರಾಜೀನಾಮೆ ನೀಡುವುದು ನಿಶ್ಚಿತವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿ. ನಾಗೇಂದ್ರ ಅವರಿಗೆ “ಎಸ್ಐಟಿ ಮುಂದೆ ನಿಮ್ಮ ಹೆಸರು ಪ್ರಸ್ತಾಪವಾದರೆ ರಾಜೀನಾಮೆ ಪಡೆಯುವುದಾಗಿ” ಹೇಳಿದ್ದಾರೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ. ಹೀಗಾಗಿ ಸಚಿವ ನಾಗೇಂದ್ರ ಅವರಿಗೆ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ ತಲೆ ನೋವಾಗಿದ್ದಾರೆ. ಈ ಪ್ರಕರಣದ ತನಿಖೆಯನ್ನು ಸರ್ಕಾರ ಸಿಬಿಐಗೆ ವಹಿಸುವ ಸಾಧ್ಯತೆ ಇದೆ ಇದೆ.
ಇದನ್ನೂ ಓದಿ: ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನ: ನಾಗೇಂದ್ರ ರಾಜಿನಾಮೆಗೆ ಸಿಎಂ ಸೂಚನೆ
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಸುಮಾರು 80 ರಿಂದ 85 ಕೋಟಿ ಅನುದಾನ ದುರ್ಬಳಕೆಯಾಗಿದೆ. ಈ ಅವ್ಯವಹಾರದಿಂದ ಮನನೊಂದು ನಿಗಮದ ಅಧೀಕ್ಷಕ ಪ್ರಾಮಾಣಿಕ ಅಧಿಕಾರಿ ಚಂದ್ರಶೇಖರ್ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಡೆತ್ನೋಟ್ ನಲ್ಲಿ ಸಚಿವರ ಮೌಖಿಕ ಆದೇಶದಂತೆ ಅವ್ಯಹಾರ ನಡೆದಿದೆ ಎಂದು ಚಂದ್ರಶೇಖರ ನಮೂದಿಸಿದ್ದರು.
ಪ್ರಕರಣದ ತನಿಖೆಯನ್ನು ಎಸ್ಐಟಿ ನಡೆಸುತ್ತಿದೆ. ಇತ್ತ ಯುನಿಯನ್ ಬ್ಯಾಂಕ್ ಆಫ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕರು ಸಿಬಿಐ ಪ್ರಾದೇಶಿಕ ಕಚೇರಿಗೆ ದೂರು ನೀಡಿದ್ದಾರೆ.
ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರ ಪ್ರಕರಣವನ್ನು ಮುಂದಿಟ್ಟುಕೊಂಡು ರಾಜ್ಯ ಬಿಜೆಪಿ ನಾಯಕರು ಸರ್ಕಾರ ಮೇಲೆ ಒತ್ತಡ ಹೇರಿದ್ದರು. ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣದಲ್ಲಿ ಕೆಎಸ್ ಈಶ್ವರಪ್ಪ ರಾಜಿನಾಮೆ ನೀಡಿದ್ದರು. ಅದೇ ರೀತಿಯ ಘಟನೆ ಈಗ ನಡೆದಿದ್ದು, ಸಚಿವ ಬಿ. ನಾಗೇಂದ್ರ ರಾಜಿನಾಮೆಗೆ ಬಿಜೆಪಿ ಮತ್ತು ಜೆಡಿಎಸ್ ಆಗ್ರಹಿಸಿದ್ದರು. ಒಂದು ವೇಳೆ ರಾಜಿನಾಮೆ ನೀಡದಿದ್ದರೆ ಜೂನ್ 6 ರಂದು ರಾಜ್ಯಾದ್ಯಂತ ಪ್ರತಿಭಟನೆ ಮಾಡುವುದಾಗಿ ಬಿಜೆಪಿ ಕರೆ ನೀಡಿದೆ.
Published On - 10:59 am, Sat, 1 June 24