ವಿಜಯಪುರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಫೇಸ್‌ಬುಕ್‌ನಲ್ಲಿ ಚಾಲೆಂಜ್ ಮಾಡಿದ್ದ ವಿಜಯಪುರದ ಪೊಲೀಸ್ ಪೇದೆ ಅಮಾನತುಗೊಂಡಿದ್ದಾರೆ.
ಅಮಾನತು ಮಾಡಿ ಆದೇಶ ವಿಜಯಪುರ ಎಸ್ ಪಿ ಎಚ್ ಡಿ ಆನಂದಕುಮಾರ್ ಇಂದು(ಅ.8) ಆದೇಶ ಹೊರಡಿಸಿದ್ದಾರೆ. ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಪೋಸ್ಟ್ ಹಾಕಿದ್ದ ರಾಜಶೇಖರ ಖಾನಾಪುರ ಅಮಾನತುಗೊಂಡ ಪೇದೆ. ಈತ ವಿಜಯಪುರ ಗ್ರಾಮಾಂತರ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ರು.
ಪೊಲೀಸರಿಗೆ ಬೈಯ್ಯುವ ನೀನು ಪೊಲೀಸ್ ಎಸ್ಕಾರ್ಟ್ ಇಲ್ಲದೆ ಮನೆಗೆ ಹೋಗು ನೋಡೋಣ ಎಂದು ಫೇಸ್‌ಬುಕ್‌ನಲ್ಲಿ ವಿಡಿಯೋ ಮೂಲಕ ಸವಾಲು ಹಾಕಿದ್ದರು. ಇದು ಸಾಮಾಜಿಕ ಜಾಲಾತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ಅಲ್ಲದೇ ಸಿದ್ದರಾಮಯ್ಯನವರ ಅಭಿಮಾನಿಗಳು ಪೇದೆಯನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿದ್ದರು. ಈ ಬಗ್ಗೆ ಪೊಲೀಸರಿಗೆ ದೂರು ಸಹ ನೀಡಲಾಗಿತ್ತು.
ಇದನ್ನೂ ಓದಿ: ಬೆಟ್ಟಿಂಗ್ ಅಡ್ಡೆ ಮೇಲೆ ಪೊಲೀಸ್ ದಾಳಿ; ಸೂಕ್ತ ತನಿಖೆ ನಡೆಸದ ಪಿಎಸ್ಐ ಸೇರಿ ಐವರು ಅಮಾನತು
ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ರಾಜ್ಯದಲ್ಲಿ ಭಾರತ್ ಜೋಡೋ ಯಾತ್ರೆ ಆರಂಭವಾದ ದಿನ ಕೆಪಿಸಿಸಿ ವತಿಯಿಂದ ಆಯೋಜಿಸಲಾಗಿದ್ದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಸಿದ್ದರಾಮಯ್ಯ, ಇನ್ನು ಆರು ತಿಂಗಳ ನಂತರ ರಾಜ್ಯದಲ್ಲಿ ಸರಕಾರ ಬದಲಾಗುತ್ತದೆ, ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ. ಕೆಲವು ಪೊಲೀಸರಿಗೆ ಹೇಳಲು ಬಯಸುತ್ತೇನೆ, ನೀವು ಬಿಜೆಪಿ ಜತೆ ಶಾಮೀಲಾದರೆ ನಿಮಗೆ ತಕ್ಕ ಪಾಠ ಕಲಿಸುವ ಕಾಲ ಬರಲಿದೆ ಎಂದು ಎಚ್ಚರಿಕೆ ಕೊಟ್ಟಿದ್ದರು.
ಸಿದ್ದರಾಮಯ್ಯ ಅಭಿಮಾನಿಗಳು ಸರಕಾರಿ ಹುದ್ದೆಯಲ್ಲಿದ್ದು ಪಕ್ಷಾತೀತವಾಗಿ ಕೆಲಸ ಮಾಡುವುದನ್ನು ಬಿಟ್ಟು, ಸಾಮಾಜಿಕ ಜಾಲಾತಾಣಗಳಲ್ಲಿ ಬಿಜೆಪಿ ಪರ ಹೇಳಿಕೆ ನೀಡಿರುವ ಪೇದೆ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದರು.
ಕಾನ್‌ಸ್ಟೆಬಲ್ ತಮ್ಮ ಫೇಸ್‌ಬುಕ್‌ನಲ್ಲಿ ಕಾಮೆಂಟ್ ಮಾಡಿರುವ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದೆ. ಈ ಸಂಬಂಧ ಇದುವರೆಗೆ ಯಾರೂ ದೂರು ಕೊಟ್ಟಿಲ್ಲ. ಕೊಟ್ಟರೆ ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ್ ತಿಳಿಸಿದ್ದರು.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:12 pm, Sat, 8 October 22