ಸಿದ್ದರಾಮಯ್ಯನವರೇ ದಯವಿಟ್ಟು ಡಿಕೆ ಶಿವಕುಮಾರ್​ಗೆ ಸಿಎಂ ಸ್ಥಾನ ಬಿಟ್ಟುಕೊಡಿ: ಚಂದ್ರಶೇಖರಶ್ರೀ ಮನವಿ

| Updated By: Ganapathi Sharma

Updated on: Jun 27, 2024 | 2:33 PM

ರಾಜ್ಯ ರಾಜಕೀಯದಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ವಿಚಾರ ಒಂದೆಡೆ ಚರ್ಚೆಗೆ ಗ್ರಾಸವಾಗಿದ್ದರೆ, ಇದೀಗ ಸಿಎಂ ಹುದ್ದೆ ವಿಚಾರದ ಚರ್ಚೆಯೇ ಮತ್ತೆ ಮುನ್ನೆಲೆಗೆ ಬರುವ ಸುಳಿವು ದೊರೆತಿದೆ. ಇದಕ್ಕೆ ಕಾರಣ, ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಒಕ್ಕಲಿಗ ಸ್ವಾಮೀಜಿಯೊಬ್ಬರು ಸಿದ್ದರಾಮಯ್ಯಗೆ ಮಾಡಿದ ಮನವಿ. ಆ ಕುರಿತ ವಿವರ ಇಲ್ಲಿದೆ.

ಬೆಂಗಳೂರು, ಜೂನ್ 27: ದಯವಿಟ್ಟು ಡಿಸಿಎಂ ಡಿಕೆ ಶಿವಕುಮಾರ್​ಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ಸ್ವಾಮೀಜಿಯೊಬ್ಬರು ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ ಅಪರೂಪದ ವಿದ್ಯಮಾನಕ್ಕೆ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಗುರುವಾರ ಸಾಕ್ಷಿಯಾಯಿತು. ಸಮಾರಂಭದಲ್ಲಿ ಭಾಗವಹಿಸಿದ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರಶ್ರೀ ವೇದಿಕೆ ಮೇಲೆಯೇ ಸಿದ್ದರಾಮಯ್ಯರನ್ನು ಉದ್ದೇಶಿಸಿ, ನಿಮಗೆ ಅನುಭವ ಇದೆ, ಈಗ ಡಿಕೆ ಶಿವಕುಮಾರ್​​ಗೆ ಅವಕಾಶ ಮಾಡಿಕೊಡಿ ಎಂದರು.

ಸಿದ್ದರಾಮಯ್ಯನವರು ಮನಸ್ಸು ಮಾಡಿದರೆ ಮಾತ್ರ ಇದು ಸಾಧ್ಯ. ಹಾಗಾಗಿ ಸಿಎಂ ಸ್ಥಾನ ಡಿಕೆ ಶಿವಕುಮಾರ್​​ಗೆ ಅವರು ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂದು ಶ್ರೀಗಳು ಮನವಿ ಮಾಡಿದರು.

‘ಸಿದ್ದರಾಮಯ್ಯ ಸುಮ್ಮನೆ ಇದ್ದು ಅಧಿಕಾರಕ್ಕೆ ಬಂದರು’

ಏತನ್ಮಧ್ಯೆ ಬೆಂಗಳೂರಿನಲ್ಲಿ ‘ಟಿವಿ9’ಗೆ ಪ್ರತಿಕ್ರಿಯೆ ನೀಡಿದ ಚಂದ್ರಶೇಖರ ಸ್ವಾಮೀಜಿ, ಡಿಕೆ ಶಿವಕುಮಾರ್​ ಸಿಎಂ ಆಗಬೇಕಾಗಿರುವುದು ಧರ್ಮ. ಅವರು ಹಣ ಖರ್ಚು ಮಾಡಿದ್ದಾರೆ, ಹೋರಾಟ ಮಾಡಿದ್ದಾರೆ. ಸಿದ್ದರಾಮಯ್ಯರು ಸುಮ್ಮನೆ ಇದ್ದು ಅಧಿಕಾರಕ್ಕೆ ಬಂದರು ಎಂದು ಹೇಳಿದರು. ಸಿದ್ದರಾಮಯ್ಯ ಬಿಟ್ಟರೆ ಡಿಕೆ ಶಿವಕುಮಾರ್​​ಗೆ ಸಿಎಂ ಆಗುವ ಅರ್ಹತೆ ಇದೆ ಎಂದೂ ಅವರು ಹೇಳಿದರು.

ಸಿದ್ದರಾಮಯ್ಯ ಹೇಳಿದ್ದೇನು?

ಡಿಕೆ​ ಶಿವಕುಮಾರ್​​ಗೆ ಸಿಎಂ ಸ್ಥಾನ ಕೊಡಬೇಕೆಂಬ ಶ್ರೀಗಳ ಮನವಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಎಲ್ಲವನ್ನೂ ಪಕ್ಷದ ಹೈಕಮಾಂಡ್​ ನಿರ್ಧಾರ ಮಾಡಲಿದೆ. ಹೈಕಮಾಂಡ್​ ತೀರ್ಮಾನದಂತೆ ನಾವು ನಡೆದುಕೊಳ್ಳುತ್ತೇವೆ ಎಂದರು.

ಇನ್ನು ಶ್ರೀಗಳ ಮನವಿ ಬಗ್ಗೆ ಪ್ರತಿಕ್ರಿಯೆ ನೀಡಲು ಡಿಸಿಎಂ ಡಿಕೆ ಶಿವಕುಮಾರ್ ನಿರಾಕರಿಸಿದ್ದಾರೆ.ಯಾವುದೇ ಪ್ರತಿಕ್ರಿಯೆ ನೀಡದೆ ತೆರಳಿದ್ದಾರೆ.

ಇದನ್ನೂ ಓದಿ: ಡಿಸಿಎಂ ಹುದ್ದೆ ಬಗ್ಗೆ ಬಹಿರಂಗ ಹೇಳಿಕೆ ಬೇಡ: ಸಚಿವರಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಈ ಎಲ್ಲ ಬೆಳವಣಿಗೆಗಳ ಮಧ್ಯೆ ಇದೀಗ ಚಂದ್ರಶೇಖರಶ್ರೀ ಹೇಳಿಕೆ ಭಾರಿ ಚರ್ಚೆಗೆ ಗ್ರಾಸವಾಗುತ್ತಿದೆ. ರಾಜಕೀಯ ಮತ್ತು ಸಾರ್ವಜನಿಕ ವಲಯದಲ್ಲಿ ಸ್ವಾಮೀಜಿ ಹೇಳಿಕೆ ಬಗ್ಗೆ ಚರ್ಚೆ ಆರಂಭವಾಗಿದೆ.

ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ವಿಚಾರವಾಗಿ ಚರ್ಚೆ ನಡೆಯುತ್ತಿದೆ. ಇದಕ್ಕೆ ಫುಲ್​ಸ್ಟಾಪ್ ಹಾಕಲು ಸಿಎಂ ಸಿದ್ದರಾಮಯ್ಯರ ಖುದ್ದು ಅಖಾಡಕ್ಕಿಳಿದು ಬಹಿರಂಗ ಹೇಳಿಕೆಗಳನ್ನು ನೀಡದಂತೆ ಸಚಿವರು, ಶಾಸಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಸ್ವಾಮೀಜಿ ಸಿದ್ದರಾಮಯ್ಯಗೆ ಮನವಿ ಮಾಡಿದ ವಿದ್ಯಮಾನ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:06 pm, Thu, 27 June 24