Weather Forecast: ಕರ್ನಾಟಕದಲ್ಲಿ ಮುಂದಿನ ಕೆಲ ದಿನ ಭಾರೀ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ
Monsoon 2026: ಕರ್ನಾಟಕದ ಕರಾವಳಿ ಮತ್ತು ಒಳನಾಡು ಜಿಲ್ಲೆಗಳಲ್ಲಿ ಜೂನ್ 1 ರಿಂದ 5 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ ಎಂದು KSNDMC ತಿಳಿಸಿದೆ.

ಬೆಂಗಳೂರು, ಜೂನ್ 01: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ, ಜೂನ್ 1 ರಿಂದ 4ರವರೆಗೆ ರಾಜ್ಯದ ಒಳನಾಡು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಇದೇ ರೀತಿಯಾಗಿ ಜೂನ್ 3 ರಿಂದ 5ರವರೆಗೆ ಕರಾವಳಿ ಜಿಲ್ಲೆಗಳಲ್ಲೂ ಸಹ ಮಳೆಯಾಗುವ ಸಾಧ್ಯತೆ ಇದೆ.
ಮುಖ್ಯಾಂಶಗಳು
- ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಕರಾವಳಿ ಮತ್ತು ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
- ರಾಜ್ಯದಲ್ಲಿ ಮಳೆ ಜೊತೆಗೆ ತಾಪಮಾನ ಏರಿಕೆ
- ಮುಂಗಾರು ಮಳೆ ಮತ್ತು ಹವಾಮಾನದಲ್ಲಿ ಬದಲಾವಣೆಗಳು
ಯೆಲ್ಲೋ ಅಲರ್ಟ್ ಘೋಷಣೆ
ಈ ದಿನಗಳಂದು ರಾಜ್ಯದ ಪ್ರತ್ಯೇಕ ಪ್ರದೇಶಗಳಲ್ಲಿ ಸುಮಾರು 64.5 ಮಿ.ಮೀನಿಂದ 115.5 ಮಿ.ಮೀ ನಷ್ಟು ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ. ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಹಾಗೂ ರೈತರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಸುರಕ್ಷಿತವಾಗಿರುವಂತೆ ಕೋರಲಾಗಿದೆ.
KSNDMC ಟ್ವೀಟ್
#ಮಳೆ #ಮುನ್ನೆಚ್ಚರಿಕೆ : #rainfall #warning for #Karnataka #Lightning #Thunderstorm #KSNDMC@KarnatakaVarthe #KarnatakaRains#SouthWestMonsoon #Monsoon2026 pic.twitter.com/h7hk3D0Oax
— Karnataka State Natural Disaster Monitoring Centre (@KarnatakaSNDMC) June 1, 2026
ಇನ್ನು ರಾಜ್ಯದಲ್ಲಿ ಮುಂದಿನ 3 ದಿನಗಳವರೆಗೆ ಗರಿಷ್ಠ ತಾಪಮಾನ ಹೆಚ್ಚಾಗಲಿದ್ದು, ಒಣ ಹವಾಮಾನ ಮುಂದುವರಿಯುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ನೀಡಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ಬೇಗೆ ಹೆಚ್ಚಿರಲಿದೆ. ಆದರೆ, ಮಧ್ಯಾಹ್ನದ ನಂತರ ಹವಾಮಾನದಲ್ಲಿ ಏರುಪೇರಾಗಲಿದ್ದು, ಗಾಳಿಯ ದಿಕ್ಕಿನಲ್ಲಿನ ಬದಲಾವಣೆಯಿಂದಾಗಿ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಲಿದೆ.
ಇದನ್ನೂ ಓದಿ: Karnataka Weather Forecast: ಬೆಂಗಳೂರಿನಲ್ಲಿಂದು ವರುಣನ ಆರ್ಭಟ ಜೋರು! 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಜೂನ್ 1 ರಿಂದ 3ರವರೆಗೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ದಾಖಲಾಗುವ ಸಾಧ್ಯತೆಯಿದ್ದು, ಪ್ರತ್ಯೇಕ ಸ್ಥಳಗಳಲ್ಲಿ ತಾಪಮಾನವು 34 ಡಿಗ್ರಿ ಸೆಲ್ಸಿಯಸ್ನಿಂದ 38 ಡಿಗ್ರಿ ಸೆಲ್ಸಿಯಸ್ವರೆಗೆ ಇರಲಿದೆ. ಅದೇ ರೀತಿಯಾಗಿ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಬೆಳಿಗ್ಗೆ ತಾಪಮಾನವು ತುಸು ಕಡಿಮೆಯಿರಲಿದ್ದು, ಸರಾಸರಿ 28 ಡಿಗ್ರಿ ಸೆಲ್ಸಿಯಸ್ನಿಂದ 32 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.




