ಬೆಂಗಳೂರು: 1-9ನೇ ತರಗತಿವರೆಗೆ ಪರೀಕ್ಷೆ ನಡೆಯಬೇಕೇ ಬೇಡವೇ ಎಂಬ ಚರ್ಚೆ ನಡೆಯುತ್ತಿದೆ. ಈ ಸಂಬಂಧ ಇಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು, ಖಾಸಗಿ ಶಾಲಾ ಒಕ್ಕೂಟ ಮತ್ತು ಪೋಷಕರ ಜತೆ ಸಭೆ ನಡೆಸಲಾಗಿದೆ. ಇನ್ನೆರಡು ದಿನಗಳಲ್ಲಿ ಪರೀಕ್ಷೆಗಳ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
6-9ನೇ ತರಗತಿಗಳು ಕೋವಿಡ್ ಸೋಂಕಿನ ಹೆಚ್ಚಳವಾದ ಹಿನ್ನೆಲೆಯಲ್ಲಿ ಏಪ್ರಿಲ್ 20ರವರೆಗೂ ಬಂದ್ ಆಗಿರಲಿವೆ. ಇಂದಿನ ಸಭೆಯಲ್ಲಿ ಒಟ್ಟು 44 ಜನ ಭಾಗಿಯಾಗಿದ್ದರು. ಎಲ್ಲರಿಗೂ ಅಭಿಪ್ರಾಯ ಹಂಚಿಕೊಳ್ಳಲು ಮುಕ್ತ ಅವಕಾಶ ನೀಡಲಾಗಿತ್ತು. ಅವರೆಲ್ಲರ ಅಭಿಪ್ರಾಯವನ್ನು ಶಿಕ್ಷಣ ಇಲಾಖೆ ತಜ್ಞರು ಆಲಿಸಿದ್ದಾರೆ. ವಿದ್ಯಾರ್ಥಿಗಳಿಗೆ ಮೌಲ್ಯಾಂಕನ ಮಾಡಬೇಕೆ?, ಆರ್ಟಿಇ ಆಕ್ಟ್ ಅಡಿ ಪರೀಕ್ಷೆ ನಡೆಸಬೇಕೇ ಎಂಬುದರ ಬಗ್ಗೆ ಇನ್ನೆರಡು ದಿನಗಳಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ. ಜತೆಗೆ ಪುಸ್ತಕ ಖರೀದಿ, ಆರ್ಟಿಇ ಹಣ ಮರುಪಾವತಿ ಕುರಿತು ಮುಂದಿನ ದಿನಗಳಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಅವರು ತಿಳಿಸಿದರು.
ಸಭೆಯಲ್ಲಿ ಪಾಲ್ಗೊಂಡಿದ್ದ ರುಪ್ಸಾ ಸಂಘಟನೆಯ ಪ್ರತಿನಿಧಿಗಳು 2020-21ನೇ ಸಾಲಿಗೆ 1ರಿಂದ 9ನೇ ತರಗತಿಗಳಿಗೆ ಮೌಲ್ಯಾಂಕನ ಪರೀಕ್ಷೆ ವೇಳಾಪಟ್ಟಿ ನಿಗದಿಪಡಿಸಬೇಕು. ಏಪ್ರಿಲ್ 14ರಿಂದ 1ರಿಂದ 9ನೇ ತರಗತಿವರೆಗೆ ಪರೀಕ್ಷೆ ನಡೆಸುವಂತೆ ರುಪ್ಸಾ ಸಂಘಟನೆ ಮನವಿ ಮಾಡಿತು. ಏಪ್ರಿಲ್ 22ಕ್ಕೆ ಪರೀಕ್ಷೆ ಮುಗಿಸಿ, ಏಪ್ರಿಲ್ 30ರೊಳಗೆ ಫಲಿತಾಂಶ ಪ್ರಕಟಿಸುವಂತೆ ಸಂಘಟನೆ ಕೇಳಿಕೊಂಡಿತು. 2021-22ನೇ ಶೈಕ್ಷಣಿಕ ವೇಳಾಪಟ್ಟಿಯನ್ನು ತಕ್ಷಣ ಪ್ರಕಟಿಸಬೇಕು.
ಮೇ 1ರಿಂದಲೇ ಶೈಕ್ಷಣಿಕ ವರ್ಷ ಪ್ರಾರಂಭಿಸುವಂತೆ ಸಂಘಟನೆ ಮನವಿ ಮಾಡಿತು.
ಈಗಾಗಲೇ ಸ್ಥಗಿತಗೊಂಡಿದೆ 6ರಿಂದ 9ನೇ ತರಗತಿ
ಬೆಂಗಳೂರು ನಗರದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಮುಂದಿನ ಆದೇಶ ನೀಡುವವರೆಗೆ 6ರಿಂದ 9ನೇ ತರಗತಿಗಳನ್ನು ಭೌತಿಕವಾಗಿ ಸ್ಥಗಿತಗೊಳಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಶಿಕ್ಷಣ ಸಚಿವ ಸುರೇಶ್ ಕುಮಾರ್ ಏಪ್ರಿಲ್ 1ರಂದು ತಿಳಿಸಿದ್ದರು. 10ನೇ ತರಗತಿಗಳು ಎಂದಿನಂತೆ ಮುಂದುವರಿಯಲಿವೆ. ಆದರೆ, ವಿದ್ಯಾರ್ಥಿಗಳು ಶಾಲೆಗೆ ಬರುವುದು ಕಡ್ಡಾಯವಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ. ರಾಜ್ಯದ ಉಳಿದೆಡೆ ಸದ್ಯ ಈಗ ಜಾರಿಯಲ್ಲಿರುವ ವ್ಯವಸ್ಥೆಯೇ ಮುಂದುವರೆಯಲಿದೆ. ಈ ನೂತನ ಆದೇಶ ಸದ್ಯ ಕೇವಲ ಬೆಂಗಳೂರು ನಗರ ವ್ಯಾಪ್ತಿಗೆ ಮಾತ್ರ ಒಳಪಡಲಿದೆ ಎಂದು ಪ್ರಾಥಮಿಕ ಶಿಕ್ಷಣ ಸಚಿವರು ಹೇಳಿದ್ದರು.
ಶಾಲೆಗಳಲ್ಲಿ ವಿದ್ಯಾರ್ಥಿಗಳ ಆರೋಗ್ಯ ಸ್ಥಿತಿಯ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದ್ದು, ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದರು.
ಕಡ್ಡಾಯ ಶಿಕ್ಷಣ ಕಾಯ್ದೆ ಅವಕಾಶಗಳಡಿಯಲ್ಲಿ ಶಾಲೆಗಳು ನಡೆಸಬೇಕಾದ ಮೌಲ್ಯಾಂಕನ ಪರೀಕ್ಷೆಗಳ ಕುರಿತು ಮುಂದಿನ ದಿನಗಳಲ್ಲಿ ಅಗತ್ಯ ನಿರ್ದೇಶನಗಳನ್ನು ನೀಡಲಾಗುವುದು. ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಹಿತರಕ್ಷಣೆಗೆ ಬದ್ಧವಾಗಿದೆ. ಹೀಗಾಗಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 6ರಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳನ್ನು ತೆಗೆದುಕೊಳ್ಳುವುದನ್ನು ನಿಲ್ಲಿಸಲಾಗುವುದು ಎಂದು ಅವರು ಈಗಾಗಲೇ ತಿಳಿಸಿದ್ದಾರೆ.
ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ 1ರಿಂದ 8ನೆ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೇ ಪಾಸ್