ಬೆಂಗಳೂರು: ಕೆಎಸ್ಆರ್ಟಿಸಿ ಬಸ್ಗಳಲ್ಲಿ (KSRTC Bus) ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡುವ ‘ಶಕ್ತಿ’ ಯೋಜನೆಗೆ (Shakti Scheme) ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಸರ್ಕಾರ ಸೋಮವಾರ ಹೊರಡಿಸಿದೆ. ಅದರಂತೆ, ಮಹಿಳೆಯರು ಉಚಿತವಾಗಿ ಪ್ರಯಾಣಿಸಬೇಕಿದ್ದರೆ ‘ಶಕ್ತಿ ಸ್ಮಾರ್ಟ್‌ಕಾರ್ಡ್’ (Shakti smart card) ಹೊಂದುವುದು ಕಡ್ಡಾಯವಾಗಿರಲಿದೆ. ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿಗಳನ್ನು ಪಡೆದು, ಶಕ್ತಿ ಸ್ಮಾರ್ಟ್ ಕಾರ್ಡ್‌ಗಳನ್ನು ಪಡೆಯಬಹುದು. ಕಾರ್ಡ್‌ಗಳನ್ನು ವಿತರಿಸುವ ಪ್ರಕ್ರಿಯೆಯನ್ನು ಮುಂದಿನ ಮೂರು ತಿಂಗಳೊಳಗಾಗಿ ಪೂರ್ಣಗೊಳಿಸತಕ್ಕದ್ದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಶಕ್ತಿ ಸ್ಮಾರ್ಟ್‌ಕಾರ್ಡ್ ಅನ್ನು ವಿತರಿಸುವವರೆಗೆ ಭಾರತ ಸರ್ಕಾರ/ ಕರ್ನಾಟಕ ಸರ್ಕಾರದ ಇಲಾಖೆ / ಸರ್ಕಾರಿ ಸ್ವಾಮ್ಯದ ಕಛೇರಿಗಳಿಂದ ವಿತರಿಸಿರುವ ಭಾವಚಿತ್ರ ಹಾಗೂ ವಾಸದ ವಿಳಾಸವಿರುವ ಗುರುತಿನ ಚೀಟಿಗಳನ್ನು ಉಚಿತ ಟಿಕೆಟ್ ವಿತರಿಸುವ ಸ೦ದರ್ಭದಲ್ಲಿ ಪರಿಗಣಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಾಲ್ಕು ಸಂಸ್ಥೆಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದ್ದು, ಕೆಲವೊಂದು ಷರತ್ತುಗಳೊಂದಿಗೆ ಸೌಲಭ್ಯ ಒದಗಿಸಲು ಆದೇಶಿಸಲಾಗಿದೆ. ರಾಜ್ಯದ ನಾಲ್ಕು ನಿಗಮಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕ.ರಾ.ರ.ಸಾ.ನಿಗಮ), ಬೆ೦ಗಳೂರು ಮಹಾನಗರ ಸಾರಿಗೆ ಸ೦ಸ್ಥೆ (ಬೆ೦.ಮ.ಸಾ.ಸ೦ಸ್ಥೆ), ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸ೦ಸ್ಥೆ (ವಾ.ಕ.ರ.ಸಾ.ಸ೦ಸ್ಥೆ) ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ (ಕ.ಕ.ರ.ಸಾ.ನಿಗಮ) ಸಾರಿಗೆಗಳಲ್ಲಿ ಕರ್ನಾಟಕ ರಾಜ್ಯಾದ್ಯಂತ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದೆ. ನಗರ, ಸಾಮಾನ್ಯ ಹಾಗೂ ವೇಗದೂತ (ಐ/65) ಬಸ್ಸುಗಳಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಮಹಿಳೆಯರು (ವಿದ್ಯಾರ್ಥಿನಿಯರು ಸೇರಿದಂತೆ) ಮತ್ತು ಲಿಂಗತ್ವ ಅಲ್ಪಸಂಖ್ಯಾತರು ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ಅಧಿಸೂಚನೆ ತಿಳಿಸಿದೆ.
ಕೆಎಸ್ಆರ್ಟಿಸಿ, ಬಿಎಂಟಿಸಿ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸ೦ಸ್ಥೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಬಸ್ಗಳಲ್ಲಿ ಕರ್ನಾಟಕ ರಾಜ್ಯಾದ್ಯಂತ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದೆ.
ಇದನ್ನೂ ಓದಿ: Shakti Scheme: ಜೂನ್ 11ರಿಂದ ಮಹಿಳೆಯರಿಗೆ ಉಚಿತ ಪ್ರಯಾಣ; ಸಿದ್ದರಾಮಯ್ಯ ಘೋಷಣೆ, ಯಾವೆಲ್ಲ ಬಸ್ಗಳಲ್ಲಿ?
ಜೂನ್ 2ರಂದು ಸಚಿವ ಸಂಪುಟ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಕ್ತಿ ಯೋಜನೆಯ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದರು. ಶಕ್ತಿ’ ಯೋಜನೆಯನ್ನು ಜೂನ್ 11ರಿಂದ ಆರಂಭ ಮಾಡಲಾಗುವುದು ಎಂದು ಅವರು ಹೇಳಿದ್ದರು. ಅದರಂತೆ ಇದೀಗ ಅಧಿಕೃತ ಆದೇಶವನ್ನು ಸರ್ಕಾರ ಹೊರಡಿಸಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:43 pm, Mon, 5 June 23