ಶಿವಮೊಗ್ಗ, ಜನವರಿ 12: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಐದನೇ ಉಚಿತ ಗ್ಯಾರಂಟಿ ಯೋಜನೆ ಯುವ ನಿಧಿಗೆ (Yuva Nidhi scheme) ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶುಕ್ರವಾರ ಶಿವಮೊಗ್ಗದ ಫ್ರೀಡಂ ಪಾರ್ಕ್ನಲ್ಲಿ ಚಾಲನೆ ನೀಡಿದರು. ಬಿಜೆಪಿ ಭದ್ರಕೋಟೆ ಶಿವಮೊಗ್ಗದಲ್ಲೇ ಯೋಜನೆಗೆ ಚಾಲನೆ ನೀಡಲಾಗಿದ್ದು, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸೇರಿದಂತೆ ವಿವಿಧ ಸಚಿವರು, ಪಕ್ಷದ ನಾಯಕರು ಸಮಾರಂಭದಲ್ಲಿ ಹಾಜರಿದ್ದರು. ಯುವ ನಿಧಿ ಯೋಜನೆಗೂ ಚಾಲನೆ ನೀಡುವ ಮೂಲಕ ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವದಲ್ಲಿ ಘೋಷಿಸಿದ್ದ ಐದೂ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿದಂತಾಗಿದೆ.
ಚಿತ್ರದುರ್ಗ, ಹಾವೇರಿ, ಚಿಕ್ಕಮಗಳೂರು, ದಾವಣಗೆರೆ, ಉತ್ತರ ಕನ್ನಡ ಸೇರಿದಂತೆ ಬೇರೆ ಬೆರೆ ಜಿಲ್ಲೆಗಳಿಂದ ಆಗಮಿಸಿದ ಲಕ್ಷಾಂತರ ಜನ ಯುವ ನಿಧಿ ಯೋಜನೆಗೆ ಚಾಲನೆ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
ಇದೇ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಚುನಾವಣೆಗಾಗಿ ಯುವನಿಧಿ ಯೋಜನೆಯನ್ನು ಜಾರಿಗೆ ತಂದಿಲ್ಲ. ನಿರುದ್ಯೋಗಿ ಯುವಕರಿಗೆ ನೆರವಾಗಬೇಕೆಂಬ ಉದ್ದೇಶದಿಂದಷ್ಟೇ ಈ ಯೋಜನೆ ಜಾರಿಗೊಳಿಸಲಾಗಿದೆ. ದೇಶದಲ್ಲಿ ದಿನಬಳಕೆ, ಪೆಟ್ರೋಲ್, ಡಿಸೇಲ್ ದರ ಏರಿಕೆಯಾಗಿದೆ. ಜನಸಮಾನ್ಯರಿಗೆ ಖರೀದಿಸುವ ಸಾಮರ್ಥ್ಯವಿಲ್ಲ ಎಂದು ಹೇಳಿದರು.
ಯುವನಿಧಿ ಚಾಲನೆ ಕಾರ್ಯಕ್ರಮಕ್ಕೆ ಬಂದಿರುವ ಕೆಲ ವಿದ್ಯಾರ್ಥಿಗಳು ಜೈ ಶ್ರೀರಾಮ್, ಮೋದಿ ಮತ್ತು ಯೋಗಿ ಪರ ಘೋಷಣೆ ಕೂಗಿದ ಪರಿಣಾಮ ಕೆಲಕಾಲ ಸ್ಥಳದಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಯಿತು.
ಇದೀಗ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಯುವ ನಿಧಿಗೆ ಚಾಲನೆ ನೀಡಲಾಗಿದೆ. ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿ ನುಡಿದಂತೆ ನಡೆದಿದ್ದೇವೆ ಎನ್ನುವ ಮೂಲಕ ಚುನಾವಣೆ ಎದುರಿಸಲು ಕಾಂಗ್ರೆಸ್ ಈ ಮೂಲಕ ಸಿದ್ಧತೆ ಮಾಡಿಕೊಂಡಿದೆ.
ಎರಡು ದಿನಗಳ ಹಿಂದಷ್ಟೇ ಸರ್ಕಾರವು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಮಿತಿ ರಚಿಸಿ, ಸಮಿತಿಯ ಅಧ್ಯಕ್ಷರಿಗೆ ಕ್ಯಾಬಿನೆಟ್ ದರ್ಜೆ ಸ್ಥಾನ ಮಾನ ನೀಡಲು ನಿರ್ಧರಿಸಿತ್ತು. ಅಲ್ಲದೆ ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ಕಾರ್ಯಕರ್ತರನ್ನು ನೇಮಿಸಲು ನಿರ್ಧಾರ ಕೈಗೊಂಡಿತ್ತು.
ಇದನ್ನೂ ಓದಿ: ಯುವ ನಿಧಿ ಗ್ಯಾರಂಟಿ ಜಾರಿಗೆ ದಿನಗಣನೆ: ಯಾರೆಲ್ಲ ಅರ್ಹರು, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಮಾಹಿತಿ
2022-23ನೇ ಸಾಲಿನಲ್ಲಿ ಪದವಿ ಹಾಗೂ ಡಿಪ್ಲೊಮಾ ತೇರ್ಗಡೆ ಹೊಂದಿದ ನಿರುದ್ಯೋಗಿಗಳು ಯೋಜನೆಗೆ ಅರ್ಹರಾಗಿದ್ದು, ಒಟ್ಟು 5.29 ಲಕ್ಷ ಫಲಾನುಭವಿಗಳಿಗೆ ಇದರ ಪ್ರಯೋಜನ ಲಭ್ಯವಾಗಲಿದೆ. ಆನ್‌ಲೈನ್ ಮೂಲಕ ಈವರೆಗೆ 65 ಸಾವಿರಕ್ಕೂ ಹೆಚ್ಚು ಪದವಿ ಹಾಗೂ ಡಿಪ್ಲೊಮಾ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:06 pm, Fri, 12 January 24