ಉಪ ಚುನಾವಣೆಯನ್ನು ದಾಖಲೆ ಮತಗಳ ಅಂತರದಿಂದ ಗೆಲ್ಲುತ್ತೇವೆ: ಬಸವರಾಜ ಬೊಮ್ಮಾಯಿ
ಬೆಂಗಳೂರಿನಲ್ಲಿ ಮಂಗಳವಾರ (ಮಾರ್ಚ್ 16) ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಭ್ಯರ್ಥಿಗಳ ಆಯ್ಕೆಯನ್ನು ಪಕ್ಷದ ಸಮಿತಿಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಬೆಂಗಳೂರು: ರಾಜ್ಯದಲ್ಲಿ ಘೋಷಣೆಯಾಗಿರುವ ಒಂದು ಲೋಕಸಭೆ ಹಾಗೂ 2 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವು ದಾಖಲೆ ಮತಗಳ ಅಂತರದಿಂದ ಜಯ ಗಳಿಸುತ್ತೇವೆ ಎಂಬ ವಿಶ್ವಾಸವನ್ನು ಗೃಹ, ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ಮಂಗಳವಾರ (ಮಾರ್ಚ್ 16) ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಭ್ಯರ್ಥಿಗಳ ಆಯ್ಕೆಯನ್ನು ಪಕ್ಷದ ಸಮಿತಿಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಕಳೆದ ಬಾರಿ ರಾಜ್ಯದಲ್ಲಿ 15 ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ 12 ಕ್ಷೇತ್ರಗಳಲ್ಲಿ ಜಯ ಗಳಿಸಿದ್ದೆವು. ನಂತರ ರಾಜರಾಜೇಶ್ವರಿನಗರ ಕ್ಷೇತ್ರದ ಉಪ ಚುನಾವಣೆಯಲ್ಲಿ ಕೂಡ ಬಿಜೆಪಿ ಅಭ್ಯರ್ಥಿ ದಾಖಲೆ ಮತಗಳ ಅಂತರದಿಂದ ಜಯ ಗಳಿಸಿದ್ದರು. ಈಗ ಬೆಳಗಾವಿ ಲೋಕಸಭೆ ಹಾಗೂ ಮಸ್ಕಿ, ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಯಕತ್ವದಲ್ಲಿ ಬಿಜೆಪಿ ಅಭ್ಯರ್ಥಿಗಳು ದಾಖಲೆ ಮತಗಳ ಅಂತರದಿಂದ ಜಯಗಳಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ನಾಯಕತ್ವಕ್ಕೆ ಬೆಳಗಾವಿ ಲೋಕಸಭೆ ಕ್ಷೇತ್ರದ ಜನತೆ ಈಗಾಗಲೇ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಬೆಳಗಾವಿಯಲ್ಲಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ನೇತೃತ್ವದಲ್ಲಿ ನಡೆದ ಸಂದರ್ಭದಲ್ಲಿ ಸೇರಿದ್ದ ಅಪಾರ ಜನಸ್ತೋಮವೇ ಇದಕ್ಕೆ ನಿದರ್ಶನ ಎಂದು ಬೊಮ್ಮಾಯಿ ತಿಳಿಸಿದರು.
ಇದನ್ನೂ ಓದಿ: Karnataka ByElection 2021: ಕರ್ನಾಟಕ ಉಪ ಚುನಾವಣೆಗೆ ಮುಹೂರ್ತ ಫಿಕ್ಸ್ ; ಏಪ್ರಿಲ್ 17ರಂದು ನಡೆಯಲಿದೆ ಚುನಾವಣೆ
Published On - 9:10 pm, Tue, 16 March 21