Madal Virupakshappa: ಲಂಚ ಪ್ರಕರಣ; ಮಾಡಾಳ್ ವಿರೂಪಾಕ್ಷಪ್ಪಗೆ ಜಾಮೀನು ಮಂಜೂರು

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಟೆಂಡರ್​ಗಾಗಿ ಲಂಚ ಪಡೆದ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಶನಿವಾರ ಜಾಮೀನು ಮಂಜೂರು ಮಾಡಿದೆ.

Madal Virupakshappa: ಲಂಚ ಪ್ರಕರಣ; ಮಾಡಾಳ್ ವಿರೂಪಾಕ್ಷಪ್ಪಗೆ ಜಾಮೀನು ಮಂಜೂರು
ಮಾಡಾಳ್ ವಿರೂಪಾಕ್ಷಪ್ಪ
Follow us
Ganapathi Sharma
|

Updated on:Apr 15, 2023 | 2:03 PM

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (KSDL) ಟೆಂಡರ್​ಗಾಗಿ ಲಂಚ ಪಡೆದ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ (Madal Virupakshapp) ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಶನಿವಾರ ಜಾಮೀನು ಮಂಜೂರು ಮಾಡಿದೆ. 5 ಲಕ್ಷ ರೂ. ಮೊತ್ತದ ಬಾಂಡ್, ಇಬ್ಬರ ಶ್ಯೂರಿಟಿ ನೀಡುವಂತೆ ಸೂಚನೆ ನೀಡಲಾಗಿದೆ. ಜತೆಗೆ, 3 ವಾರಕ್ಕೊಮ್ಮೆ ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾಗಬೇಕು, ತನಿಖಾಧಿಕಾರಿ ವಶಕ್ಕೆ ಪಾಸ್ ಪೋರ್ಟ್ ನೀಡಬೇಕು ಎಂಬ ಷರತ್ತುಗಳನ್ನು ವಿಧಿಸಲಾಗಿದೆ. ಮಾಡಾಳ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಇತ್ತೀಚೆಗಷ್ಟೇ ಪೂರ್ಣಗೊಳಿಸಿದ್ದ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿತ್ತು.

ಮಾಡಾಳ್ ಪುತ್ರ ಪ್ರಶಾಂತ್ ಬೆಂಗಳೂರು ಜಲಪೂರೈಕೆ ಮತ್ತು ಒಳಚರಂಡಿ ಜಲಮಂಡಳಿಯ ಮುಖ್ಯ ಲೆಕ್ಕಾಧಿಕಾರಿಯಾಗಿದ್ದು, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಕಚ್ಚಾ ವಸ್ತುಗಳ ಪೂರೈಕೆ ಟೆಂಡರ್ ನೀಡಲು ಲಂಚಕ್ಕೆ ಬೇಡಿಯಿಟ್ಟಿದ್ದರು ಎಂಬ ಆರೋಪ ಅವರ ಮೇಲಿದೆ. ಲೋಕಾಯುಕ್ತ ದಾಳಿ ವೇಳೆ ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವ ವಿರೂಪಾಕ್ಷಪ್ಪ ಕಚೇರಿಯಲ್ಲಿ 3 ಬ್ಯಾಗ್​ಗಳಲ್ಲಿ 2 ಸಾವಿರ ರೂ. ಮತ್ತು 500 ರೂಪಾಯಿ ಕಂತೆ ಕಂತೆ ನೋಟುಗಳು ಪತ್ತೆ ಆಗಿದ್ದವು. ನಂತರ ಲೋಕಾಯುಕ್ತ ಪೊಲೀಸರು ಎಫ್​ಐಆರ್ ದಾಖಲಿಸಿ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಮೊದಲ ಆರೋಪಿಯನ್ನಾಗಿ ಹೆಸರಿಸಿದ್ದರು. ಮಾಡಾಳ್ ಅವರ ಪುತ್ರ ಪ್ರಶಾಂತ್ ಮಾಡಾಳ್ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀರ ಬಲೆಗೆ ಬಿದ್ದಿದ್ದರು. ನಂತರ ಮಾಡಾಳ್ ವಿರೂಪಾಕ್ಷಪ್ಪ ಅವರ ದಾವಣಗೆರೆ ನಿವಾಸದ ಮೇಲೂ ಲೋಕಾಯುಕ್ತ ದಾಳಿ ನಡೆದಿತ್ತು. ಅಲ್ಲಿಯೂ ಕೋಟ್ಯಂತರ ರೂ. ನಗದು ಪತ್ತೆಯಾಗಿತ್ತು. ಬಳಿಕ ನಾಪತ್ತೆಯಾಗಿದ್ದ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ದೊರೆತ ನಂತರ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು. ಅವರಿಗೆ ತರಾತುರಿಯಲ್ಲಿ ಜಾಮೀನು ಮಂಜೂರು ಮಾಡಿದ್ದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಸಿಜೆಐಗೂ ಪತ್ರ ಬರೆಯಲಾಗಿತ್ತು.

ಇದನ್ನೂ ಓದಿ: ಲಂಚ ಪ್ರಕರಣ: ಲೋಕಾಯುಕ್ತ ವಿಚಾರಣೆ ವೇಳೆ ಮಾಡಾಳ್ ವಿರೂಪಾಕ್ಷಪ್ಪ ಹೇಳಿದ್ದಿಷ್ಟು

ನಂತರ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿತ್ತು. ಇದರ ಬೆನ್ನಲ್ಲೇ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಬಳಿಕ ಅವರನ್ನು ನ್ಯಾಯಾಲಯ ಲೋಕಾಯುಕ್ತ ವಶಕ್ಕೊಪ್ಪಿಸಿತ್ತು. ಲೋಕಾಯುಕ್ತ ಅವಧಿ ಪೂರ್ಣಗೊಂಡ ಬಳಿಕ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಬಳಿಕ ನ್ಯಾಯಾಲಯ ಮಾಡಾಳ್​ ಅನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿತ್ತು. ಇದೀಗ ಜಾಮೀನು ನೀಡಿದ್ದು, ಮಾಡಾಳ್​ಗೆ ರಿಲೀಫ್ ಸಿಕ್ಕಂರಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:42 pm, Sat, 15 April 23