ಅಧಿಕಾರಿಗಳು, ನೌಕರರ ವಿರುದ್ಧ ಅನಾಮಧೇಯ ದೂರು.. ಮುಖ್ಯಕಾರ್ಯದರ್ಶಿಗೆ ಪತ್ರ ಬರೆದ ಸಿಎಂ
ರಾಜ್ಯ ಸರ್ಕಾರಿ ಅಧಿಕಾರಿಗಳು, ನೌಕರರ ವಿರುದ್ಧ ಅನಾಮಧೇಯ ದೂರುಗಳು ಹೆಚ್ಚಾಗಿ ಬರುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
ಬೆಂಗಳೂರು: ರಾಜ್ಯ ಸರ್ಕಾರಿ ಅಧಿಕಾರಿಗಳು, ನೌಕರರ ವಿರುದ್ಧ ಅನಾಮಧೇಯ ದೂರುಗಳು ಹೆಚ್ಚಾಗಿ ಬರುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಸರ್ಕಾರಿ ನೌಕರರ ಸಂಘದ ಮನವಿ ಆಧರಿಸಿ ಸಿಎಂ ಪತ್ರ ಬರೆದಿದ್ದು ಅನಾಮಧೇಯ ದೂರುಗಳ ವಿಳಾಸ ಪತ್ತೆ ಮಾಡಲು ಮನವಿ ಸೂಚಿಸಿದ್ದಾರೆ.
ದೂರುದಾರರು ಪೂರಕ ದಾಖಲೆ ನೀಡಿದರೆ ನೌಕರರು, ಅಧಿಕಾರಿಗಳ ವಿರುದ್ಧ ತನಿಖೆ ಮಾಡಬಹುದು. ಬೇನಾಮಿ ದೂರುಗಳಿಂದ ಅನಗತ್ಯವಾಗಿ ತನಿಖೆಗೆ ವಿಚಾರಣೆಗೆ ಒಳಪಡಿಸುವುದರಿಂದ ಪ್ರಾಮಾಣಿಕ ಅಧಿಕಾರಿಗಳಿಗೆ ಕಿರುಕುಳ ನೀಡಿದಂತಾಗುತ್ತದೆ. ತಮ್ಮ ದೈನಂದಿನ ಕೆಲಸ ಕಾರ್ಯಗಳಲ್ಲಿ ಹಸ್ತಕ್ಷೇಪ ಉಂಟಾಗಿ ದಕ್ಷ ಹಾಗೂ ಪ್ರಾಮಾಣಿಕ ನೌಕರರಿಗೆ ಧಕ್ಕೆ ಉಂಟಾಗುತ್ತಿದೆ.
ಇದರಿಂದ ಆಡಳಿತಾತ್ಮಕ ಸಮಸ್ಯೆಗಳು ಉದ್ಭವವಾಗಿ ಸರ್ಕಾರಿ ಕೆಲಸಗಳು, ಯೋಜನೆಗಳಿಗೆ ತೊಂದರೆಯಾಗುತ್ತದೆ. ಇದನ್ನು ತಪ್ಪಿಸಿ ಮುಕ್ತ ಮತ್ತು ನಿರ್ಭೀತಿಯಿಂದ ಸರ್ಕಾರಿ ಅಧಿಕಾರಿಗಳು, ನೌಕರರು ಕರ್ತವ್ಯ ನಿರ್ವಹಿಸಲು ಅನುಕೂಲ ಕಲ್ಪಿಸಲು ಸರ್ಕಾರಿ ನೌಕರರ ಸಂಘ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಸಿಎಂ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಈ ಹಿಂದಿನ ಆದೇಶವನ್ನು ಮಾರ್ಪಡಿಸುವಂತೆ ಸಿಎಂ ಸೂಚಿಸಿದ್ದಾರೆ.
ಇದನ್ನೂ ಓದಿ: ಬಿ.ಎಸ್. ಯಡಿಯೂರಪ್ಪ ಮನೆಯಲ್ಲಿ ಮದುವೆ ಸಂಭ್ರಮ, ಇಡೀ ದಿನ ಕುಟುಂಬಸ್ಥರೊಂದಿಗೆ ದಿನಕಳೆಯುವ ಸಾಧ್ಯತೆ