Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಮಾರ್ಟ್ ಸಿಟಿ ಯೋಜನೆ ಪೂರ್ಣಗೊಳಿಸಲು ಇಷ್ಟೊಂದು ವಿಳಂಬ ಏಕೆ? ಸಚಿವ ಜೆ.ಸಿ. ಮಾಧುಸ್ವಾಮಿ

ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ಹಾಗೂ ತಾಂತ್ರಿಕತೆಯನ್ನು ಬಳಸಿಕೊಂಡು ತುಮಕೂರಿನ ಜನರಿಗೆ ಸೌಲಭ್ಯಗಳನ್ನು ಒದಗಿಸಿ ಸ್ಮಾರ್ಟ್ ಪದಕ್ಕೆ ಅರ್ಥ ಬರುವಂತೆ ಮಾಡಬೇಕು ಎಂದು ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದರು.

ಸ್ಮಾರ್ಟ್ ಸಿಟಿ ಯೋಜನೆ ಪೂರ್ಣಗೊಳಿಸಲು ಇಷ್ಟೊಂದು ವಿಳಂಬ ಏಕೆ? ಸಚಿವ ಜೆ.ಸಿ. ಮಾಧುಸ್ವಾಮಿ
ಸ್ಮಾರ್ಟ್ ಸಿಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಚಿತ್ರಣ
Follow us
preethi shettigar
| Updated By: ಸಾಧು ಶ್ರೀನಾಥ್​

Updated on: Jan 28, 2021 | 12:56 PM

ತುಮಕೂರು: ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ಮಾ. 31ರೊಳಗೆ ಪೂರ್ಣಗೊಳಿಸಬೇಕು. ತಪ್ಪಿದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ನಡೆದ ಸ್ಮಾರ್ಟ್ ಸಿಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವ ಜೆ.ಸಿ ಮಾಧುಸ್ವಾಮಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕಾಮಗಾರಿಗಳನ್ನು ಆರಂಭಿಸಲು ಕಾರ್ಯಾದೇಶ ನೀಡಿ ಒಂದರೆಡು ವರ್ಷ ಕಳೆದಿದ್ದರೂ ಕಾಮಗಾರಿಗಳು ಪೂರ್ಣಗೊಂಡಿಲ್ಲ. ಈ ನಿಧಾನಗತಿಗೆ ಕಾರಣವೇನು? ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.

ಸ್ಮಾರ್ಟ್ ರಸ್ತೆ ನಿರ್ಮಾಣ, ಒಳಚರಂಡಿ ಕಾಮಗಾರಿ, ವಿದ್ಯುತ್ ದೀಪ, ದಿನದ 24 ಗಂಟೆ ನೀರು ಪೂರೈಕೆ ಸೇರಿದಂತೆ ಹಲವು ಕಾಮಗಾರಿಗಳನ್ನು ಏಕಕಾಲಕ್ಕೆ ಕೈಗೊಂಡಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ. ಮಾರ್ಚ್ 31ರ ಒಳಗಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಸಂಬಂಧಿಸಿದ ಗುತ್ತಿಗೆದಾರರಿಗೆ ಸೂಚನೆ ನೀಡಿ ಕಾಲಾಕಾಲಕ್ಕೆ ಪರಿಶೀಲಿಸಿ ಕಾಮಗಾರಿಯನ್ನು ಮುಗಿಸಬೇಕೆಂದು ಸ್ಮಾರ್ಟ್ ಸಿಟಿ ಸಿಇಓ ರಂಗಸ್ವಾಮಿ ಅವರಿಗೆ ಸೂಚಿಸಿದರು.

ಅಮಾನಿಕೆರೆಯಲ್ಲಿ ಕೈಗೊಂಡಿರುವ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಿದ ನಂತರವೇ ಕಾಮಗಾರಿ ಪೂರ್ಣಗೊಂಡಿದೆ ಎನ್ನಬೇಕು. ಅಮಾನಿಕೆರೆಗೆ ಸಂಪರ್ಕಿಸುವ ರಾಜಕಾಲುವೆಗಳ ಒತ್ತುವರಿಯನ್ನು ತೆರವುಗೊಳಿಸಿ, ಒತ್ತುವರಿದಾರರ ವಿರುದ್ಧ ಕೇಸು ದಾಖಲಿಸಬೇಕು. ಅಮಾನಿಕೆರೆಗೆ ರಾಜಕಾಲುವೆಗಳಿಂದ ನೀರು ಸರಾಗವಾಗಿ ಹರಿಯುವಂತೆ ಮಾಡಬೇಕೆಂದು ಜಿಲ್ಲಾಧಿಕಾರಿ ಡಾ.ಕೆ. ರಾಕೇಶ್ ಕುಮಾರ್ ಸೂಚನೆ ನೀಡಿದರು.

ಸಚಿವ ಜೆ.ಸಿ ಮಾಧುಸ್ವಾಮಿ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿರುವ ಚಿತ್ರಣ

ಫೀಲ್ಡ್ ಮಾರ್ಷಲ್ ಕಾರ್ಯಪ್ಪ ರಸ್ತೆಯು ಸ್ಮಾರ್ಟ್ ಸಿಟಿ ಯೋಜನೆಯ ಅನುಷ್ಟಾನಕ್ಕೂ ಮುನ್ನ ಸಾರ್ವಜನಿಕರಿಗೆ ಹೆಚ್ಚು ಅನುಕೂಲವಾಗಿತ್ತು. ಸ್ಮಾರ್ಟ್ ಸಿಟಿಯಿಂದ ಸ್ಮಾರ್ಟ್ ರಸ್ತೆ ನಿರ್ಮಿಸಿರುವುದರಿಂದ ರಸ್ತೆ ಕಿರಿದಾಗಿದೆ. ಪಾರ್ಕಿಂಗ್ ವ್ಯವಸ್ಥೆ ದೊಡ್ಡದಾಗಿದ್ದು ವಾಹನಗಳ ನಿಲುಗಡೆಯಿಂದ ಸ್ಥಳೀಯ ವ್ಯಾಪಾರಸ್ಥರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದನ್ನು ಸರಿಪಡಿಸುವಂತೆ ಸಂಸದ ಜಿ.ಎಸ್ ಬಸವರಾಜು ಈ ಸಂದರ್ಭದಲ್ಲಿ ಸಭೆಗೆ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಬೆಂಗಳೂರಿನ ಬಿ.ವಿ.ಕೆ.ಐಯ್ಯಂಗಾರ್ ರಸ್ತೆಯಲ್ಲಿ ಒಂದು ಬದಿ ಪಾರ್ಕಿಂಗ್ ವ್ಯವಸ್ಥೆ ಮಾಡಿದ್ದಾರೆ. ಅದೇ ರೀತಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ರಸ್ತೆಯಲ್ಲಿ ಒಂದು ಕಡೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿ ಎಂದು ಕಾರ್ಯನಿರ್ವಾಹಕ ಅಭಿಯಂತರರುಗಳಿಗೆ ಸೂಚಿಸಿದರು.

ಕೆಲವೊಂದು ಕಾಮಗಾರಿಗಳು 3 ವರ್ಷಗಳಾದರೂ ಆಮೆಗತಿಯಲ್ಲಿ ನಡೆಯುತ್ತಿವೆ. ಸಂಬಂಧಪಟ್ಟ ಗುತ್ತಿಗೆದಾರರ ವಿರುದ್ಧ ಕ್ರಮ ಏಕೆ ಕೈಗೊಂಡಿಲ್ಲ. ಅಂದಾಜು ವೆಚ್ಚ 99.98ಲಕ್ಷ ರೂಪಾಯಿಗಳೆಂದು ನಮೂದಿಸಿದ್ದೀರಿ. ಇದರಲ್ಲಿ 17.21ಲಕ್ಷ ರೂಪಾಯಿಗಳು ಖರ್ಚಾಗಿದೆ ಎಂದು ತಿಳಿಸಿದ್ದೀರಿ. ಶೇ.90ರಷ್ಟು ಕಾಮಗಾರಿ ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದ್ದೀರಿ, ಶೇ.90ರಷ್ಟು ಕಾಮಗಾರಿಗಳು ಹೇಗೆ ಪೂರ್ಣಗೊಂಡಿದೆ ಎಂದು ಸ್ಮಾರ್ಟ್ ಸಿಟಿ ಇಂಜಿನಿಯರ್​ಗಳಿಗೆ ತರಾಟೆಗೆ ತೆಗೆದುಕೊಂಡ ಸಚಿವರು, ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಂಡಿರುವ ಯೋಜನೆಗಳ ವಸ್ತುಸ್ಥಿತಿ ವರದಿಯನ್ನು ನೀಡಬೇಕೆಂದು ಸೂಚಿಸಿದರು.

ರಿಂಗ್ ರಸ್ತೆಯಲ್ಲಿ ರಸ್ತೆಬದಿ ಚರಂಡಿಗಳನ್ನು ನಿರ್ಮಾಣ ಮಾಡದಿದ್ದರೆ ನೀರು ಸರಾಗವಾಗಿ ಹರಿಯದೆ ಅಲ್ಲಿಯೇ ನಿಂತು ರಸ್ತೆ ಹಾಳಾಗಲು ಕಾರಣವಾಗುತ್ತದೆ. ಈ ನಿಟ್ಟಿನಲ್ಲಿ ಕಾಮಗಾರಿ ಪೂರ್ಣಗೊಂಡ ನಂತರ ರಸ್ತೆ ಗುಂಡಿಬಿದ್ದರೆ ಅದಕ್ಕೆ ನೀವೇ ಹೊಣೆಗಾರರಾಗುತ್ತೀರಿ. ಮಾರ್ಚ್ ಅಂತ್ಯದ ವೇಳೆಗೆ ರಿಂಗ್ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಕಾರ್ಯನಿರ್ವಾಹಕ ಇಂಜಿನಿಯರ್ ಬಸವರಾಜೇಗೌಡ ಅವರಿಗೆ ಸಚಿವ ಜೆ.ಸಿ ಮಾಧುಸ್ವಾಮಿ ಸೂಚಿಸಿದರು.

ವಿನಾಯಕ ನಗರ, ಎಂ.ಜಿ.ರಸ್ತೆ, ಹೊರಪೇಟೆ ಮುಖ್ಯರಸ್ತೆಗಳನ್ನು ಅಗೆದು ನಿಗದಿತ ಅವಧಿಯಲ್ಲಿ ಕೆಲಸ ಪೂರ್ಣಗೊಳಿಸಿಲ್ಲ. ಅಲ್ಲದೆ ಅವಧಿಯ ಸಮಯ ಒಂದು ವರ್ಷದವರೆಗೂ ವಿಸ್ತರಣೆಯಾಗಿದ್ದರೂ ಕಾಮಗಾರಿ ವಿಳಂಬ ಮಾಡಿದ್ದೀರಿ. ಇದರಿಂದ ಸಾರ್ವಜನಿಕರು ನಮ್ಮನ್ನು ಪ್ರಶ್ನಿಸುವಂತೆ ಮಾಡಿದ್ದೀರಿ. ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ಹಾಗೂ ತಾಂತ್ರಿಕತೆಯನ್ನು ಬಳಸಿಕೊಂಡು ತುಮಕೂರಿನ ಜನರಿಗೆ ಸೌಲಭ್ಯಗಳನ್ನು ಒದಗಿಸಿ ಸ್ಮಾರ್ಟ್ ಪದಕ್ಕೆ ಅರ್ಥ ಬರುವಂತೆ ಮಾಡಬೇಕು ಎಂದು ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದರು.

ಸ್ಮಾರ್ಟ್ ಸಿಟಿ ಯೋಜನೆಯಡಿ 53 ಉದ್ಯಾನವನಗಳನ್ನು ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ. ಈ ಪೈಕಿ ಈಗಾಗಲೇ 4 ಉದ್ಯಾನವನಗಳನ್ನು ಅಭಿವೃದ್ಧಿಪಡಿಸಲಾಗಿದೆ. ನಗರದ ಸಾರ್ವಜನಿಕರು ಈ ಉದ್ಯಾನವನಗಳ ಅಭಿವೃದ್ಧಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಒಂದು ಕಾಮಗಾರಿ ಪೂರ್ಣಗೊಂಡ ನಂತರ ಮತ್ತೊಂದು ಕಾಮಗಾರಿಯನ್ನು ಪೂರ್ಣಗೊಳಿಸಬೇಕಾಗಿತ್ತು.

ಅಧಿಕಾರಿಗಳು ಏಕಕಾಲಕ್ಕೆ ಕಾಮಗಾರಿಗಳನ್ನು ಆರಂಭಿಸಿದ್ದು, ನಗರದಲ್ಲಿ 4,000 ಕೊಳಚೆ ಒಳಚರಂಡಿ (ಚೇಂಬರ್)ಗಳನ್ನು ತೆರೆದು ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ. ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕೆಂದು ನಗರ ಶಾಸಕ ಜಿ.ಬಿ ಜ್ಯೋತಿಗಣೇಶ್ ಸಭೆಗೆ ತಿಳಿಸಿದರು.

ಸಭೆಯಲ್ಲಿ ಪಾಲಿಕೆ ಮೇಯರ್ ಫರೀದಾ ಬೇಗಂ, ಉಪ ಮೇಯರ್ ಶಶಿಕಲಾ ಗಂಗಹನುಮಯ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ.ವಂಶಿಕೃಷ್ಣ, ಜಿಪಂ ಸಿಇಓ ಶುಭಾ ಕಲ್ಯಾಣ್, ಪಾಲಿಕೆ ಆಯುಕ್ತೆ ರೇಣುಕಾ, ಟೂಡಾ ಅಧ್ಯಕ್ಷ ಬಾವಿಕಟ್ಟೆ ನಾಗೇಶ್, ಪಿಡಬ್ಲ್ಯೂಡಿ ಕಾರ್ಯಪಾಲಕ ಇಂಜಿನಿಯರ್ ಸಂಜೀವ್‍ರಾಜ್ ಸೇರಿದಂತೆ ಸ್ಮಾರ್ಟ್ ಸಿಟಿ ಅಧಿಕಾರಿಗಳು ಹಾಜರಿದ್ದರು.

ಖಾತೆ ಬದಲಾವಣೆ: ಪೋನ್ ಸಂಪರ್ಕಕ್ಕೆ ಸಿಗದೆ ಸಚಿವ ಮಾಧುಸ್ವಾಮಿ ಕೋಪತಾಪ, ಸಿದ್ದಗಂಗಾ ಮಠದ ಕಾರ್ಯಕ್ರಮಕ್ಕೂ ಗೈರು?