
ಬಾಗಲಕೋಟೆ:ಪತ್ನಿಗೆ ಪರಪುರುಷನೊಂದಿಗೆ ಅಕ್ರಮ ಸಂಬಂಧವಿದೆ ಎಂದು ಶಂಕಿಸಿದ ಪತಿ ಮಹಾಶಯ ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ನಂತರ, ತಾನೂ ಸಹ ಕುತ್ತಿಗೆಗೆ ಇರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಗಂಜಿಹಾಳ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಸುಜಾತ ಹಡಗಲಿ (30) ಹಾಗೂ ಯಲ್ಲಪ್ಪ ಹಡಗಲಿ (35) ಮೃತರು.
ಪತ್ನಿಗೆ ಬೇರೊಬ್ಬನ ಜೊತೆ ಅಕ್ರಮ ಸಂಬಂಧ ಇದೆಯೆಂದು ಶಂಕಿಸಿದ ಗಂಡ, ಪತ್ನಿಯ ಕುತ್ತಿಗೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ತದನಂತರ, ತಾನೂ ಸಹ ಚಾಕುವಿನಿಂದ ಕುತ್ತಿಗೆಗೆ ಇರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಸದ್ಯ ಸ್ಥಳಕ್ಕೆ ಹುನಗುಂದ ಪೊಲೀಸರು ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.