ಬೆಂಗಳೂರು: ರಾಜ್ಯದಲ್ಲಿ ಇಷ್ಟು ದಿನ ಮಂಕಾಗಿದ್ದ ಮುಂಗಾರು ಇಂದಿನಿಂದ ಗರಿಗೆದರಿದ್ದು, ರಾಜ್ಯದ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಇರುವುದರಿಂದ ಉತ್ತರ ಕೇರಳ ಹಾಗೂ ಕರ್ನಾಟಕದ ಕರಾವಳಿ ಭಾಗಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಗೂ ರಾಜ್ಯದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಲಿದ್ದು, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಬೆಳಗಾವಿ, ಧಾರವಾಡ, ಬಿಜಾಪುರ, ಬಾಗಲಕೋಟೆ, ಹಾವೇರಿ, ಗದಗ, ಬಳ್ಳಾರಿ, ಬೀದರ್, ಕಲಬುರಗಿ, ರಾಯಚೂರು ಹಾಗೂ ಚಿತ್ರದುರ್ಗದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇರುವುದರಿಂದ ಎಲ್ಲಾ ಜಿಲ್ಲೆಗಳಲ್ಲಿ YELLOW ಅಲರ್ಟ್ ಘೋಷಣೆ ಮಾಡಲಾಗಿದೆ.
ಉತ್ತರ ಒಳನಾಡಿನಲ್ಲಿ ಜುಲೈ 25ರಂದು ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಜುಲೈ 26ರಂದು ಮಳೆಯ ಪ್ರಮಾಣ ತಗ್ಗಲಿದೆ. ಹಾಗೂ ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಹಾಗಾಗಿ ಜನರು ಎಚ್ಚರಿಕೆ ವಹಿಸಬೇಕೆಂದು ತಿಳಿಸಲಾಗಿದೆ.
ಕರ್ನಾಟಕದ ಕರಾವಳಿ ಭಾಗದಲ್ಲಿ ಗಾಳಿಯ ವೇಗ ಪ್ರತಿ ಗಂಟೆಗೆ 40ರಿಂದ 50ಕಿಲೋಮೀಟರ್ ವೇಗದಲ್ಲಿ ಬೀಸುತ್ತಿರುವುದರಿಂದ ಜುಲೈ 24 ಹಾಗೂ 25ರಂದು ಕರಾವಳಿ ಭಾಗದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದೆಂದು ಎಚ್ಚರಿಕೆ ನೀಡಲಾಗಿದೆ. ಜೊತೆಗೆ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಕಳೆದ 24 ಗಂಟೆಯಲ್ಲಿ ಬಾರಿ ಮಳೆಯಾಗಿರುವುದು ಕಂಡುಬಂದಿದೆ.
ಈಗಾಗಲೇ ಉತ್ತರ ಒಳನಾಡಿನಲ್ಲಿ ಸಹ ಮಾನ್ಸೂನ್ ಚುರುಕಾಗಿದ್ದು, ಕೊಪ್ಪಳ ಜಿಲ್ಲೆಯಲ್ಲಿ 12 ಸೆಂಟಿಮೀಟರ್, ತುಮಕೂರಿನಲ್ಲಿ 9 ಸೆಂಟಿಮೀಟರ್, ಬಾಗಲಕೋಟೆಯಲ್ಲಿ 6ಸೆಂಟಿಮೀಟರ್, ಮಂಗಳೂರಿನಲ್ಲಿ 5 ಸೆಂಟಿಮೀಟರ್, ಹಾಗೂ ಚಿಕ್ಕಬಳ್ಳಾಪುರದಲ್ಲಿ 6 ಸೆಂಟಿಮೀಟರ್ ಮಳೆಯಾಗಿದೆಯೆಂದು ವರದಿಯಾಗಿದೆ.