Siddaramaiah: ಬಿಜೆಪಿ ನಾಯಕರ ಮೀಸಲಾತಿ ಒತ್ತಾಯವನ್ನು ‘ರಾಜಕೀಯ ಷಡ್ಯಂತ್ರ’ ಎಂದ ಸಿದ್ದರಾಮಯ್ಯ

|

Updated on: Feb 14, 2021 | 3:55 PM

siddaramaiah Tweet: ಸ್ಥಳೀಯ ಸಂಸ್ಥೆಗಳಲ್ಲಿನ ಮೀಸಲಾತಿಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದ ರಾಮ ಜೋಯಿಸ್ ಯಾವ ಪಕ್ಷದವರು ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Siddaramaiah: ಬಿಜೆಪಿ ನಾಯಕರ ಮೀಸಲಾತಿ ಒತ್ತಾಯವನ್ನು ‘ರಾಜಕೀಯ ಷಡ್ಯಂತ್ರ’ ಎಂದ ಸಿದ್ದರಾಮಯ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ
Follow us on

ಬೆಂಗಳೂರು: ಮೀಸಲಾತಿ ವಿರೋಧಿಸುತ್ತಲೇ ಬಂದಿರುವ ಕರ್ನಾಟಕ ಬಿಜೆಪಿ ನಾಯಕರು ಸಾಲು ಸಾಲಾಗಿ ನಿಂತು ಮೀಸಲಾತಿಗಾಗಿ ಕೂಗೆಬ್ಬಿಸಿರುವುದು ಪ್ರಾಮಾಣಿಕ ಜ್ಞಾನೋದಯವೇ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್​ನಲ್ಲಿ ಪ್ರಶ್ನಿಸಿದ್ದಾರೆ. ಜೊತೆಗೆ ಸಾಮಾಜಿಕ ನ್ಯಾಯದ ಹೋರಾಟದ ದಿಕ್ಕು ತಪ್ಪಿಸುವ ಇನ್ನೊಂದು ರಾಜಕೀಯ ಷಡ್ಯಂತ್ರವೇ ಎಂದು ಮತ್ತೊಂದು ಟ್ವೀಟ್​ನಲ್ಲಿ ವ್ಯಂಗ್ಯವಾಡಿದ್ದಾರೆ.

ಮಂಡಲ್ ವರದಿಯನ್ನು ವಿರೋಧಿಸಿ ಮೈಗೆ ಬೆಂಕಿ ಹಚ್ಚಿಕೊಂಡವರು ಯಾರು? ಉನ್ನತ ಶಿಕ್ಷಣದಲ್ಲಿ ಮೀಸಲಾತಿಯನ್ನು ವಿರೋಧಿಸಿ ಬೀದಿಗೆ ಇಳಿದವರು ಯಾರು? ಸ್ಥಳೀಯ ಸಂಸ್ಥೆಗಳಲ್ಲಿನ ಮೀಸಲಾತಿಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದ ರಾಮ ಜೋಯಿಸ್ ಯಾವ ಪಕ್ಷದವರು? ಜಾತಿಯಿಂದಲೇ ನರಕ, ಧರ್ಮದಿಂದಲೇ ಸ್ವರ್ಗ, ನಾವೆಲ್ಲ ಹಿಂದೂ, ನಾವೆಲ್ಲ ಒಂದು ಎಂದು ಹಿಂದೂ ಸಮಾಜೋತ್ಸವ ನಡೆಯುತ್ತಿದ್ದ ಸಂಘ ಪರಿವಾರ ಈಗ ಏಕೆ ಜಾತಿ ಸಮಾವೇಶಗಳಿಗೆ ಪ್ರಾಯೋಜಕತ್ವ ನೀಡುತ್ತಿದೆ? ಈ ಬಗ್ಗೆ ಉತ್ತರಿಸುವಿರಾ ಎಂದು ಬಿಜೆಪಿ ನಾಯಕರಿಗೆ ಪ್ರಶ್ನಿಸಿದ್ದಾರೆ.

ಅಮಾಯಕ ಜನತೆ ಬಲಿಯಾಗಬಾರದು
ಮೀಸಲಾತಿಯನ್ನು ನೇರವಾಗಿ ವಿರೋಧಿಸಲು ಆಗದ ಸಂಘ ಪರಿವಾರದ ನಾಯಕರು ವಿವಾದ ಸೃಷ್ಟಿಸಿ, ಸಮುದಾಯಗಳನ್ನು ಪರಸ್ಪರ ಕಾದಾಟಕ್ಕಿಳಿಸಿ ಸಾಮಾಜಿಕ ನ್ಯಾಯದ ಹೋರಾಟದ ಹಾದಿ ತಪ್ಪಿಸಲು ಮುಂದಾಗಿದ್ದಾರೆ. ಇಂಥ ಕುಟಿಲ ಕಾರಸ್ಥಾನಕ್ಕೆ ಅಮಾಯಕ ಜನತೆ ಬಲಿಯಾಗಬಾರದು ಎಂದರು.

ರಾಜ್ಯದಲ್ಲಿ ಆಡಳಿಯ ಪಕ್ಷದವರೇ ಮೀಸಲಾತಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿರುವುದು ಯಾರ ವಿರುದ್ಧ? ಈಗಿನ ಮೀಸಲಾತಿ ಬದಲಾವಣೆ ಮತ್ತು ಹೆಚ್ಚಳದ ಬೇಡಿಕೆಗೆ ತಮಿಳುನಾಡಿನ ಮಾದರಿಯಲ್ಲಿ ಕರ್ನಾಟಕದ ಮೀಸಲಾತಿಯನ್ನು ಶೇ 73ಕ್ಕೆ ಹೆಚ್ಚಿಸಬೇಕೆಂದು ಕಾಂಗ್ರೆಸ್ ಸರ್ಕಾರವೇ ಮಾಡಿರುವ ಕಾನೂನು ಮಾತ್ರ ಇದಕ್ಕೆ ಪರಿಹಾರವಾಗಿದೆ. ಅದರ ಅನುಷ್ಠಾನ ಕೇಂದ್ರದ ಕೈಯಲ್ಲಿದೆ ಎಂದರು.

ಮೀಸಲಾತಿ ಹೆಚ್ಚಳಕ್ಕಾಗಿ ಆಧಾರ ಕೋರುತ್ತಿರುವ ನ್ಯಾಯಾಲಯಕ್ಕೆ ಕರ್ನಾಟಕದಲ್ಲಿ ನಡೆದಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯೇ ಉತ್ತರ. ರಾಜ್ಯ ಸರ್ಕಾರ ಮೀಸಲಾತಿ ಹೆಚ್ಚಳದ ಪರವಾಗಿದ್ದರೆ ಮೊದಲು ನಡೆಸಿದ್ದ ಈ ಸಮೀಕ್ಷೆಯನ್ನು ಸ್ವೀಕರಿಸಿ, ಶಿಫಾರಸುಗಳನ್ನು ಅನುಷ್ಠಾನಗೊಳಿಸಬೇಕು ಎಂದು ಟ್ವೀಟ್​ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ವಿಜಯೇಂದ್ರ ಎಲ್ಲಿ ಮಲಗುತ್ತಾರೆ, ಎಲ್ಲಿ ಕುಡೀತಾರೆ, ಯಾರ ಮನೆಯಲ್ಲಿ ಇರ್ತಾರೆ ಅಂತಾ ನಮಗೂ ಗೊತ್ತು -ಕಾಶಪ್ಪನವರ್​ ಕೌಂಟರ್​