ವಯನಾಡಿನಲ್ಲಿ ಭೂಕುಸಿತ: ರಕ್ಷಣೆ, ಪರಿಹಾರ ಕಾರ್ಯಾಚರಣೆಗೆ ಕೇರಳದ ಜತೆ ಕೈಜೋಡಿಸಿದ ಸಿದ್ದರಾಮಯ್ಯ

ವಯನಾಡಿನಲ್ಲಿ ಭೂಕುಸಿತವಾಗಿ ಸಾವು ನೋವು ಸಂಭವಿಸಿದ್ದು, ಅವರ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗಳ ಕುರಿತಂತೆ ಸಮನ್ವಯಕ್ಕಾಗಿ ಸಿಎಂ ಸಿದ್ದರಾಮಯ್ಯ ಅವರು ಹಿರಿಯ ಐಎಎಸ್‌ ಅಧಿಕಾರಿ ಪಿ.ಸಿ. ಜಾಫರ್‌ ಹಾಗೂ ದಿಲೀಶ್‌ ಶಶಿ ಅವರನ್ನು ನಿಯೋಜಿಸಿದ್ದಾರೆ. ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರದಿಂದ ಪ್ರಯತ್ನ ನಡೆಸುತ್ತಿದ್ದು, ವಯನಾಡಿನಲ್ಲಿ ಕನ್ನಡಿಗರು ಸಿಲುಕಿಕೊಂಡಿರುವ ಬಗ್ಗೆ ಪ್ರಾಥಮಿಕ ಮಾಹಿತಿ ದೊರೆತಿದೆ. ಅವರ ರಕ್ಷಣೆಗೆ ಎಲ್ಲ ಪ್ರಯತ್ನ ಮಾಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

ವಯನಾಡಿನಲ್ಲಿ ಭೂಕುಸಿತ: ರಕ್ಷಣೆ, ಪರಿಹಾರ ಕಾರ್ಯಾಚರಣೆಗೆ ಕೇರಳದ ಜತೆ ಕೈಜೋಡಿಸಿದ ಸಿದ್ದರಾಮಯ್ಯ
ವಯನಾಡಿನಲ್ಲಿ ಭೂಕುಸಿತ: ರಕ್ಷಣೆ, ಪರಿಹಾರ ಕಾರ್ಯಾಚರಣೆಗೆ ಕೇರಳದ ಜತೆ ಕೈಜೋಡಿಸಿದ ಸಿದ್ದರಾಮಯ್ಯ
Follow us
Anil Kalkere
| Updated By: ಕಿರಣ್ ಹನುಮಂತ್​ ಮಾದಾರ್

Updated on:Jul 30, 2024 | 7:31 PM

ಬೆಂಗಳೂರು, ಜು.30: ಕೇರಳದ ವಯನಾಡಿನಲ್ಲಿ ಭೂಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿನ ಸಂಖ್ಯೆ ಏರುತ್ತಲೇ ಇದೆ. ಇದೀಗ ಅವರ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಇಬ್ಬರು ಐಎಎಸ್​ ಅಧಿಕಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಯೋಜಿಸಿದ್ದಾರೆ. ಜೊತೆಗೆ ವಯನಾಡಿನಲ್ಲಿ ಸಿಲುಕಿರುವವರ ರಕ್ಷಣೆ ಹಾಗೂ ಪರಿಹಾರ ಕಾರ್ಯಾಚರಣೆಗೆ ನೆರವಾಗಲು ಬೆಂಗಳೂರಿನಲ್ಲಿರುವ ಎನ್​ಡಿಆರ್​ಎಫ್ ತಂಡ ಹಾಗೂ ಮದ್ರಾಸ್ ಎಂಜಿನಿಯರ್ ಗ್ರೂಪ್ ಸೇನಾ ಪಡೆಯ ತಂಡಗಳು ತ್ವರಿತವಾಗಿ ತೆರಳಲು, ಅಗತ್ಯ ಉಪಕರಣಗಳು ಮತ್ತು ಇತರ ಅಗತ್ಯ ಪರಿಹಾರ ಸಾಮಗ್ರಿಗಳನ್ನು ರವಾನೆ ಮಾಡಲು ನೆರವು ನೀಡಲಾಗಿದೆ.

ಎಂಇಜಿ ಯ ಒಬ್ಬರು ಅಧಿಕಾರಿ, ಇಬ್ಬರು ಜೆ.ಸಿ.ಓ. ಗಳು ಹಾಗೂ 70 ಮಂದಿ ವಿವಿಧ ಸಿಬ್ಬಂದಿ ಈಗಾಗಲೇ ರಕ್ಷಣೆ ಹಾಗೂ ಪರಿಹಾರ ಸಾಮಗ್ರಿಗಳೊಂದಿಗೆ 15 ವಾಹನಗಳಲ್ಲಿ ವಯನಾಡಿಗೆ ತೆರಳಿದ್ದಾರೆ. ಇನ್ನೂ ಇಬ್ಬರು ಅಧಿಕಾರಿಗಳು, ನಾಲ್ಕು ಮಂದಿ ಜೆ.ಸಿ.ಓ.ಗಳು, ಹಾಗೂ 100 ಮಂದಿ ಸೇನಾ ಸಿಬ್ಬಂದಿ ರಕ್ಷಣಾ ಉಪಕರಣಗಳೊಂದಿಗೆ 40 ವಾಹನಗಳಲ್ಲಿ ತೆರಳಲಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ವಯನಾಡಿನಲ್ಲಿ ಭೂಕುಸಿತ, ಚಾಮರಾಜನಗರದ ಎರೆಡು ಕುಟುಂಬಗಳು ನಾಪತ್ತೆ

ಈ ತಂಡಗಳು ವಯನಾಡಿಗೆ ಶೀಘ್ರವೇ ತಲುಪಲು ಅನುವಾಗುವಂತೆ ಬಂಡೀಪುರ ಚೆಕ್ ಪೋಸ್ಟ್ನಲ್ಲಿ ಈ ಎನ್​ಡಿಆರ್​ಎಫ್ ಹಾಗೂ ಸೇನೆಯ ತಂಡಗಳಿಗೆ ಪರಿಹಾರ ಹಾಗೂ ಸಾಮಗ್ರಿಗಳ ಸಾಗಾಣಿಕೆ ವಾಹನಗಳಿಗೆ ಗ್ರೀನ್‌ ಕಾರಿಡಾರ್‌ ಮೂಲಕ ಅನಿರ್ಬಂಧಿತ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಸೂಚನೆ ನೀಡಲಾಗಿದೆ. ಕರ್ನಾಟಕ ಸರ್ಕಾರವು ಕೇರಳ ಸರ್ಕಾರದ ವಿಪತ್ತು ನಿರ್ವಹಣಾ ಸಂಬಂಧಿಸಿದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅಗತ್ಯ ನೆರವು ಒದಗಿಸಲಾಗುತ್ತಿದೆ. ಅಲ್ಲದೆ ಗಡಿ ಭಾಗದ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಜಿಲ್ಲಾಧಿಕಾರಿಗಳು ಸಹ ಸೂಕ್ತ ಬೆಂಬಲ ನೀಡುತ್ತಿದ್ದಾರೆ.

ವೈದ್ಯಕೀಯ ನೆರವು, ಆಸ್ಪತ್ರೆ ಸೌಲಭ್ಯ ಹಾಗೂ ಗಾಯಾಳುಗಳನ್ನು ಕರೆತರಲು ಬಸ್​ಗಳನ್ನು ಹೆಚ್‌.ಡಿ. ಕೋಟೆಯಲ್ಲಿ ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ. ಚಾಮರಾಜನಗರ ಜಿಲ್ಲಾಡಳಿತವೂ ಜಿಲ್ಲೆಯ ಗಡಿಭಾಗದಿಂದ ವಯನಾಡಿಗೆ ಆಗಾಗ ತೆರಳುವ ನಾಗರಿಕರ ನೆರವಿಗಾಗಿ ಸಹಾಯವಾಣಿ ಪ್ರಾರಂಭಿಸಿದೆ. ಮುಖ್ಯಮಂತ್ರಿಗಳು ಸ್ವತಃ ಪರಿಸ್ಥಿತಿಯ ಮೇಲ್ವಿಚಾರಣೆ ನಡೆಸುತ್ತಿದ್ದು, ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಚರಣೆಗೆ ಎಲ್ಲ ರೀತಿಯ ಬೆಂಬಲ ನೀಡುವಂತೆ ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ.

ಇದಲ್ಲದೆ ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗಳ ಕುರಿತಂತೆ ಸಮನ್ವಯಕ್ಕಾಗಿ ಹಿರಿಯ ಐಎಎಸ್‌ ಅಧಿಕಾರಿ ಪಿ.ಸಿ. ಜಾಫರ್‌ (ಮೊಬೈಲ್‌ ಸಂಖ್ಯೆ 9448355577) ಹಾಗೂ ದಿಲೀಶ್‌ ಶಶಿ (9446000514) ಅವರನ್ನು ನಿಯೋಜಿಸಲಾಗಿದೆ. ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರದಿಂದ ಪ್ರಯತ್ನ ನಡೆಸುತ್ತಿದ್ದು, ವಯನಾಡಿನಲ್ಲಿ ಕನ್ನಡಿಗರು ಸಿಲುಕಿಕೊಂಡಿರುವ ಬಗ್ಗೆ ಪ್ರಾಥಮಿಕ ಮಾಹಿತಿ ದೊರೆತಿದೆ. ಅವರ ರಕ್ಷಣೆಗೆ ಎಲ್ಲ ಪ್ರಯತ್ನ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:29 pm, Tue, 30 July 24