ಇಂದಿನ ಯುವಜನತೆಯು ಮೋಜು, ಮಸ್ತಿ, ತಡ ರಾತ್ರಿಯ ಪಾರ್ಟಿ ಎಂದು ಜೀವನ ಶೈಲಿಯನ್ನೇ ಬದಲಾಯಿಸಿಕೊಂಡಿದ್ದಾರೆ. ಇದರಿಂದ ಹದಿಹರೆಯದ ವಯಸ್ಸಿನಲ್ಲಿ ಹಾದಿ ತಪ್ಪುವುದು ಸರ್ವೇ ಸಾಮಾನ್ಯವಾಗಿ ಬಿಟ್ಟಿದೆ. ಹೀಗಾಗಿ ಯುವಕರಂತೂ ಮಾದಕ ವಸ್ತುಗಳಿಗೆ ದಾಸರಾಗುತ್ತಿದ್ದು, ಇದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಮಾದಕ ವಸ್ತುಗಳ ಮಾರಾಟ ಹಾಗೂ ಸಾಗಾಣೆ ಕಾನೂನ ಬಾಹಿರ ಚಟುವಟಿಕೆಯೆಂದು ತಿಳಿದಿದ್ದರೂ ಇದರಲ್ಲಿ ತೊಡಗಿಸಿಕೊಂಡಿರುವ ಸಂಖ್ಯೆಯು ಹೆಚ್ಚಾಗುತ್ತಲೇ ಇದೆ. ಹೀಗಾಗಿ ಮಾದಕ ವ್ಯಸನ ಮತ್ತು ಇದರ ಕಳ್ಳ ಸಾಗಾಣಿಕೆಯಂತಹ ಚಟುವಟಿಕೆಗಳಿಂದ ಜನರನ್ನು ರಕ್ಷಿಸಲು ಹಾಗೂ ಈ ಬಗ್ಗೆ ಅರಿವು ಮೂಡಿಸುವ ದೃಷ್ಟಿಯಿಂದ ಪ್ರತಿ ವರ್ಷ ಜೂನ್ 26ರಂದು ಅಂತಾರಾಷ್ಟ್ರೀಯ ಮಾದಕ ದ್ರವ್ಯ ಮತ್ತು ಕಳ್ಳಸಾಗಣೆ ವಿರೋಧಿ ದಿನವನ್ನು ವಿಶ್ವದಾದ್ಯಂತ ಆಚರಿಸಲಾಗುತ್ತದೆ.
ಯುವ ಸಮೂಹವನ್ನು ಮಾದಕ ದ್ರವ್ಯ ಸೇವನೆಯಿಂದ ಮುಕ್ತಗೊಳಿಸುವ ನಿಟ್ಟಿನಲ್ಲಿ 1986ರ ಜೂನ್ 26ರಂದು ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ‘ಅಂತಾರಾಷ್ಟ್ರೀಯ ಮಾದಕ ದ್ರವ್ಯ ಮತ್ತು ಕಳ್ಳಸಾಗಣೆ ವಿರೋಧಿ ದಿನ’ವನ್ನು ಆರಂಭಿಸಲಾಯಿತು. ಆದಾದ ಬಳಿಕ ವಿಶ್ವಸಂಸ್ಥೆಯು 1997ರಲ್ಲಿ ‘ಮಾದಕ ದ್ರವ್ಯ ಮತ್ತು ಅಪರಾಧ ವಿಭಾಗ’ವನ್ನು ಆರಂಭಿಸಿತು. ಕಾನೂನು ಬಾಹಿರ ಚಟುವಟಿಕೆಗಳಿಂದ ಯುವ ಸಮೂಹವನ್ನು ರಕ್ಷಣೆ ಮಾಡುವ ಉದ್ದೇಶವನ್ನು ಈ ದಿನವು ಹೊಂದಿದೆ.
ಇದನ್ನೂ ಓದಿ: ತೊನ್ನು ರೋಗ ಪೂರ್ವ ಜನ್ಮದ ಶಾಪವಲ್ಲ, ಚಿಕಿತ್ಸೆ ನೀಡಿದರೆ ಗುಣಮುಖ ಸಾಧ್ಯ
ಮಾದಕ ವ್ಯಸನಕ್ಕೆ ದಾಸರಾಗುವುದರಿಂದ ಆರೋಗ್ಯದ ಮೇಲಾಗುವ ಪರಿಣಾಮಗಳು ಹಾಗೂ ಈ ಕಳ್ಳ ಸಾಗಾಣಿಕೆಯಂತಹ ಚಟುವಟಿಕೆಗಳಿಂದ ವಿದ್ಯಾರ್ಥಿಗಳನ್ನು ಹಾಗೂ ಯುವಸಮೂಹವನ್ನು ರಕ್ಷಿಸಲು ಹಾಗೂ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ದಿನವು ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಈ ದಿನದಂದು ಸಮುದಾಯ ಸಂಸ್ಥೆಗಳು, ಶಾಲಾ ಕಾಲೇಜುಗಳು ಸೇರಿದಂತೆ ಇನ್ನಿತ್ತರ ಸಂಸ್ಥೆಗಳು ವಿದ್ಯಾರ್ಥಿಗಳಲ್ಲಿ ಹಾಗೂ ನಾಗರೀಕರಲ್ಲಿ ಮಾದಕ ದ್ರವ್ಯದ ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಸೆಮಿನಾರ್ ಗಳು, ಜಾಥಗಳು ಹಾಗೂ ಅಭಿಯಾನಗಳಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ.
ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ