
ಶಿಕ್ಷಣವು (Education) ಮೂಲಭೂತ ಹಕ್ಕಾಗಿದ್ದು, ಇದು ವ್ಯಕ್ತಿಯ ಜೀವನವನ್ನು ರೂಪಿಸುವಲ್ಲಿ ಮತ್ತು ಸಮಾಜದ ಅಭಿವೃದ್ಧಿಯಲ್ಲಿ ಬಹು ಮುಖ್ಯ ಪಾತ್ರವನ್ನು ವಹಿಸುತ್ತದೆ. ಶಿಕ್ಷಣದ ಗುರಿ ಕೇವಲ ಸಾಕ್ಷರತೆಗೆ ಸೀಮಿತವಾಗಿಲ್ಲ, ವ್ಯಕ್ತಿಯ ವ್ಯಕ್ತಿತ್ವ ನಿರ್ಮಾಣ, ಸಮಾಜ ಬದಲಾವಣೆ, ದೇಶವನ್ನು ಅಭಿವೃದ್ಧಿಯತ್ತ ಸಾಗಿಸುವ ಗುರಿಯನ್ನು ಹೊಂದಿದೆ. ಶಿಕ್ಷಣದ ಈ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಶಿಕ್ಷಣ ಕ್ಷೇತ್ರಕ್ಕೆ ಅತ್ಯದ್ಭುತ ಕೊಡುಗೆಗಳನ್ನು ನೀಡಿದ ಸ್ವತಂತ್ರ ಭಾರತದ ಮೊದಲ ಶಿಕ್ಷಣ ಸಚಿವರಾದ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜನ್ಮ ಜಯಂತಿಯಂದು ರಾಷ್ಟ್ರೀಯ ಶಿಕ್ಷಣ ದಿನವನ್ನು ಆಚರಿಸಲಾಗುತ್ತದೆ.
ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜನ್ಮ ಜಯಂತಿಯ ಸ್ಮರಣಾರ್ಥ ಪ್ರತಿ ವರ್ಷ ನವೆಂಬರ್ 11 ರಂದು ರಾಷ್ಟ್ರೀಯ ಶಿಕ್ಷಣ ದಿನವನ್ನು ಆಚರಿಸಲಾಗುತ್ತದೆ. ಮೌಲಾನಾ ಅಬುಲ್ ಕಲಾಂ ಆಜಾದ್ ಸ್ವತಂತ್ರ ಭಾರತದ ಮೊದಲ ಶಿಕ್ಷಣ ಮಂತ್ರಿಯಾಗಿ, ಭಾರತೀಯ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಮಹತ್ತರವಾದ ಕೊಡುಗೆಯನ್ನು ನೀಡಿದ್ದಾರೆ, ಇವರ ಈ ಅತ್ಯಮೂಲ್ಯ ಕೊಡುಗೆಗಳನ್ನು ಗೌರವಿಸುವ ಸಲುವಾಗಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು 2008 ರಲ್ಲಿ ಆಜಾದ್ ಜನ್ಮದಿನವನ್ನು ರಾಷ್ಟ್ರೀಯ ಶಿಕ್ಷಣ ದಿನವಾಗಿ ಆಚರಿಸಲು ಘೋಷಿಸಿತು. ಅಂದಿನಿಂದ ಪ್ರತಿವರ್ಷ ನವೆಂಬರ್ 11 ರಂದು ರಾಷ್ಟ್ರೀಯ ಶಿಕ್ಷಣ ದಿನವನ್ನು ಆಚರಿಸಲಾಗುತ್ತದೆ.
ಭಾರತವು ಇಂದು ದೃಢವಾದ ಆಧುನಿಕ ಶಿಕ್ಷಣ ವ್ಯವಸ್ಥೆಯನ್ನು ಹೊಂದಿದೆ, ಆ ವ್ಯವಸ್ಥೆಗೆ ಅಡಿಪಾಯವನ್ನು ಹಾಕಿದ ಕೀರ್ತಿ ಮೌಲಾನಾ ಅಬುಲ್ ಕಲಾಂ ಆಜಾದ್ ಅವರಿಗೆ ಸಲ್ಲುತ್ತದೆ. ಸಮಾಜವನ್ನು ಪರಿವರ್ತಿಸಲು ಮತ್ತು ಜನಸಾಮಾನ್ಯರನ್ನು ಸಬಲಗೊಳಿಸು ಪ್ರಬಲವಾದ ಅಸ್ತ್ರ ಶಿಕ್ಷಣ ಎಂದು ದೃಢವಾಗಿ ನಂಬಿದ್ದ ಆಜಾದ್, ಭಾರತದ ಮೊದಲ ಶಿಕ್ಷಣ ಸಚಿವರಾಗಿ ದೇಶದ ಆಧುನಿಕ ಶಿಕ್ಷಣ ವ್ಯವಸ್ಥೆಗೆ ಅಡಿಪಾಯ ಹಾಕಿದರು. ಸ್ವತಂತ್ರ ಭಾರತದ ಮೊದಲ ಶಿಕ್ಷಣ ಸಚಿವರಾಗಿ ನೇಮಕಗೊಂಡ ಇವರು ತಮ್ಮ ಅಧಿಕಾರವಧಿಯಲ್ಲಿ ದೇಶದ ಶಿಕ್ಷಣ ವ್ಯವಸ್ಥೆಯನ್ನು ಆಧುನೀಕರಿಸುವಲ್ಲಿ ಮತ್ತು ಎಲ್ಲರಿಗೂ ಶಿಕ್ಷಣವನ್ನು ದೊರೆಯುವಂತೆ ಮಾಡುವಲ್ಲಿ ಗಮನಾರ್ಹವಾಗಿ ಕೊಡುಗೆಯನ್ನು ನೀಡಿದ್ದಾರೆ.
ಮೌಲಾನ ಅಬುಲ್ ಕಲಾಂ ಆಜಾದ್ ಅವರು ಶಿಕ್ಷಣವನ್ನು ಭಾರತದ ಅಭಿವೃದ್ಧಿಯ ಆಧಾರವೆಂದು ಪರಿಗಣಿಸಿದ್ದರು ಮತ್ತು ಈ ನಿಟ್ಟಿನಲ್ಲಿ ಪ್ರಾಥಮಿಕ ಶಿಕ್ಷಣವನ್ನು ಕಡ್ಡಾಯ ಮತ್ತು ಉಚಿತ ಮಾಡಲು ಪ್ರಸ್ತಾಪಿಸಿದರು. ಇದಲ್ಲದೆ ಅವರು ಇಂಡಿಯನ್ ಕೌನ್ಸಿಲ್ ಆಫ್ ಸೋಷಿಯಲ್ ಸೈನ್ಸ್ ರಿಸರ್ಚ್ (ICSSR), ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ಸ್ಥಾಪನೆ ಮಾಡಿದರು. ಹೀಗೆ ಭಾರತೀಯ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ಇವರು ಪ್ರಮುಖ ಪಾತ್ರವನ್ನು ವಹಿಸಿದ್ದಾರೆ.
ಇದನ್ನೂ ಓದಿ: ಸಾರ್ವಜನಿಕ ಸಾರಿಗೆಯನ್ನು ಬಳಸುವುದರಿಂದ ಈ ಎಲ್ಲಾ ಪ್ರಯೋಜನಗಳು ಲಭಿಸುತ್ತವೆ
ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:57 am, Wed, 11 November 26