ಟ್ರಿಪ್ ಹೋಗುವುದೆಂದರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ. ಇಂದಿನ ಬಿಡುವಿಲ್ಲದ ಜೀವನದಲ್ಲಿ ಸಮಯ ಸಿಕ್ಕರೆ ಸಾಕು, ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಮೂಲಕ ದಣಿವನ್ನು ಮರೆತು ರಿಲ್ಯಾಕ್ಸ್ ಆಗುತ್ತಾರೆ. ಆದರೆ ಇತ್ತೀಚೆಗಿನ ವರ್ಷಗಳಲ್ಲಿ ಪ್ರವಾಸಕ್ಕೆ ಹೋಗುವವರ ಸಂಖ್ಯೆಯೂ ಹೆಚ್ಚುತ್ತಿದ್ದು, ಪ್ರವಾಸೋದ್ಯಮ ಹಿಂದೆಂದಿಗಿಂತಲೂ ಹೆಚ್ಚು ಬೃಹತ್ ಆಗಿ ಬೆಳೆಯುತ್ತಿದೆ. ಈಗಾಗಲೇ ಪ್ರವಾಸೋದ್ಯಮ ಬೆಳೆಯುತ್ತಿರುವುದರ ಪರಿಣಾಮ ದೇಶದ ಆರ್ಥಿಕತೆಗೆ ದೊಡ್ಡ ಮಟ್ಟದಲ್ಲಿ ಕೊಡುಗೆ ನೀಡುತ್ತಿದೆ ಹಾಗೂ ಈಗಾಗಲೇ ಅನೇಕರಿಗೆ ಉದ್ಯೋಗವನ್ನು ನೀಡಿದೆ. ಹೀಗಾಗಿ ಇನ್ನಷ್ಟು ಪ್ರವಾಸೋದ್ಯಮವನ್ನು ಉತ್ತೇಜಿಸುವ ಉದ್ದೇಶದಿಂದ ಜನವರಿ 25 ರಂದು ರಾಷ್ಟ್ರೀಯ ಪ್ರವಾಸೋದ್ಯಮ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.
ದೇಶಕ್ಕೆ ಸ್ವಾತಂತ್ರ್ಯದ ಬಳಿಕ ಅಂದರೆ 1948 ರಲ್ಲಿ ಮೊದಲ ಬಾರಿಗೆ ಪ್ರವಾಸೋದ್ಯಮ ದಿನವನ್ನು ಆಚರಿಸಲಾಯಿತು. ಅದೇ ವರ್ಷದಲ್ಲಿ ಭಾರತದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಪ್ರವಾಸೋದ್ಯಮ ಸಾರಿಗೆ ಸಮಿತಿಯನ್ನು ರಚಿಸಲಾಯಿತು. 1998 ರಲ್ಲಿ ಪ್ರವಾಸೋದ್ಯಮ ಮತ್ತು ಸಂಪರ್ಕ ಸಚಿವಾಲಯದ ಅಡಿಯಲ್ಲಿ ಪ್ರವಾಸೋದ್ಯಮ ಇಲಾಖೆ ಆರಂಭಿಸಲಾಯಿತು. ಹೀಗಾಗಿ ಭಾರತದಲ್ಲಿ ಇನ್ನಷ್ಟು ಪ್ರವಾಸಿ ತಾಣಗಳನ್ನು ಉತ್ತೇಜಿಸುವ ಉದ್ದೇಶದಿಂದ ಪ್ರತಿ ವರ್ಷ ಜನವರಿ 25 ರಂದು ರಾಷ್ಟ್ರೀಯ ಪ್ರವಾಸೋದ್ಯಮ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.
ದೇಶದ ಆರ್ಥಿಕತೆಗೆ ಪ್ರವಾಸೋದ್ಯಮದ ಮಹತ್ವದ ಬಗ್ಗೆ ತಿಳಿಸುವುದು. ಪ್ರವಾಸೋದ್ಯಮ ಕ್ಷೇತ್ರದ ಬೆಳವಣಿಗೆಯ ನಿರೀಕ್ಷೆಗಳು ಹಾಗೂ ಭಾರತದ ಆರ್ಥಿಕ ಅಭಿವೃದ್ಧಿಯ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎನ್ನುವ ಬಗ್ಗೆ ತಿಳಿಸುವ ಸಲುವಾಗಿ ಈ ದಿನದ ಆಚರಣೆಯೂ ಮಹತ್ವದ್ದಾಗಿದೆ. ಈ ರಾಷ್ಟ್ರೀಯ ಪ್ರವಾಸೋದ್ಯಮ ದಿನದಂದು ರಾಜ್ಯಗಳು ತಮ್ಮ ಪ್ರದೇಶದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಸೆಮಿನಾರ್‌ಗಳು, ಕಾರ್ಯಾಗಾರ, ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ಹತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ.
ಇದನ್ನೂ ಓದಿ: ಗಗನಸಖಿ ಆಗುವ ಕನಸನ್ನು ನನಸು ಮಾಡಿಕೊಳ್ಳುವುದು ಹೇಗೆ? ಏನೆಲ್ಲಾ ಅರ್ಹತೆಗಳಿರಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ
ಭಾರತದ ಆರ್ಥಿಕತೆಯನ್ನು ಉತ್ತೇಜಿಸುವಲ್ಲಿ ಪ್ರವಾಸೋದ್ಯಮವು ದೊಡ್ಡ ಪಾತ್ರವನ್ನು ವಹಿಸುತ್ತದೆ. ಈಗಾಗಲೇ ಈ ಪ್ರವಾಸೋದ್ಯಮವು ಭಾರತದಲ್ಲಿ ಅತಿ ದೊಡ್ಡ ಸೇವಾ ವಲಯವಾಗಿದೆ. ಇದು ರಾಷ್ಟ್ರೀಯ ಜಿಡಿಪಿಗೆ 6.23% ಹಾಗೂ ಭಾರತದಲ್ಲಿ ಒಟ್ಟು ಉದ್ಯೋಗಕ್ಕೆ 8.78%ರಷ್ಟು ಕೊಡುಗೆ ನೀಡುತ್ತದೆ. ವಿಶ್ವ ಪ್ರಯಾಣ ಮತ್ತು ಪ್ರವಾಸೋದ್ಯಮ ಮಂಡಳಿಯ ಪ್ರಕಾರ ವಾರ್ಷಿಕ ಐದು ದಶಲಕ್ಷಕ್ಕಿಂತಲೂ ಹೆಚ್ಚು ವಿದೇಶೀ ಪ್ರವಾಸಿಗರು ಭಾರತಕ್ಕೆ ಆಗಮಿಸಿದ್ದಾರೆ. ವರ್ಷದಿಂದ ವರ್ಷಕ್ಕೆ ಭಾರತದ ಆರ್ಥಿಕತೆಗೆ ಪ್ರವಾಸೋದ್ಯಮದಿಂದ ಬರುತ್ತಿರುವ ಆದಾಯವು ಹೆಚ್ಚುತ್ತಲೇ ಇದೆ. ರೈಲು ನಿಲ್ದಾಣಗಳು, ಪ್ರವಾಸಿ ತಾಣಗಳ ಸ್ವಚ್ಛತೆ ಹಾಗೂ ಅಭಿವೃದ್ಧಿ, ತಾಣಗಳಲ್ಲಿ ಮೂಲಸೌಕರ್ಯಗಳು ವ್ಯವಸ್ಥೆಯ ಬಗ್ಗೆ ಇನ್ನಷ್ಟು ಗಮನ ಹರಿಸಿದರೆ ದೇಶ ಸೇರಿದಂತೆ ವಿದೇಶಿ ಪ್ರವಾಸಿಗರ ಸಂಖ್ಯೆಯೂ ಅಧಿಕವಾಗಿ ದೇಶದ ಆರ್ಥಿಕತೆ ಲಾಭವನ್ನು ತಂದು ಕೊಡುತ್ತದೆ.
ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ