
ಮುಂಬೈ: ಕೊವಿಶೀಲ್ಡ್ ಲಸಿಕೆ ಉತ್ಪಾದಿಸುತ್ತಿರುವ ಪುಣೆಯ ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಕಟ್ಟಡದಲ್ಲಿ ನಡೆದ ಅಗ್ನಿ ದುರಂತದಲ್ಲಿ ಮೃತಪಟ್ಟ ಐವರಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.
ಮಧ್ಯಾಹ್ನ 2 ಗಂಟೆ ಸುಮಾರಿಗೆ ಸೆರಮ್ ಸಂಸ್ಥೆಯ ಎರಡನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಕಟ್ಟಡದಲ್ಲಿ ಸಿಲುಕಿದ್ದವರ ಪೈಕಿ ಐವರು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಮೃತಪಟ್ಟಿದ್ದರು. ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗ ಸೆರಮ್ ಇನ್ಸ್ಟಿಟ್ಯೂಟ್ ಮೃತರ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.
ಮಹಾ ಸಿಎಂ ಟ್ವೀಟ್
ಸೆರಮ್ ಇನ್ಸ್ಟಿಟ್ಯೂಟ್ನಲ್ಲಿ ಅಗ್ನಿ ಆಕಸ್ಮಿಕ ಪ್ರಕರಣಕ್ಕೆ ಸಂಬಂಧಿಸಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಟ್ವೀಟ್ ಮಾಡಿದ್ದಾರೆ. ಅಗ್ನಿ ಅವಘಡದಲ್ಲಿ 6 ಜನರನ್ನು ರಕ್ಷಣೆ ಮಾಡಲಾಗಿದೆ. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿರುವ ಸಾಧ್ಯತೆ ಇದೆ. ಕೋವಿಡ್ ಲಸಿಕೆ ಸುರಕ್ಷಿತವಾಗಿದೆ ಎಂದಿದ್ದಾರೆ.
ಕುಟುಂಬಸ್ಥರ ದುಃಖದಲ್ಲಿ ನಾನು ಭಾಗಿ- ಮೋದಿ
ಸೆರಮ್ ಇನ್ಸ್ಟಿಟ್ಯೂಟ್ ಅಗ್ನಿ ಅವಡಘದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಅಗ್ನಿ ಅವಘಡದಿಂದಾಗಿ ಪ್ರಾಣಹಾನಿ ಆಗಿದ್ದು ದುರದೃಷ್ಟಕರ. ಮೃತಪಟ್ಟವರ ಕುಟುಂಬಸ್ಥರ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲೆಂದು ಪ್ರಾರ್ಥಿಸುತ್ತೇನೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ಇದರ ಜೊತೆ ರಾಷ್ಟ್ರಪತಿ ರಾಮನಾಥ ಕೋವಿಂದ ಕೂಡ ಟ್ವೀಟ್ ಮಾಡಿ ಮೃತರಿಗೆ ಸಂತಾಪ ಸೂಚಿಸಿದ್ದಾರೆ.
ಸೆರಮ್ ಇನ್ಸ್ಟಿಟ್ಯೂಟ್ ಅಗ್ನಿ ದುರಂತ: ಐವರ ಸಾವು, ಕೆಲವರ ಸ್ಥಿತಿ ಗಂಭೀರ