ಉತ್ತರಾಖಂಡದ ಪೌರಿಯಲ್ಲಿ ಕಾರು ಕಂದಕಕ್ಕೆ ಉರುಳಿ 7 ಜನ ಸಾವು, ಐವರಿಗೆ ಗಾಯ
ಉತ್ತರಾಖಂಡದ ಪೌರಿ ಜಿಲ್ಲೆಯ ಲ್ಯಾನ್ಸ್‌ಡೌನ್ ಪ್ರದೇಶದಲ್ಲಿ ಇಂದು ಇಕೋ ಕಾರು ಕಂದಕಕ್ಕೆ ಉರುಳಿದ ಪರಿಣಾಮ 6 ಮಹಿಳೆಯರು ಸೇರಿದಂತೆ 7 ಮಂದಿ ಮೃತಪಟ್ಟಿದ್ದು, ಇತರ ಐವರು ಗಾಯಗೊಂಡಿದ್ದಾರೆ. ಕಲ್ವಾರಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು, ಆ ವೇಳೆ ಇಕೋ ಕಾರಿನಲ್ಲಿ 12 ಜನರು ಪ್ರಯಾಣಿಸುತ್ತಿದ್ದರು. ರಿಖ್ನಿಖಾಲ್‌ನಲ್ಲಿ ಗುಂಪು ಸಭೆಯಲ್ಲಿ ಭಾಗವಹಿಸಿದ ನಂತರ ಮಹಿಳೆಯರು ತಮ್ಮ ಗ್ರಾಮಕ್ಕೆ ಹಿಂದಿರುಗುತ್ತಿದ್ದರು ಎಂದು ಲ್ಯಾನ್ಸ್‌ಡೌನ್‌ನ ಬಿಜೆಪಿ ಶಾಸಕ ದಿಲೀಪ್ ರಾವತ್ ತಿಳಿಸಿದ್ದಾರೆ. ಮೃತರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಪೌರಿ, ನವೆಂಬರ್ 28: ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯರು ಸೇರಿದಂತೆ 7 ಮಂದಿ ಮೃತಪಟ್ಟಿದ್ದು, 5 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಇಂದು ಮಧ್ಯಾಹ್ನ ಸುಮಾರು 1 ಗಂಟೆಯ ವೇಳೆಗೆ ರಿಖ್ನಿಖಾಲ್ ಪ್ರದೇಶದ ಕಲ್ವಾಡಿ ಬಳಿ ಈ ದುರ್ಘಟನೆ ಸಂಭವಿಸಿದೆ. ಸಾಮರ್ಥ್ಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಅಂದರೆ 12೨ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಇಕೋ ಕಾರು ಚಾಲಕನ ನಿಯಂತ್ರಣ ತಪ್ಪಿ ಸುಮಾರು 300 ಮೀಟರ್ ಆಳದ ಕಂದಕಕ್ಕೆ ಉರುಳಿದೆ.
ಈ ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಪರಿಹಾರ ಮತ್ತು ರಕ್ಷಣಾ ಕಾರ್ಯಗಳನ್ನು ಚುರುಕುಗೊಳಿಸುವಂತೆ ಹಾಗೂ ಗಾಯಾಳುಗಳಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದ್ದಾರೆ. ಅಲ್ಲದೆ, ಗಂಭೀರವಾಗಿ ಗಾಯಗೊಂಡವರನ್ನು ಏರ್‌ಲಿಫ್ಟ್ ಮೂಲಕ ಉನ್ನತ ಮಟ್ಟದ ವೈದ್ಯಕೀಯ ಕೇಂದ್ರಗಳಿಗೆ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
#WATCH | Pauri Garhwal, Uttarakhand | Seven people, including the driver, died and five others were injured after an Eeco vehicle lost control and fell into a deep gorge near Kalwadi in the Rikhnikhal block of Pauri district.
According to a preliminary police report, the women in the vehicle were associated with self-help groups (SHGs) and were returning after submitting application forms for the Didi-Bhuli scheme in Rikhnikhal. The injured have been shifted to a hospital for treatment.
(Source: Police)
— ANI (@ANI) November 28, 2026
ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: ಕಾರು ಲಾರಿ ಡಿಕ್ಕಿಯಾಗಿ ಇಬ್ಬರು ಸಾವು, ನಾಲ್ವರಿಗೆ ಗಂಭೀರ ಗಾಯ
ಮೃತಪಟ್ಟ ಮಹಿಳೆಯರೆಲ್ಲರೂ ಸ್ಥಳೀಯ ಸ್ವಸಹಾಯ ಸಂಘಗಳ (ಎಸ್ಹೆಚ್ಜಿ) ಸದಸ್ಯರಾಗಿದ್ದು, ರಿಖ್ನಿಖಾಲ್‌ನಲ್ಲಿ ‘ದೀದಿ-ಭೂಲಿ’ ಯೋಜನೆಗೆ ಅರ್ಜಿ ಸಲ್ಲಿಸಿ ತಮ್ಮ ಗ್ರಾಮಕ್ಕೆ ಹಿಂದಿರುಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ ಎಂದು ಪ್ರಾಥಮಿಕ ಪೊಲೀಸ್ ವರದಿಗಳು ತಿಳಿಸಿವೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳೀಯ ನಿವಾಸಿಗಳು, ಜಿಲ್ಲಾ ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್) ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿವೆ. ಗಾಯಾಳುಗಳನ್ನು ತಕ್ಷಣವೇ ಸಮೀಪದ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಏರ್‌ಲಿಫ್ಟ್ ಮೂಲಕ ಉನ್ನತ ಆಸ್ಪತ್ರೆಗೆ ಸ್ಥಳಾಂತರಿಸಲು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಈ ದುರಂತಕ್ಕೆ ತೀವ್ರ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ನೀಡುವುದಾಗಿ ಪ್ರಕಟಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೂ ಘಟನೆಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:21 pm, Sat, 28 November 26




