AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರಪ್ರದೇಶ ಅಲ್ಲೂರಿ ಜಿಲ್ಲೆಯಲ್ಲಿ ರಸ್ತೆ ಕಾಮಗಾರಿ ವೇಳೆ ಭೀಕರ ಸ್ಫೋಟ: ಐವರು ಸಾವು

ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯಲ್ಲಿ ರಸ್ತೆ ವಿಸ್ತರಣೆ ಕಾಮಗಾರಿ ವೇಳೆ ಸ್ಫೋಟಕ ಸಾಧನ ಸಿಡಿದು ಶಿಕ್ಷಕಿ ಸೇರಿ ಐವರು ಮೃತಪಟ್ಟಿದ್ದಾರೆ. ಅನಂತಗಿರಿ ಮಂಡಲದ ಪಿನಕೋಟ ಗ್ರಾಮದಲ್ಲಿ ಸಂಭವಿಸಿದ ಸ್ಫೋಟಕ್ಕೆ ಎರಡು ವಾಹನಗಳು ನಾಶವಾಗಿವೆ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಗೃಹ ಸಚಿವೆ ವಂಗಲಪುಡಿ ಅನಿತಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಆಂಧ್ರಪ್ರದೇಶ ಅಲ್ಲೂರಿ ಜಿಲ್ಲೆಯಲ್ಲಿ ರಸ್ತೆ ಕಾಮಗಾರಿ ವೇಳೆ ಭೀಕರ ಸ್ಫೋಟ: ಐವರು ಸಾವು
ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯಲ್ಲಿ ಘಟನೆImage Credit source: TV9 Network
ಗಣಪತಿ ಶರ್ಮಾ
|

Updated on: Oct 24, 2026 | 3:20 PM

Share

ಮುಖ್ಯಾಂಶಗಳು

  • ರಸ್ತೆ ಕಾಮಗಾರಿ ವೇಳೆ ಭಾರಿ ಸ್ಫೋಟ
  • ಶಿಕ್ಷಕಿ ಸೇರಿ ಐವರು ದುರ್ಮರಣ
  • ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡಲು ಸೂಚನೆ

ಹೈದರಾಬಾದ್, ಅಕ್ಟೋಬರ್ 24: ರಸ್ತೆ ಕಾಮಗಾರಿ ವೇಳೆ ಸ್ಫೋಟಕ ಸಾಧನ ಸಿಡಿದು ಐವರು ಮೃತಪಟ್ಟಿರುವ ದಾರುಣ ಘಟನೆ ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಅನಂತಗಿರಿ ಮಂಡಲದ ಪಿನಕೋಟ ಗ್ರಾಮದಲ್ಲಿ ಘಾಟ್ ರಸ್ತೆಯ ವಿಸ್ತರಣೆಗಾಗಿ ಬಂಡೆಗಳನ್ನು ಸ್ಫೋಟಿಸುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಸ್ತೆ ವಿಸ್ತರಣೆ ಕಾಮಗಾರಿಗಾಗಿ ಜಿಲೆಟಿನ್ ಕಡ್ಡಿಗಳನ್ನು ಹೊಂದಿದ್ದ ವಿಶೇಷ ಸಾಧನವನ್ನು ಬಳಸಿ ಬಂಡೆಗಳನ್ನು ಸ್ಫೋಟಿಸಲಾಗುತ್ತಿತ್ತು. ಈ ವೇಳೆ ಸ್ಫೋಟಕ ಸಾಧನದಲ್ಲಿ ತಾಂತ್ರಿಕ ದೋಷ ಉಂಟಾಗಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಫೋಟದ ತೀವ್ರತೆಗೆ ಎರಡು ವಾಹನಗಳು ಸಂಪೂರ್ಣವಾಗಿ ನಾಶವಾಗಿವೆ.

ಈ ದುರಂತದಲ್ಲಿ ವಾಹನದ ಚಾಲಕ ಮತ್ತು ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ವಾಹನದಲ್ಲಿ ಬರುತ್ತಿದ್ದ ಶಿಕ್ಷಕಿಯೊಬ್ಬರೂ ಸ್ಫೋಟಕ್ಕೆ ಬಲಿಯಾಗಿದ್ದಾರೆ. ಮೃತರಲ್ಲಿ ವಿಶಾಖಪಟ್ಟಣಂನ ಶಿಕ್ಷಕಿ ಸುನೀತಾ, ದೇವರಪಲ್ಲಿಯ ಕಾರ್ಮಿಕ ಮಣಿ, ಚಿದಿಕಾಡದ ಕಾರ್ಮಿಕ ನಾರಾಯಣರಾವ್ ಹಾಗೂ ಕಡಪದ ಪವನ್ ಕುಮಾರ್ ಅವರನ್ನು ಗುರುತಿಸಲಾಗಿದೆ. ಮೃತಪಟ್ಟ ಇನ್ನೊಬ್ಬರ ಗುರುತು ಇನ್ನಷ್ಟೇ ಲಭ್ಯವಾಗಬೇಕಿದೆ.

ಘಟನೆ ನಡೆದ ತಕ್ಷಣ ಸ್ಥಳೀಯ ಕಂದಾಯ ಅಧಿಕಾರಿಗಳು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.

ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಗೃಹ ಸಚಿವರ ಸೂಚನೆ

ಘಟನೆಗೆ ಆಂಧ್ರಪ್ರದೇಶದ ಗೃಹ ಸಚಿವೆ ವಂಗಲಪುಡಿ ಅನಿತಾ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಅವರು ಸಂತಾಪ ಸೂಚಿಸಿ ಸಂದೇಶ ಕಳುಹಿಸಿದ್ದು, ಅಲ್ಲೂರಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯೊಂದಿಗೆ ದೂರವಾಣಿ ಮೂಲಕ ಮಾತನಾಡಿ ಘಟನೆಯ ವಿವರಗಳನ್ನು ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಬಿಹಾರದ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ; 4 ಜನ ಸಾವು, ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಈ ದುರಂತವನ್ನು ಅತ್ಯಂತ ನೋವಿನ ಘಟನೆ ಎಂದು ಬಣ್ಣಿಸಿರುವ ಸಚಿವೆ, ಗಾಯಾಳುಗಳಿಗೆ ಸಾಧ್ಯವಾದಷ್ಟು ಉತ್ತಮ ಚಿಕಿತ್ಸೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಲ್ಲದೆ, ಸಂತ್ರಸ್ತ ಕುಟುಂಬಗಳ ನೆರವಿಗೆ ರಾಜ್ಯ ಸರ್ಕಾರ ನಿಲ್ಲಲಿದ್ದು, ಅಗತ್ಯ ಸಹಾಯ ಒದಗಿಸುವುದಾಗಿ ಭರವಸೆ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More