21 ವರ್ಷಗಳ ಕಾಲ ಟಿಎಂಸಿಯಲ್ಲಿದ್ದೆ ಎಂದು ಹೇಳಲು ನಾಚಿಕೆಯಾಗುತ್ತಿದೆ: ಸುವೇಂದು ಅಧಿಕಾರಿ
ನಾನು ಈ ಹಿಂದೆ ಇದ್ದ ಪಕ್ಷದಲ್ಲಿ ಶಿಸ್ತು ಇಲ್ಲ. ಅದು ಪಕ್ಷದಿಂದ ಕಂಪನಿಯಾಗಿ ಬದಲಾಗಿದೆ. 21 ವರ್ಷಗಳ ಕಾಲ ಆ ಪಕ್ಷದೊಂದಿಗೆ ಇದ್ದೆ ಎಂದು ಹೇಳಲು ನಾಚಿಕೆಯಾಗುತ್ತಿದೆ ಎಂದು ಟಿಎಂಸಿ ತೊರೆದು ಬಿಜೆಪಿ ಸೇರಿದ್ದ ಪಶ್ಚಿಮ ಬಂಗಾಳದ ನಾಯಕ ಸುವೇಂದು ಅಧಿಕಾರಿ ಹೇಳಿದ್ದಾರೆ.
ಕೋಲ್ಕತ್ತ: ನಾನು ತೃಣಮೂಲ ಕಾಂಗ್ರೆಸ್ ಜತೆ ಇದ್ದೆ ಎಂದು ಹೇಳಲು ನಾಚಿಕೆಯಾಗುತ್ತಿದೆ ಎಂದು ಕೆಲವು ದಿನಗಳ ಹಿಂದೆಯಷ್ಟೇ ಟಿಎಂಸಿ ತೊರೆದು ಬಿಜೆಪಿ ಸೇರಿದ್ದ ಪಶ್ಚಿಮ ಬಂಗಾಳದ ನಾಯಕ ಸುವೇಂದು ಅಧಿಕಾರಿ ಹೇಳಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ನಾನು ಈ ಹಿಂದೆ ಇದ್ದ ಪಕ್ಷದಲ್ಲಿ ಶಿಸ್ತು ಇಲ್ಲ. ಅದು ಪಕ್ಷದಿಂದ ಕಂಪನಿಯಾಗಿ ಬದಲಾಗಿದೆ. 21 ವರ್ಷಗಳ ಕಾಲ ಆ ಪಕ್ಷದೊಂದಿಗೆ ಇದ್ದೆ ಎಂದು ಹೇಳಲು ನಾಚಿಕೆಯಾಗುತ್ತಿದೆ ಎಂದಿದ್ದಾರೆ.
ಪಶ್ಚಿಮ ಬಂಗಾಳಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವ ಬೇಕಿದೆ. ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ತ್ಯಾಗದಿಂದಾಗಿಯೇ ನಾವು ಈಗ ಪಶ್ಚಿಮ ಬಂಗಾಳದಲ್ಲಿ ಬದುಕಲು ಸಾಧ್ಯವಾಗಿದೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ. ರಾಜ್ಯದಲ್ಲಿಯೂ ಬಿಜೆಪಿ ಸರ್ಕಾರ ಬರಬೇಕು. ಹಾಗಿದ್ದರೆ ಮಾತ್ರ ಪಶ್ಚಿಮ ಬಂಗಾಳದಲ್ಲಿ ಆರ್ಥಿಕ ಅಭಿವೃದ್ಧಿಯಾಗಬಹುದು. ನಿರುದ್ಯೋಗ ಸಮಸ್ಯೆಯನ್ನು ಕಡಿಮೆ ಮಾಡಬಹುದು ಎಂದರು.
ಈಶ್ವರ್ ಚಂದ್ರ ವಿದ್ಯಾಸಾಗರ್ ಅವರ ನೆಲದಲ್ಲಿ ನಮ್ಮನ್ನು ಸ್ವೀಕರಿಸಿದ್ದಕ್ಕೆ ಗೃಹ ಸಚಿವ ಅಮಿತ್ ಶಾ ಅವರಿಗೆ ನಾನು ಧನ್ಯವಾದಗಳನ್ನರ್ಪಿಸುತ್ತೇನೆ. ಬಿಜೆಪಿ ಜಗತ್ತಿನಲ್ಲಿಯೇ ಅತೀ ದೊಡ್ಡ ಪಕ್ಷವಾಗಿದೆ. ನಾನು ಈಗ ರಾಷ್ಟ್ರೀಯವಾದಿ, ಬಹುತ್ವವಾದಿ, ಶಿಸ್ತು ಮತ್ತು ದೇಶಭಕ್ತಿಯಿರುವ ಪಕ್ಷದ ಸದಸ್ಯನಾಗಿದ್ದೇನೆ. ಮುಂಬರುವ ಚುನಾವಣೆಯಲ್ಲಿ ನಮ್ಮ ಪಕ್ಷವನ್ನು ಗೆಲ್ಲಿಸಿ ಸೋನಾರ್ ಬಾಂಗ್ಲಾ (ಸುವರ್ಣ ಬಾಂಗ್ಲಾ) ಮಾಡುವ ಹೊಣೆ ನಮ್ಮ ಮೇಲಿದೆ ಎಂದು ಅಭಿಪ್ರಾಯಪಟ್ಟರು.
ರಾಜ್ಯದಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಅನುಷ್ಠಾನಗೊಳಿಸದೆ ಟಿಎಂಸಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ 73 ಲಕ್ಷ ರೈತರಿಗೆ ಮೋಸ ಮಾಡಿದೆ ಎಂದು ಆರೋಪಿಸಿದ ಸುವೇಂದು, ಬಿಜೆಪಿ ಕಾರ್ಯಕರ್ತರ ಮೇಲೆ ಇಲ್ಲಿ ಹಲ್ಲೆ ನಡೆಯುತ್ತದೆ. ಅವರ ವಿರುದ್ಧ ಸುಳ್ಳು ಆರೋಪಗಳನ್ನು ಹೊರಿಸಲಾಗುತ್ತದೆ. ಪಕ್ಷಕ್ಕಾಗಿ 135 ಕಾರ್ಯಕರ್ತರು ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಪಶ್ಚಿಮ ಬಂಗಾಳ: ಅಮಿತ್ ಶಾ ಸಮ್ಮುಖದಲ್ಲಿ ಸುವೇಂದು ಅಧಿಕಾರಿ, 11 ಶಾಸಕರು, 1 ಎಂಪಿ ಬಿಜೆಪಿ ಸೇರ್ಪಡೆ