ನವದೆಹಲಿ: ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದೆ. ಅಕ್ಟೋಬರ್ 19ರಂದು ಮತ ಎಣಿಕೆ ನಡೆಯಲಿದೆ. ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ (Shashi Tharoor) ಸ್ಪರ್ಧಿಸುವ ಸಾಧ್ಯತೆಯಿದೆ. ಆದರೆ, ಈ ಬಗ್ಗೆ ಅವರಿನ್ನೂ ಅಂತಿಮ ನಿರ್ಧಾರ ಮಾಡಿಲ್ಲ. ಕಾಂಗ್ರೆಸ್ನ ಹಂಗಾಮಿ ಅಧ್ಯಕ್ಷರಾಗಿರುವ ಸೋನಿಯಾ ಗಾಂಧಿ (Sonia Gandhi) ಸ್ಥಾನಕ್ಕೆ ಅಕ್ಟೋಬರ್ನಲ್ಲಿ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಧ್ಯಕ್ಷರಾಗಿ ರಾಹುಲ್ ಗಾಂಧಿ (Rahul Gandhi) ಅವರನ್ನು ಆಯ್ಕೆ ಮಾಡಲು ಒಂದು ಬಣ ಒತ್ತಾಯಿಸುತ್ತಿದ್ದರೆ ಇನ್ನೊಂದು ಬಣ ರಾಹುಲ್ ಗಾಂಧಿಯ ವಿರುದ್ಧ ಧ್ವನಿಯೆತ್ತಿದೆ.
ಕಾಂಗ್ರೆಸ್ ಪಕ್ಷದಲ್ಲಿ ಸಾಂಸ್ಥಿಕ ಸುಧಾರಣೆಗಳನ್ನು ಕೋರಿ 2020ರಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದ 23 ಕಾಂಗ್ರೆಸ್ ನಾಯಕರ ಗುಂಪಿನಲ್ಲಿ ಶಶಿ ತರೂರ್ ಕೂಡ ಇದ್ದರು. ಕಾಂಗ್ರೆಸ್ಗೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡುವ ಮೂಲಕ ಪಕ್ಷದ ಪುನರುಜ್ಜೀವನ ಮಾಡಬೇಕಿದೆ ಎಂದು ತಿರುವನಂತಪುರಂನ ಸಂಸದ ಶಶಿ ತರೂರ್ ಹೇಳಿದ್ದರು.
ಇದನ್ನೂ ಓದಿ: ನಾನು ಕಾಂಗ್ರೆಸ್ ಪಕ್ಷ ತೊರೆಯುವಂತೆ ಬಲವಂತ ಮಾಡಿದ್ದಾರೆ; ಕಾಂಗ್ರೆಸ್, ರಾಹುಲ್ ಗಾಂಧಿಗೆ ಗುಲಾಂ ನಬಿ ಆಜಾದ್ ತಿರುಗೇಟು
ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಆಯ್ಕೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿರುವಂತೆಯೇ ಪಕ್ಷದ ನೇತೃತ್ವ ವಹಿಸುವಂತೆ ರಾಹುಲ್ ಗಾಂಧಿ ಮನವೊಲಿಕೆಗೆ ಅಂತಿಮ ಹಂತದ ಕಸರತ್ತು ಕೂಡ ನಡೆಯುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ. ಯಾರು ಅಧ್ಯಕ್ಷರಾಗಬೇಕು ಮತ್ತು ರಾಹುಲ್ ಗಾಂಧಿ ಅಧ್ಯಕ್ಷರಾಗಬೇಕೇ ಎಂಬ ಬಗ್ಗೆ ಚರ್ಚೆ ನಡೆದಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಭೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ‘ಇದೊಂದು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ. ಅಧ್ಯಕ್ಷರಾಗಲು ಬಯಸುವವರು ನಾಮಪತ್ರ ಸಲ್ಲಿಸಬೇಕು ಎಂದಿದ್ದರು.
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದ್ದು, ಅಕ್ಟೋಬರ್ 19ರಂದು ಫಲಿತಾಂಶ ಪ್ರಕಟವಾಗಲಿದೆ. ಸೆಪ್ಟೆಂಬರ್ 22ರಂದು ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುವುದು. ಆದರೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಸೆಪ್ಟೆಂಬರ್ 24ರಂದು ಪ್ರಾರಂಭವಾಗಿ ಸೆಪ್ಟೆಂಬರ್ 30ರವರೆಗೆ ಮುಂದುವರಿಯುತ್ತದೆ.