ದೆಹಲಿ: ಪಂಚರಾಜ್ಯಗಳ ಚುನಾವಣೆ ಸಮೀಪಿಸುತ್ತಿದ್ದಂತೆ ಚುರುಕಾಗಿರುವ ಬಿಜೆಪಿ ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಮತ್ತು ಅಸ್ಸಾಂಗಳಲ್ಲಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಭಾನುವಾರ (ಮಾರ್ಚ್ 14) ಬಿಡುಗಡೆ ಮಾಡಿದೆ. ಕೇರಳದಲ್ಲಿ ಮೆಟ್ರೊ ಮ್ಯಾನ್ ಎಂದೇ ಜನಪ್ರಿಯತೆ ಹೊಂದಿರುವ ಇ.ಶ್ರೀಧರನ್ ಪಾಲಕ್ಕಾಡ್ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದು, ಬಿಜೆಪಿ ಒಟ್ಟು 115 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಉಳಿದ 25 ಕ್ಷೇತ್ರಗಳನ್ನು ಬಿಜೆಪಿ ತನ್ನ 4 ಮೈತ್ರಿಪಕ್ಷಗಳಿಗೆ ಬಿಟ್ಟುಕೊಟ್ಟಿದೆ. ಕೇರಳ ಬಿಜೆಪಿ ಅಧ್ಯಕ್ಷ ಕೆ.ಸುರೇಂದ್ರನ್ ಅವರು ಎರಡು ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದಾರೆ. ಕಾಸರಗೋಡಿನ ಮಂಜೇಶ್ವರ ವಿಧಾನಸಭಾ ಕ್ಷೇತ್ರ ಮತ್ತು ಪತ್ತನಂತಿಟ್ಟ ಕ್ಷೇತ್ರಗಳಿಂದ ಅವರು ಸ್ಪರ್ಧೆ ನಡೆಸಲಿದ್ದಾರೆ.
ಇತ್ತ ರಂಗೇರುತ್ತಿರುವ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಇಂದು ಬಿಜೆಪಿ ಇಂದು 3ನೇ ಹಂತದ 27 ಕ್ಷೇತ್ರಗಳು ಮತ್ತು 4ನೇ ಹಂತದ 38 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ 92 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧಿಸಲಿದ್ದು ಇಂದು, 17 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಿಸಿದೆ.
ತಮಿಳುನಾಡಲ್ಲಿ ಕರ್ನಾಟಕದ ಸಿಂಗಂಗೆ ಟಿಕೆಟ್!
ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರಿಗೆ ಬಿಜೆಪಿ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡಿದೆ. ಬಹು ಕುತೂಹಲಕಾರಿ ತಿರುವು ಪಡೆಯುತ್ತಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 20 ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದು, ಅಣ್ಣಾಮಲೈ ಅವರ ಜತೆಗೆ ನಟಿ ಖುಷ್ಬೂ ಅವರಿಗೂ ಟಿಕೆಟ್ ನೀಡಿದೆ. ಅರವಕುರಿಚಿ ಕ್ಷೇತ್ರದಿಂದ ಅಣ್ಣಾಮಲೈ ಸ್ಪರ್ಧಿಸಲಿದ್ದಾರೆ. ಎನ್ಡಿಎ ಮೈತ್ರಿಕೂಟದ ಭಾಗವಾಗಿ ತಮಿಳುನಾಡಿನ ವಿವಿಧ ಪ್ರಾಂತ್ಯಗಳಿಂದ 20 ಸ್ಥಾನಗಳಲ್ಲಿ ಸ್ಪರ್ಧೆ ನಡೆಸುವುದಾಗಿ ಬಿಜೆಪಿ ತಿಳಿಸಿದ್ದು, ತಮಿಳುನಾಡು ಬಿಜೆಪಿ ಅಧ್ಯಕ್ಷ ಎಲ್.ಮುರುಗನ್ ಧಾರಾಪುರಂ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಹಿರಿಯ ಬಿಜೆಪಿ ನಾಯಕ, ಆರ್ಎಸ್ಎಸ್ ಮೂಲದ ನಾಯಕ ಎಚ್.ರಾಜಾ ಕರೈಕುಡಿ ಕ್ಷೇತ್ರದಿಂದ ಸ್ಪರ್ಧೆ ನಡೆಸಲಿದ್ದಾರೆ.
ಎನ್ಡಿಎ ಮೈತ್ರಿಕೂಟದ ಸಹವರ್ತಿ ಪಕ್ಷ ಎಐಎಡಿಎಂಕೆ ಜತೆ ಬಿಜೆಪಿ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆಳೆತನ ಹೊಂದಿದೆ. ಹೀಗಾಗಿ ಕೇವಲ 29 ಸ್ಥಾನಗಳಲ್ಲಿ ಸ್ಪರ್ಧೆ ನಡೆಸುವುದಾಗಿ ಹಿರಿಯ ಬಿಜೆಪಿ ನಾಯಕ ಅರುಣ್ ಸಿಂಗ್ ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಮಾರ್ಚ್ 27, ಏಪ್ರಿಲ್ 1, ಏಪ್ರಿಲ್ 6, ಏಪ್ರಿಲ್ 10, ಏಪ್ರಿಲ್ 17, ಏಪ್ರಿಲ್ 22, ಏಪ್ರಿಲ್ 26 ಹಾಗೂ ಏಪ್ರಿಲ್ 29ರಂದು ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮತ ಎಣಿಕೆಯು ಮೇ 2ರಂದು ನಡೆಯಲಿದೆ. ಕೇರಳದಲ್ಲಿ ಏಪ್ರಿಲ್ 6ರಂದು ಚುನಾವಣೆ ಮತ್ತು ಮೇ 2ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಏಪ್ರಿಲ್ 6ರಂದು ಚುನಾವಣೆ ಮತ್ತು ಮೇ 2ರಂದು ಮತ ಎಣಿಕೆ ನಡೆಯಲಿದೆ. ಅಸ್ಸಾಂನಲ್ಲಿ 27 ಮಾರ್ಚ್, ಏಪ್ರಿಲ್ 1 ಮತ್ತು ಏಪ್ರಿಲ್ 6ರಂದು, ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ. ಮೇ 2ರಂದು ಮತ ಎಣಿಕೆ ನಡೆಯಲಿದೆ.
ಅಸ್ಸಾಂನಲ್ಲಿ ಒಟ್ಟು 3 ಹಂತಗಳಲ್ಲಿ ಮತದಾನ ನಡೆಯಲಿದೆ. ಕೇರಳದಲ್ಲಿ 14 ಜಿಲ್ಲೆ, 148 ಕ್ಷೇತ್ರಗಳಲ್ಲಿ ಒಂದೇ ಬಾರಿ ಚುನಾವಣೆ ನಡೆಯಲಿದೆ. ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಕೂಡ ಒಂದೇ ಬಾರಿ ಚುನಾವಣೆ ನಡೆಯಲಿದೆ. ಪಶ್ಚಿಮ ಬಂಗಾಳ ರಾಜ್ಯದಲ್ಲಿ 8 ಹಂತಗಳಲ್ಲಿ ಚುನಾವಣೆ ನಡೆಯಲಿದೆ.
ಕೇರಳ, ಪುದುಚೇರಿ, ತಮಿಳುನಾಡು, ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ ಚುನಾವಣೆ ವಿವರಗಳನ್ನು ನಾವು ಇವತ್ತು ನೀಡುತ್ತೇವೆ. ಬಿಹಾರದಲ್ಲಿ ಚುನಾವಣೆ ನಡೆಸುವುದು ಚುನಾವಣಾ ಆಯೋಗಕ್ಕೆ ಸವಾಲಾಗಿತ್ತು. ಹೊಸ ಥರ ಪ್ಲಾನ್ ಮಾಡಬೇಕಾಯಿತು. ಅಲ್ಲಿನ ಮತದಾರರು ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನು ಪಾಲಿಸಿಯೇ ಮತ ಚಲಾಯಿಸಿದ್ದು ವಿಶೇಷವಾಗಿತ್ತು ಎಂದು ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ತಿಳಿಸಿದ್ದಾರೆ.
Published On - 5:00 pm, Sun, 14 March 21