
ನವದೆಹಲಿ, ಮಾರ್ಚ್ 16: ಕೇರಳಂ (ಕೇರಳ) ಚುನಾವಣೆಗೆ (Kerala Assembly Elections ) ಬಿಜೆಪಿ 47 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕೇರಳ ರಾಜ್ಯದಲ್ಲಿ ತನ್ನ ಹೆಜ್ಜೆಗುರುತನ್ನು ವಿಸ್ತರಿಸಲು ಪ್ರಯತ್ನಿಸುತ್ತಿರುವ ಬಿಜೆಪಿ ಹಲವಾರು ಪ್ರಮುಖ ನಾಯಕರನ್ನು ಕಣಕ್ಕಿಳಿಸಿದೆ. ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಬಿಜೆಪಿಯ ಪ್ರಮುಖ ಅಭ್ಯರ್ಥಿಗಳಲ್ಲಿ ಬಿಜೆಪಿಯ ರಾಜ್ಯಾಧ್ಯಕ್ಷ ಮತ್ತು ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಕೂಡ ಒಬ್ಬರು. ಅವರು ನೇಮಮ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಈ ಸ್ಥಾನವು ಬಿಜೆಪಿ ಮತ್ತು ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) (ಸಿಪಿಐಎಂ) ನಡುವೆ ನೇರ ಸ್ಪರ್ಧೆಗೆ ಸಾಕ್ಷಿಯಾಗುವ ನಿರೀಕ್ಷೆಯಿದೆ.
ಸಿಪಿಐಎಂ, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತ್ರಿಕೋನ ಸ್ಪರ್ಧೆ ನಡೆಯುವ ನಿರೀಕ್ಷೆಯಿರುವ ಕಜಕ್ಕೊಟ್ಟಂ ಕ್ಷೇತ್ರದಿಂದ ಮಾಜಿ ಕೇಂದ್ರ ಸಚಿವ ವಿ. ಮುರಳೀಧರನ್ ಅವರನ್ನು ಕಣಕ್ಕಿಳಿಸಲಾಗಿದೆ. ಬಿಜೆಪಿ ನಾಯಕ ಕೆ. ಸುರೇಂದ್ರನ್ ಮಂಜೇಶ್ವರದಿಂದ ಸ್ಪರ್ಧಿಸಲಿದ್ದಾರೆ. ಅಲ್ಲಿ ಬಿಜೆಪಿ ಹಾಗೂ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ನಡುವೆ ನೇರ ಸ್ಪರ್ಧೆ ಏರ್ಪಡುವ ಸಾಧ್ಯತೆಯಿದೆ.
ಇದನ್ನೂ ಓದಿ: ಇಂದು 37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ; 26 ಸ್ಥಾನಗಳಿಗೆ ಅವಿರೋಧ ಆಯ್ಕೆ; ಮತ್ತಷ್ಟು ಭದ್ರವಾಗಲಿದೆ ಬಿಜೆಪಿ ಸ್ಥಾನ
ಹಿರಿಯ ಬಿಜೆಪಿ ನಾಯಕಿ ಶೋಭಾ ಸುರೇಂದ್ರನ್ ಅವರನ್ನು ಪಾಲಕ್ಕಾಡ್‌ನಿಂದ ಕಣಕ್ಕಿಳಿಸಲಾಗಿದೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಪ್ರಮುಖ ಪೈಪೋಟಿ ನಡೆಯುವ ನಿರೀಕ್ಷೆಯಿದೆ. ವಟ್ಟಿಯೂರ್ಕಾವುದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಆರ್. ಶ್ರೀಲೇಖಾ ಅವರನ್ನು ಕಣಕ್ಕಿಳಿಸಲಾಗಿದೆ. ಈ ಕ್ಷೇತ್ರವು ಸಿಪಿಐಎಂ, ಕಾಂಗ್ರೆಸ್ ಮತ್ತು ಬಿಜೆಪಿಯನ್ನು ಒಳಗೊಂಡ ತ್ರಿಕೋನ ಸ್ಪರ್ಧೆಗೆ ಸಾಕ್ಷಿಯಾಗುವ ನಿರೀಕ್ಷೆಯಿದೆ.
ಇದನ್ನೂ ಓದಿ: ಬಂಗಾಳ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಮಮತಾ ಬ್ಯಾನರ್ಜಿ ವಿರುದ್ಧ ಸುವೇಂದು ಅಧಿಕಾರಿ ಕಣಕ್ಕೆ
2024ರ ಲೋಕಸಭಾ ಚುನಾವಣೆಯಲ್ಲಿ ವಯನಾಡಿನಿಂದ ಪ್ರಿಯಾಂಕಾ ಗಾಂಧಿ ವಾದ್ರಾ ವಿರುದ್ಧ ಸ್ಪರ್ಧಿಸಿದ್ದ ನವ್ಯಾ ಹರಿದಾಸ್ ಅವರಿಗೆ ಈ ಬಾರಿ ಬಿಜೆಪಿ ವಿಧಾನಸಭಾ ಚುನಾವಣೆಗೆ ಟಿಕೆಟ್ ನೀಡಿದೆ. ನವ್ಯಾ ಹರಿದಾಸ್ ಕೋಝಿಕ್ಕೋಡ್ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಕಾಂಗ್ರೆಸ್‌ನ ಮಾಜಿ ಹಿರಿಯ ಕೆ. ಕರುಣಾಕರನ್ ಅವರ ಪುತ್ರಿ ಮತ್ತು ಕಾಂಗ್ರೆಸ್ ನಾಯಕ ಕೆ. ಮುರಳೀಧರನ್ ಅವರ ಸಹೋದರಿಯಾದ ಪದ್ಮಜಾ ವೇಣುಗೋಪಾಲ್ ಅವರನ್ನು ತ್ರಿಶೂರ್ ಕ್ಷೇತ್ರದಿಂದ ಬಿಜೆಪಿ ಕಣಕ್ಕಿಳಿಸಿದೆ.
ಇತ್ತೀಚೆಗೆ ಕೇರಳಂ ಎಂದು ಮರುನಾಮಕರಣಗೊಂಡಿರುವ ಕೇರಳದಲ್ಲಿ ಏಪ್ರಿಲ್ 9ರಂದು 140 ಕ್ಷೇತ್ರಗಳ ವಿಧಾನಸಭೆಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 4ರಂದು ಮತ ಎಣಿಕೆ ನಡೆಯಲಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ