ಬಿಜೆಪಿ ಸರ್ಕಾರವಿರುವ ಎಲ್ಲಾ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ; ಅಮಿತ್ ಶಾ ಮಹತ್ವದ ಘೋಷಣೆ

ಸಂವಿಧಾನ ದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ವಿಚಾರವಾಗಿ ಕಾಂಗ್ರೆಸ್ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಂವಿಧಾನವು ದೇಶದ ಎಲ್ಲಾ ನಾಗರಿಕರಿಗೆ ಒಂದೇ ರೀತಿಯ ಕಾನೂನು ಜಾರಿಗೆ ತರಲು ಅವಕಾಶ ನೀಡುತ್ತದೆ, ಆದರೆ ರಾಹುಲ್ ಗಾಂಧಿ ಅದನ್ನು ವಿರೋಧಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಮುಂಬರುವ ದಿನಗಳಲ್ಲಿ ಬಿಜೆಪಿ ಆಡಳಿತವಿರುವ ಎಲ್ಲಾ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸಲಾಗುವುದು ಎಂದು ಅವರು ಪುನರುಚ್ಚರಿಸಿದರು.

ಬಿಜೆಪಿ ಸರ್ಕಾರವಿರುವ ಎಲ್ಲಾ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ; ಅಮಿತ್ ಶಾ ಮಹತ್ವದ ಘೋಷಣೆ
ಅಮಿತ್ ಶಾ
Image Credit source: PTI

Updated on: Nov 26, 2026 | 10:16 PM

ನವದೆಹಲಿ, ನವೆಂಬರ್ 26: ಸಂವಿಧಾನ ದಿನದ ಅಂಗವಾಗಿ ಇಂದು ನವದೆಹಲಿಯಲ್ಲಿ ಆಯೋಜಿಸಲಾಗಿದ್ದ ‘ಸಂವಿಧಾನ ಗೌರವ ದಿವಸ’ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಂಬರುವ ದಿನಗಳಲ್ಲಿ ಬಿಜೆಪಿ ಆಡಳಿತವಿರುವ ಎಲ್ಲಾ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸಲಾಗುವುದು ಎಂದು ಸ್ಪಷ್ಟವಾಗಿ ಘೋಷಿಸಿದ್ದಾರೆ. ಧರ್ಮದ ಆಧಾರದ ಮೇಲೆ ಕಾನೂನುಗಳನ್ನು ರೂಪಿಸಬಾರದು ಮತ್ತು ದೇಶದ ಪ್ರತಿಯೊಬ್ಬ ನಾಗರಿಕನೂ ಒಂದೇ ರೀತಿಯ ಕಾನೂನಿನ ಅಡಿಯಲ್ಲಿ ಬದುಕುವ ಹಕ್ಕನ್ನು ಪಡೆಯಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ.

ಇಂದು ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, “ಮುಂಬರುವ ದಿನಗಳಲ್ಲಿ ಬಿಜೆಪಿ ಆಡಳಿತವಿರುವ ಎಲ್ಲಾ ರಾಜ್ಯಗಳಲ್ಲಿ ನಾವು ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸಲಿದ್ದೇವೆ ಎಂದು ಇಂದು ನಾನು ಸ್ಪಷ್ಟಪಡಿಸಲು ಬಂದಿದ್ದೇನೆ” ಎಂದರು. ಹಿಂದೂ, ಸಿಖ್, ಮುಸ್ಲಿಂ, ಕ್ರಿಶ್ಚಿಯನ್ ಅಥವಾ ಪಾರ್ಸಿ—ಹೀಗೆ ಯಾವುದೇ ಧರ್ಮಕ್ಕೆ ಸೇರಿದ್ದರೂ ದೇಶದ ಪ್ರತಿಯೊಬ್ಬ ಪ್ರಜೆಯೂ ಒಂದೇ ಏಕರೂಪ ಕಾನೂನಿನಡಿ ಬದುಕುವ ಹಕ್ಕು ಹೊಂದಿರಬೇಕು ಎಂದು ಅವರು ಹೇಳಿದರು.

Loading...


ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ:

ಏಕರೂಪ ನಾಗರಿಕ ಸಂಹಿತೆ ವಿಚಾರದಲ್ಲಿ ಬಿಜೆಪಿಯ ನಿಲುವನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ನಾಯಕತ್ವವನ್ನು ಅಮಿತ್ ಶಾ ನೇರವಾಗಿ ಟೀಕಿಸಿದರು. ಸಂವಿಧಾನದ ಪ್ರತಿಯನ್ನು ಹಿಡಿದು ಓಡಾಡುವ ವಿರೋಧ ಪಕ್ಷದ ನಾಯಕರು, ಕೇವಲ 15 ನಿಮಿಷ ಸಮಯ ತೆಗೆದುಕೊಂಡು ಸಂವಿಧಾನದ ಮೂಲ ಪ್ರತಿಯನ್ನು ತೆರೆದು ನೋಡಬೇಕು. ಆಗ ಸಂವಿಧಾನದ ನಿಜವಾದ ಆಶಯ ಏನೆಂಬುದು ಅವರಿಗೆ ಅರ್ಥವಾಗುತ್ತದೆ ಎಂದು ಅವರು ವ್ಯಂಗ್ಯವಾಡಿದರು.


ಇದನ್ನೂ ಓದಿ: ‘ವಿದೇಶದಲ್ಲಿ ಭಾರತಕ್ಕೆ ಮಸಿ ಬಳಿಯುವುದರಿಂದ ಅಧಿಕಾರ ಸಿಗುವುದಿಲ್ಲ’; ರಾಹುಲ್ ಗಾಂಧಿಗೆ ಅಮಿತ್ ಶಾ ಲೇವಡಿ

ದೇಶದ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡುವುದು ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಸಂಕಲ್ಪವಾಗಿದ್ದು, ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಅಮಿತ್ ಶಾ ಒತ್ತಿ ಹೇಳಿದರು. ಅಲ್ಲದೆ, ಸ್ವಾತಂತ್ರ್ಯದ ಶತಮಾನೋತ್ಸವದ ವೇಳೆಗೆ ಅಂದರೆ 2047ರ ವೇಳೆಗೆ ಭಾರತ ಮಾತೆಯ ಕುರಿತು ಸ್ವಾಮಿ ವಿವೇಕಾನಂದರು ಕಂಡಿದ್ದ ಕನಸು ನನಸಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಈಗಾಗಲೇ ಗೋವಾದಲ್ಲಿ ಸಾಮಾನ್ಯ ನಾಗರಿಕ ಕಾನೂನು ಜಾರಿಯಲ್ಲಿದ್ದು, ಉತ್ತರಾಖಂಡ ಸರ್ಕಾರವು ತನ್ನದೇ ಆದ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತಂದಿದೆ. ಇದೀಗ ಗುಜರಾತ್, ಅಸ್ಸಾಂ, ಮಧ್ಯಪ್ರದೇಶ ಮತ್ತು ಹರಿಯಾಣ ಸೇರಿದಂತೆ ಬಿಜೆಪಿ ಆಡಳಿತವಿರುವ ಇತರ ರಾಜ್ಯಗಳಲ್ಲೂ ಯುಸಿಸಿ ಜಾರಿ ಪ್ರಕ್ರಿಯೆಗೆ ವೇಗ ಸಿಗಲಿದೆ.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
Loading...
Unable to load recommendations.
Follow Us