ಚುನಾವಣೆ ಹೊಸಿಲಲ್ಲಿರುವ ಹಿಮಾಚಲ ಪ್ರದೇಶದ ಬಿಜೆಪಿ ಯುವಮೋರ್ಚಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ರಾಹುಲ್ ದ್ರಾವಿಡ್
ದೆಹಲಿ: ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಮೇ 12ರಿಂದ ನಡೆಯಲಿರುವ ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಭಾರತೀಯ ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಸಹ ಪಾಲ್ಗೊಳ್ಳಲಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಧರ್ಮಶಾಲಾ ಕ್ಷೇತ್ರದ ಬಿಜೆಪಿ ಶಾಸಕ ವಿಶಾಲ್ ನಹೆರಿಯಾ, ಕೇವಲ ರಾಜಕಾರಣ ಮಾತ್ರವಲ್ಲ ಇತರ ಹಲವು ಕ್ಷೇತ್ರಗಳಲ್ಲಿಯೂ ಯವಜನರಿಗೆ ಅವಕಾಶಗಳಿವೆ ಎನ್ನುವ ಸಂದೇಶವನ್ನು ರಾಹುಲ್ ನೀಡಲಿದ್ದಾರೆ ಎಂದು ಹೇಳಿದ್ದಾರೆ. ‘ಮೇ 12ರಿಂದ 15ರವರೆಗೆ ಧರ್ಮಶಾಲಾದಲ್ಲಿ ನಡೆಯಲಿರುವ ಬಿಜೆಪಿ ಯುವ […]
ದೆಹಲಿ: ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಮೇ 12ರಿಂದ ನಡೆಯಲಿರುವ ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಭಾರತೀಯ ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಸಹ ಪಾಲ್ಗೊಳ್ಳಲಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಧರ್ಮಶಾಲಾ ಕ್ಷೇತ್ರದ ಬಿಜೆಪಿ ಶಾಸಕ ವಿಶಾಲ್ ನಹೆರಿಯಾ, ಕೇವಲ ರಾಜಕಾರಣ ಮಾತ್ರವಲ್ಲ ಇತರ ಹಲವು ಕ್ಷೇತ್ರಗಳಲ್ಲಿಯೂ ಯವಜನರಿಗೆ ಅವಕಾಶಗಳಿವೆ ಎನ್ನುವ ಸಂದೇಶವನ್ನು ರಾಹುಲ್ ನೀಡಲಿದ್ದಾರೆ ಎಂದು ಹೇಳಿದ್ದಾರೆ.
‘ಮೇ 12ರಿಂದ 15ರವರೆಗೆ ಧರ್ಮಶಾಲಾದಲ್ಲಿ ನಡೆಯಲಿರುವ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಬಿಜೆಪಿ ರಾಷ್ಟ್ರೀಯ ಮತ್ತು ರಾಜ್ಯ ಘಟಕಗಳ ನಾಯಕರು ಪಾಲ್ಗೊಳ್ಳಲಿದ್ದಾರೆ. ಕೇಂದ್ರ ಸರ್ಕಾರದ ಹಲವು ಸಚಿವರು ಸಹ ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ’ ಎಂದು ನಹೇರಿಯಾ ತಿಳಿಸಿದ್ದಾರೆ. ಭಾರತೀಯ ಕ್ರಿಕೆಟ್ ತಂಡದ ಕೋಚ್ ರಾಹುಲ್ ದ್ರಾವಿಡ್ ಸಹ ಸಭೆಯಲ್ಲಿ ಪಾಲ್ಗೊಂಡು ತಮ್ಮ ವೃತ್ತಿ ಜೀವನದ ಅನುಭವ ಹಂಚಿಕೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ಇನ್ನೇನು ಚುನಾವಣೆ ಘೋಷಣೆಯಾಗುವ ಸಾಧ್ಯತೆಯಿದೆ. 68 ಸ್ಥಾನಗಳ ಹಿಮಾಚಲ ಪ್ರದೇಶ ವಿಧಾನಸಭೆಗೆ 2017ರಲ್ಲಿ ನಡೆದಿದ್ದ ಚುನಾವಣೆಯಲ್ಲಿ ಬಿಜೆಪಿ 44, ಕಾಂಗ್ರೆಸ್ 21 ಸ್ಥಾನಗಳಲ್ಲಿ ಜಯಗಳಿಸಿತ್ತು. ಇದೀಗ ಬಿಜೆಪಿ ಅಧಿಕಾರ ಉಳಿಸಿಕೊಳ್ಳುವ ಕನಸು ಕಾಣುತ್ತಿದೆ.
ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ ಕಳೆದ ಭಾನುವಾರ ಮಾತನಾಡಿ, ನಾವು ಮತ್ತೊಮ್ಮೆ ನಮ್ಮ ಸರ್ಕಾರ ಅಧಿಕಾರಕ್ಕೆ ಮರಳಲು ಏನೆಲ್ಲಾ ಮಾಡಬೇಕೋ ಅದನ್ನು ಮಾಡಲು ಮುಂದಾಗಿದ್ದೇವೆ. ಹಿಮಾಚಲ ಪ್ರದೇಶದ ಸಾಮಾಜಿಕ ವಾತಾವರಣವು ಬಿಜೆಪಿಯ ಪರವಾಗಿದೆ. ನಾವು ಉತ್ತರ ಪ್ರದೇಶ, ಗೋವಾ, ಮಣಿಪುರ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಜಯಗಳಿಸಿದ್ದೇವೆ. ಈ ಪೈಕಿ ಉತ್ತರ ಪ್ರದೇಶ, ಗೋವಾ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ನಮ್ಮ ಪಕ್ಷ ಅಧಿಕಾರ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ ಎಂದು ಹೇಳಿದ್ದರು.
ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ನಡುವೆ ಜಿದ್ದಾಜಿದ್ದಿ ಪೈಪೋಟಿ ಏರ್ಪಡಬಹುದು ಎಂದು ವಿಶ್ಲೇಷಿಸಲಾಗಿದೆ. ಆದರೆ ಪಕ್ಕದ ಪಂಜಾಬ್ನಲ್ಲಿ ಪಡೆದ ಗೆಲುವಿನಿಂದ ಉತ್ಸಾಹದ ಬುಗ್ಗೆಯಾಗಿರುವ ಆಮ್ ಆದ್ಮಿ ಪಕ್ಷವು ಸಹ ಈ ಬಾರಿ ಹಿಮಾಚಲ ಪ್ರದೇಶದಲ್ಲಿಯೂ ಉಮೇದುವಾರರನ್ನು ಕಣಕ್ಕೆ ಇಳಿಸಲು ಮುಂದಾಗಿದೆ. ಇದರಿಂದ ಈ ಬಾರಿ ಹಿಮಾಚಲ ಪ್ರದೇಶದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡಬಹುದು ಎಂದು ನಿರೀಕ್ಷಿಸಲಾಗಿದೆ.
ಇದನ್ನೂ ಓದಿ: ಸತ್ಯ ಏನಿದ್ರೂ ಪರವಾಗಿಲ್ಲ, ತಾಜ್ಮಹಲ್ನ 22 ಕೊಠಡಿಗಳ ಬೀಗ ತೆರೆಸಿ: ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ ಬಿಜೆಪಿ ನಾಯಕ
Published On - 12:18 pm, Tue, 10 May 22