Breaking News: ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮನೆ ಮೇಲೆ ಬೆಳ್ಳಂಬೆಳಗ್ಗೆ ಸಿಬಿಐ ದಾಳಿ

ಸರಣಿ ಟ್ವೀಟ್‌ಗಳನ್ನು ಮಾಡಿರುವ ಆಮ್ ಆದ್ಮಿ ಪಕ್ಷದ ನಾಯಕ ಹಾಗೂ ಡಿಸಿಎಂ ಮನೀಶ್ ಸಿಸೋಡಿಯಾ, ನನ್ನ ಮನೆ ಮೇಲೆ ಸಿಬಿಐ ದಾಳಿ ನಡೆದಿದೆ. ದೇಶದಲ್ಲಿ ಒಳ್ಳೆಯ ಕೆಲಸ ಮಾಡುವವರಿಗೆ ಈ ರೀತಿ ತೊಂದರೆಯಾಗುತ್ತಲೇ ಇರುತ್ತದೆ ಎಂದು ಹೇಳಿದ್ದಾರೆ.

Breaking News: ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮನೆ ಮೇಲೆ ಬೆಳ್ಳಂಬೆಳಗ್ಗೆ ಸಿಬಿಐ ದಾಳಿ
ಮನೀಶ್ ಸಿಸೋಡಿಯಾ
Edited By:

Updated on: Aug 19, 2022 | 9:32 AM

ನವದೆಹಲಿ: ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Manish Sisodia) ಅವರ ನಿವಾಸ ಸೇರಿದಂತೆ ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ 20ಕ್ಕೂ ಹೆಚ್ಚು ಸ್ಥಳಗಳ ಮೇಲೆ ಕೇಂದ್ರ ತನಿಖಾ ದಳ (ಸಿಬಿಐ) ಇಂದು ಬೆಳಿಗ್ಗೆ ದಾಳಿ ನಡೆಸಿದೆ. ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಈ ಶೋಧ ನಡೆಸಲಾಗುತ್ತಿದೆ.

ಸಿಬಿಐ ಅಧಿಕಾರಿಗಳು ಇಲ್ಲಿ ನನ್ನ ಮನೆಯಲ್ಲಿದ್ದಾರೆ. ನಾನು ತನಿಖಾ ಸಂಸ್ಥೆಯೊಂದಿಗೆ ಸಹಕರಿಸುತ್ತೇನೆ. ಅವರಿಗೆ ನನ್ನ ವಿರುದ್ಧ ಏನೂ ಸಾಕ್ಷಿಗಳು ಸಿಗುವುದಿಲ್ಲ ಎಂಬ ನಂಬಿಕೆ ನನಗಿದೆ. ದೇಶದಲ್ಲಿ ಒಳ್ಳೆಯ ಕೆಲಸ ಮಾಡುವವರಿಗೆ ಈ ರೀತಿ ತೊಂದರೆಯಾಗುತ್ತಲೇ ಇರುತ್ತದೆ. ನಾವು ಪ್ರಾಮಾಣಿಕರು, ಲಕ್ಷಾಂತರ ಮಕ್ಕಳ ಭವಿಷ್ಯವನ್ನು ನಿರ್ಮಿಸುತ್ತೇವೆ. ದುರದೃಷ್ಟಕರ ಸಂಗತಿ ಎಂದರೆ ಈ ದೇಶದಲ್ಲಿ ಒಳ್ಳೆಯ ಕೆಲಸ ಮಾಡುವವರಿಗೆ ಈ ರೀತಿ ತೊಂದರೆಯಾಗುತ್ತದೆ. ಅದಕ್ಕಾಗಿಯೇ ನಮ್ಮ ದೇಶ ಇನ್ನೂ ನಂಬರ್ 1 ಆಗಿಲ್ಲ ಎಂದು ದೆಹಲಿಯ ಶಿಕ್ಷಣ ಕೂಡ ಆಗಿರುವ ಸಚಿವ ಸಿಸೋಡಿಯಾ ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ ಅಸ್ಸಾಂ ಸಿಎಂ

ಶೀಘ್ರದಲ್ಲೇ ಸತ್ಯವನ್ನು ಹೊರಹಾಕಲು ಸಿಬಿಐ ತಂಡಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ತಿಳಿಸಿದ್ದಾರೆ. ನಾವು ಸಿಬಿಐ ಅನ್ನು ಸ್ವಾಗತಿಸುತ್ತೇವೆ. ಸತ್ಯ ಹೊರಬರಲು ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇವೆ. ಇದುವರೆಗೂ ನನ್ನ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದರೂ ಯಾವುದಕ್ಕೂ ಸಾಕ್ಷಿ ಸಿಕ್ಕಿಲ್ಲ. ಈ ದಾಳಿಯಿಂದಲೂ ನನಗೆ ಏನೂ ತೊಂದರೆಯಾಗದು ಎಂದು ಮನೀಶ್ ಟ್ವೀಟ್ ಮಾಡಿದ್ದಾರೆ.

ದೆಹಲಿ ಅಬಕಾರಿ ನೀತಿಯಲ್ಲಿನ ಭ್ರಷ್ಟಾಚಾರದ ಆರೋಪದ ಮೇಲೆ ಸಿಬಿಐ ಅಧಿಕಾರಿಗಳು ಡಿಸಿಎಂ ಮನೀಶ್ ಸಿಸೋಡಿಯಾ ಅವರ ಮನೆಯಲ್ಲಿ ಶೋಧ ನಡೆಸುತ್ತಿದೆ. ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು, ಈ ಹಿಂದೆ ದಾಳಿ ನಡೆಸಿದಾಗ ಸಿಬಿಐ ಅಧಿಕಾರಿಗಳಿಗೆ ಆಪ್ತ ಸರ್ಕಾರದ ವಿರುದ್ಧ ಯಾವ ದಾಖಲೆಯೂ ಸಿಕ್ಕಿರಲಿಲ್ಲ. ಹೀಗಾಗಿ, ಅವರು ಹಠ ಬಿಡದೆ ಪ್ರಯತ್ನ ಮಾಡುತ್ತಿದ್ದಾರೆ. ಈ ಬಾರಿಯೂ ನಮ್ಮ ಸರ್ಕಾರದ ವಿರುದ್ಧ ಯಾವ ಸಾಕ್ಷಿಗಳೂ ಸಿಗುವುದಿಲ್ಲ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:13 am, Fri, 19 August 22