ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ, 18,177 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ

| Updated By: ಆಯೇಷಾ ಬಾನು

Updated on: Dec 23, 2023 | 6:45 AM

CM Siddaramaiah Meets PM Narendra Modi: ಸಂಸತ್​ ಭವನದಲ್ಲಿ ಕರ್ನಾಟಕ ಸಿಎಂ ಸಿದ್ದರಾಮಯ್ಯನವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಪ್ರಧಾನಿ ಮೋದಿ ಅವರ ಜೊತೆ ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಿದ್ದು ಪರಿಹಾರಕ್ಕೆ ಮನವಿ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ, 18,177 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ
ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ
Follow us on

ದೆಹಲಿ, ಡಿ.19: ಸಂಸತ್​ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಕರ್ನಾಟಕ ಸಿಎಂ ಸಿದ್ದರಾಮಯ್ಯ (Siddaramaiah) ಭೇಟಿಯಾಗಿದ್ದಾರೆ. ಪ್ರಧಾನಿ ಮೋದಿ ಅವರ ಜೊತೆ ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಿದ್ದು ಶೀಘ್ರವೇ 18,177 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ಸಿಎಂಗೆ ಸಚಿವ ಕೃಷ್ಣಭೈರೇಗೌಡ (Krishna Byregowda) ಅವರು ಸಾಥ್ ನೀಡಿದ್ದಾರೆ.

ರಾಜ್ಯದ ಬರ ಪರಿಸ್ಥಿತಿ ಕುರಿತು ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ವಿವರಿಸಿದ್ದಾರೆ. ಶೀಘ್ರವೇ 18,177.44 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ಇದರಲ್ಲಿ 4663 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ, 12,577 ಕೋಟಿ ರೂ. ತುರ್ತು ಪರಿಹಾರ ನೀಡುವಂತೆ ಕೋರಿದ್ದಾರೆ. 566 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ 236 ರಲ್ಲಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, ಅದರಲ್ಲಿ 196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟ ಆಗಿದೆ. ಇದರಿಂದ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಪಿಎಂ ಮೋದಿಗೆ ವಿವರಿಸಿದ್ದಾರೆ.

ಜೊತೆಗೆ ಎನ್‌.ಡಿ.ಆರ್‌.ಎಫ್. ನಿಂದ 4663 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ ಒದಗಿಸುವಂತೆ ಮನವಿ ಮಾಡಿದ್ದಾರೆ. ರೈತರಿಗೆ ಇನ್‌ಪುಟ್‌ ಸಬ್ಸಿಡಿ ನೀಡಲು 2015-16 ರ ಕೃಷಿ ಗಣತಿಯನ್ನು ಪರಿಗಣಿಸಲಾಗುತ್ತಿದ್ದು, ಇದು 8 ವರ್ಷ ಹಳೆಯ ಮಾಹಿತಿಯಾಗಿದೆ. ಅಲ್ಲದೆ ರಾಜ್ಯದಲ್ಲಿ ರೈತರ ದತ್ತಾಂಶವನ್ನು ಫ್ರೂಟ್ಸ್‌ ತಂತ್ರಾಂಶದಲ್ಲಿ ದಾಖಲಿಸಲಾಗಿದ್ದು ಪಿಎಂ-ಕಿಸಾನ್‌ ಯೋಜನೆಗೆ ಇದನ್ನು ಪರಿಗಣಿಸಲಾಗುತ್ತಿದೆ. ಇದರನ್ವಯ ರಾಜ್ಯದಲ್ಲಿ 83 ಲಕ್ಷ ಜನ ಸಣ್ಣ ಮತ್ತು ಅತಿ ಸಣ್ಣ ರೈತರಿದ್ದು, ಪರಿಹಾರ ವಿತರಣೆಗೆ ಈ ದತ್ತಾಂಶವನ್ನು ಪರಿಗಣಿಸುವಂತೆ ಮನವಿ ಮಾಡಿದ್ದಾರೆ. ಜೊತೆಗೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಬರಪೀಡಿತ ತಾಲ್ಲೂಕುಗಳಲ್ಲಿ ಉದ್ಯೋಗದ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಯಡಿಯೂರಪ್ಪ ವಾಯ್ಸ್ ರಿಮೇಕ್ ಮಾಡಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಪಪ್ರಚಾರ: ಚಿಕ್ಕಮಗಳೂರಿನಲ್ಲಿ ದೂರು ದಾಖಲು

ಬರ ಪರಿಹಾರಕ್ಕಾಗಿ ರಾಜ್ಯದ ಮೊದಲ ಪ್ರಸ್ತಾವನೆಯನ್ನು ಕೇಂದ್ರ ಕೃಷಿ ಸಚಿವಾಲಯಕ್ಕೆ ದಿನಾಂಕ 22-09-2023 ರಂದು ಸಲ್ಲಿಸಲಾಗಿತ್ತು. ಭಾರತ ಸರ್ಕಾರದ ಬರ ಅಧ್ಯಯನ ತಂಡವು ಅಕ್ಟೋಬರ್‌ ತಿಂಗಳ 4 ರಿಂದ 9ರ ನಡುವೆ ಭೇಟಿ ನೀಡಿ, ವರದಿಯನ್ನು ಸಲ್ಲಿಸಿದೆ. ನಂತರ ಇನ್ನೂ 21 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಆದ್ದರಿಂದ ಅಕ್ಟೋಬರ್‌ 20 ರಂದು ಕೇಂದ್ರ ಕೃಷಿ ಸಚಿವಾಲಯಕ್ಕೆ ಎನ್‌.ಡಿ.ಆರ್.ಎಫ್. ಅಡಿ 17,901 ಕೋಟಿ ರೂ. ಪರಿಹಾರ ಒದಗಿಸುವಂತೆ ಪ್ರಸ್ತಾವನೆ ಸಲ್ಲಿಸಲಾಯಿತು. ಇದರಲ್ಲಿ ತುರ್ತು ಪರಿಹಾರದ 12,577 ಕೋಟಿ ರೂ. ಮೊತ್ತವೂ ಸೇರಿದೆ.

ನವೆಂಬರ್‌ 4 ರಂದು ಹೆಚ್ಚುವರಿಯಾಗಿ 7 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಈ ಹಿನ್ನೆಲೆಯಲ್ಲಿ ಸಲ್ಲಿಸಿದ ಪೂರಕ ಮನವಿಯೊಂದಿಗೆ ಕೇಂದ್ರದಿಂದ 18,177 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮೊದಲ ಮನವಿ ಸಲ್ಲಿಸಿ ಈಗಾಗಲೇ 3 ತಿಂಗಳು ಕಳೆದಿದ್ದು, ರೈತರು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಬೆಳೆ ವಿಫಲವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಇನ್‌ಪುಟ್‌ ಸಬ್ಸಿಡಿ ನೀಡುವುದು ಅತ್ಯಗತ್ಯವಾಗಿದೆ. ರೈತರ ಹಿತರಕ್ಷಣೆಯ ದೃಷ್ಟಿಯಿಂದ ಪರಿಹಾರ ಬಿಡುಗಡೆ ಮಾಡುವಂತೆ ಸಿಎಂ ಮನವಿ ಮಾಡಿದ್ದಾರೆ.

ದೇಶದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:20 pm, Tue, 19 December 23