ಅಧಿಕೃತ ಘೋಷಣೆಗೂ ಮೊದಲೇ ಮಲ್ಲಿಕಾರ್ಜುನ ಖರ್ಗೆ ಗೆಲುವನ್ನು ರಾಹುಲ್ ಗಾಂಧಿ ಬಹಿರಂಗಪಡಿಸಿದ್ದು ಹೇಗೆ?; ಸ್ಪಷ್ಟನೆ ನೀಡಿದ ಕಾಂಗ್ರೆಸ್
Congress President Election: ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯ ಫಲಿತಾಂಶದ ಅಧಿಕೃತ ಘೋಷಣೆಗೂ ಮುನ್ನವೇ ಕಾಂಗ್ರೆಸ್ ಆ ಫಲಿತಾಂಶವನ್ನು ಅಚಾತುರ್ಯದಿಂದ ಪ್ರಕಟಿಸಿದ್ದರು. ಈ ಬಗ್ಗೆ ಕಾಂಗ್ರೆಸ್ ಇದೀಗ ಸ್ಪಷ್ಟನೆ ನೀಡಿದೆ.
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ (Congress Presidential Election) ಕರ್ನಾಟಕದ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಜಯ ಗಳಿಸಿದ್ದಾರೆ. ಆದರೆ, ನಿನ್ನೆ ಶಶಿ ತರೂರ್ (Shashi Tharoor) ಅವರನ್ನು ಹಿಂದಿಕ್ಕಿ ಮಲ್ಲಿಕಾರ್ಜುನ ಖರ್ಗೆ ಜಯ ಗಳಿಸಿದ್ದಾರೆ ಎಂದು ಅಧಿಕೃತ ಘೋಷಣೆಯಾಗುವ ಮೊದಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಈ ಬಗ್ಗೆ ಬಹಿರಂಗಪಡಿಸಿದ್ದರು. ಈ ವಿಚಾರದಲ್ಲಿ ರಾಹುಲ್ ಗಾಂಧಿ ಸಾಕಷ್ಟು ವಿವಾದಕ್ಕೀಡಾಗಿದ್ದರು. ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯ ಫಲಿತಾಂಶದ ಅಧಿಕೃತ ಘೋಷಣೆಗೂ ಮುನ್ನವೇ ಕಾಂಗ್ರೆಸ್ ಆ ಫಲಿತಾಂಶವನ್ನು ಅಚಾತುರ್ಯದಿಂದ ಪ್ರಕಟಿಸಿದ್ದರು. ಈ ಬಗ್ಗೆ ಕಾಂಗ್ರೆಸ್ ಇದೀಗ ಸ್ಪಷ್ಟನೆ ನೀಡಿದೆ.
ಗಾಂಧಿ ಕುಟುಂಬದವರು ರಿಮೋಟ್ ಕಂಟ್ರೋಲ್ ಮೂಲಕ ಕಾಂಗ್ರೆಸ್ ಪಕ್ಷವನ್ನು ನಿಯಂತ್ರಿಸುತ್ತಿದ್ದಾರೆ ಎಂಬ ಆರೋಪ ಹೊತ್ತಿದ್ದ ರಾಹುಲ್ ಗಾಂಧಿ, ನಿನ್ನೆ ಅಧ್ಯಕ್ಷ ಸ್ಥಾನದ ಅಧಿಕೃತ ಘೋಷಣೆಗೂ ಮುನ್ನವೇ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಬಹಿರಂಗಪಡಿಸಿದ್ದರು. ಹೊಸ ಕಾಂಗ್ರೆಸ್ ಅಧ್ಯಕ್ಷರ ಅಡಿಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ನಿಮ್ಮ ಪಾತ್ರವೇನು? ಎಂದು ರಾಹುಲ್ ಗಾಂಧಿಗೆ ಪ್ರಶ್ನೆ ಕೇಳಲಾಗಿತ್ತು. ಅದಕ್ಕೆ ಉತ್ತರಿಸುವಾಗ ನೀವು ಆ ಪ್ರಶ್ನೆಯನ್ನು ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೇಳಿ ಎಂದು ನಕ್ಕಿದ್ದರು. ಆಗಿನ್ನೂ ಚುನಾವಣಾ ಫಲಿತಾಂಶ ಪ್ರಕಟವಾಗಿರಲಿಲ್ಲ.
ಇದನ್ನೂ ಓದಿ: ಅತ್ತ ಗುರು ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆ: ಇತ್ತ ಶಿಷ್ಯ ಡಿಕೆ ಶಿವಕುಮಾರ್ ಹೇಳಿದ್ದಿಷ್ಟು!
“ಕಾಂಗ್ರೆಸ್ ಪಕ್ಷದಲ್ಲಿ ಇನ್ನುಮುಂದೆ ನನ್ನ ಪಾತ್ರವೇನು? ಎಂಬ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ನಿರ್ಧರಿಸುತ್ತಾರೆ” ಎಂದು ರಾಹುಲ್ ಗಾಂಧಿ ಹೇಳಿದ್ದರು. ಅವರು ಆ ಹೇಳಿಕೆ ನೀಡಿದಾಗ ಮತ ಎಣಿಕೆ ಇನ್ನೂ ನಡೆಯುತ್ತಿತ್ತು. ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಟ್ರೋಲ್ ಮಾಡಿದ ನಂತರ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಸ್ಪಷ್ಟೀಕರಣವನ್ನು ನೀಡಿದ್ದಾರೆ.
There have been erroneous media reports that Rahul Gandhi announced Kharge-ji as Congress President during his press meet that began at Adoni at around 1pm. The fact is that the direction of voting was quite clear before the press meet began.
— Jairam Ramesh (@Jairam_Ramesh) October 19, 2022
ನಿನ್ನೆ ಮಧ್ಯಾಹ್ನ 1 ಗಂಟೆ ಸುಮಾರಿಗೆ ಅದೋನಿಯಲ್ಲಿ ಆರಂಭವಾದ ಪತ್ರಿಕಾಗೋಷ್ಠಿಯಲ್ಲಿ ರಾಹುಲ್ ಗಾಂಧಿ ಅವರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಘೋಷಿಸಿದ್ದಾರೆ ಎಂದು ಮಾಧ್ಯಮಗಳು ತಪ್ಪು ವರದಿಗಳನ್ನು ಮಾಡಿದ್ದರು. ಪತ್ರಿಕಾಗೋಷ್ಠಿ ಆರಂಭವಾಗುವ ಮುನ್ನವೇ ಮತದಾನದಲ್ಲಿ ಯಾರು ಗೆಲ್ಲುತ್ತಾರೆಂಬುದು ಬಹುತೇಕ ಸ್ಪಷ್ಟವಾಗಿತ್ತು ಎಂದು ಟ್ವೀಟ್ ಮಾಡಿದ್ದಾರೆ.
ಈ ಮೂಲಕ ಕಾಂಗ್ರೆಸ್ ಪಕ್ಷದ ಚುನಾವಣಾ ಫಲಿತಾಂಶ ಪ್ರಕಟವಾಗುವ ಮುನ್ನವೇ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ನೂತನ ಕಾಂಗ್ರೆಸ್ ಅಧ್ಯಕ್ಷ ಎಂದು ಉಲ್ಲೇಖಿಸಿದ್ದ ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಸಮರ್ಥಿಸಿಕೊಂಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಗಾಂಧಿಯವರು ಆ ಹೇಳಿಕೆ ನೀಡಿದಾಗ ಮತದಾನದ ದಿಕ್ಕು ಸಾಕಷ್ಟು ಸ್ಪಷ್ಟವಾಗಿತ್ತು ಜೈರಾಮ್ ರಮೇಶ್ ಹೇಳಿದ್ದಾರೆ.
24 ವರ್ಷಗಳ ನಂತರ ಅಕ್ಟೋಬರ್ 17ರಂದು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ 7,897 ಮತಗಳನ್ನು ಪಡೆದರೆ, ಶಶಿ ತರೂರ್ 1,072 ಮತ ಪಡೆದಿದ್ದರು. ಈ ಚುನಾವಣೆಯಲ್ಲಿ ಒಟ್ಟು 9,385 ಮತಗಳು ಚಲಾವಣೆಯಾಗಿದ್ದವು ಈ ಪೈಕಿ 416 ಮತಗಳು ಅಮಾನ್ಯಗೊಂಡಿದ್ದವು. ಈವರೆಗೆ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ 6 ಬಾರಿ ಚುನಾವಣೆ ನಡೆದಿತ್ತು.