ದೆಹಲಿ ಆಗಸ್ಟ್ 13: ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ (Adhir Ranjan Chowdhury) ಅವರು ಮಂಗಳವಾರ ಕೋಲ್ಕತ್ತಾದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಿರ್ವಹಣೆಯ ಬಗ್ಗೆ ಪಶ್ಚಿಮ ಬಂಗಾಳದ (West Bengal) ಮಮತಾ ಬ್ಯಾನರ್ಜಿ (Mamata Banerjee) ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಇದು ಖಂಡನೀಯ. ರಾಜ್ಯ ಸರಕಾರ ಕ್ರಮ ಕೈಗೊಳ್ಳಬೇಕಾದರೂ ಸಂದಿಗ್ಧ ಸ್ಥಿತಿಯಲ್ಲಿದೆ. ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ. ರಾಜ್ಯ ಸರ್ಕಾರವು ಸಮರ್ಥವಾಗಿಲ್ಲ ಮತ್ತು ಆರೋಪಿಗಳಿಗೆ ಸಹಾಯ ಮಾಡುವ ಉದ್ದೇಶವನ್ನು ತೋರುತ್ತಿದೆ ಎಂದು ಮಾಜಿ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಹೇಳಿರುವುದಾಗಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.
ಕಳೆದ ಶುಕ್ರವಾರ ಸರ್ಕಾರಿ ಸ್ವಾಮ್ಯದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ತೀವ್ರ ಗಾಯದ ಗುರುತುಗಳೊಂದಿಗೆ ಪತ್ತೆಯಾದ ಸ್ನಾತಕೋತ್ತರ ತರಬೇತಿ ವೈದ್ಯೆಯ ಅಮಾನುಷ ಅತ್ಯಾಚಾರ ಮತ್ತು ಹತ್ಯೆಯ ಕುರಿತು ಕಲ್ಕತ್ತಾ ಹೈಕೋರ್ಟ್ ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆಗೆ ಆದೇಶಿಸಿದೆ. ಈ ಭೀಕರ ಘಟನೆಗೆ ಸಂಬಂಧಿಸಿದಂತೆ ಸಂಜಯ್ ರಾಯ್ ಎಂಬ ನಾಗರಿಕ ಸ್ವಯಂಸೇವಕನನ್ನು ಪೊಲೀಸರು ಬಂಧಿಸಿದ್ದಾರೆ.
ಮುಖ್ಯ ನ್ಯಾಯಮೂರ್ತಿ ಟಿ.ಎಸ್.ಶಿವಜ್ಞಾನಂ ನೇತೃತ್ವದ ವಿಭಾಗೀಯ ಪೀಠವು ಕಳೆದ ಐದು ದಿನಗಳಲ್ಲಿ ಪೊಲೀಸರು ತನಿಖೆಯಲ್ಲಿ ಯಾವುದೇ ಮಹತ್ವದ ಪ್ರಗತಿಯನ್ನು ಸಾಧಿಸಿಲ್ಲ ಎಂದು ಗಮನಿಸಿದ ನಂತರ ಈ ಆದೇಶವನ್ನು ನೀಡಿತು. ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಕಾಲೇಜಿನ ಅಂದಿನ ಪ್ರಾಂಶುಪಾಲ ಡಾ.ಸಂದೀಪ್ ಘೋಷ್ ಅವರನ್ನು ಮೊದಲು ಪ್ರಶ್ನಿಸಬೇಕಿತ್ತು ಎಂದು ಹೈಕೋರ್ಟ್ ಗಮನಿಸಿದೆ. ಮಹಿಳಾ ವೈದ್ಯರ ಸಾವಿಗೆ ನೈತಿಕ ಹೊಣೆ ಹೊತ್ತು ಘೋಷ್ ಸೋಮವಾರ ರಾಜೀನಾಮೆ ನೀಡಿದ್ದಾರೆ.
ಇದನ್ನೂ ಓದಿ: ಉತ್ತರ ಪ್ರದೇಶ: 111 ಕಿಲೋಮೀಟರ್ ಕನ್ವರ್ ಮಾರ್ಗ ನಿರ್ಮಾಣಕ್ಕಾಗಿ 1 ಲಕ್ಷ ಮರ ಕಡಿಯಲಾಗಿತ್ತೇ?
ಹೈಕೋರ್ಟ್ ತೀರ್ಪನ್ನು ಶ್ಲಾಘಿಸಿದ ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಬ್ಯಾನರ್ಜಿ ರಾಜೀನಾಮೆಗೆ ಒತ್ತಾಯಿಸಿದರು. “ನಾವು ಆರೋಗ್ಯ ಸಚಿವರು ಮತ್ತು ಮುಖ್ಯಮಂತ್ರಿಯವರ ರಾಜೀನಾಮೆಯನ್ನು ಬಯಸುತ್ತೇವೆ. ಕೋಲ್ಕತ್ತಾ ಸಿಪಿ ವಿನೀತ್ ಗೋಯಲ್, ಸಿಎಂ ಅವರ ಆಪ್ತ ವೈದ್ಯ ಡಾ ಎಸ್ಪಿ ದಾಸ್ ಮತ್ತು ಡಾ ಸಂದೀಪ್ ಘೋಷ್ (ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲರು) ಅವರನ್ನು ಬಂಧಿಸಬೇಕೆಂದು ನಾವು ಬಯಸುತ್ತೇವೆ. ಅವರು ಈ ನರಮೇಧದ ಮುಖ್ಯ ವಾಸ್ತುಶಿಲ್ಪಿಗಳು. ಇದೊಂದು ಕ್ರೂರ ಕೊಲೆ ಮತ್ತು ಸಾಮೂಹಿಕ ಅತ್ಯಾಚಾರ,” ಎಂದು ಸುವೇಂದು ಅಧಿಕಾರಿ ಹೇಳಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ