ರಾಹುಲ್ ಗಾಂಧಿಗೆ ಇಡಿ ಸಮನ್ಸ್​ ವಿರೋಧಿಸಿ ಪ್ರತಿಭಟನೆ; ಕಾಂಗ್ರೆಸ್ ನಾಯಕ ಕೆಸಿ ವೇಣುಗೋಪಾಲ್ ಮೇಲೆ ಪೊಲೀಸರಿಂದ ಹಲ್ಲೆ

National Herald Case: ಪ್ರತಿಭಟನೆಯಲ್ಲಿ ತೊಡಗಿದ್ದ ಅನೇಕ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಬಂಧನದ ವೇಳೆ ಪೊಲೀಸರು ಕೆಸಿ ವೇಣುಗೋಪಾಲ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ರಾಹುಲ್ ಗಾಂಧಿಗೆ ಇಡಿ ಸಮನ್ಸ್​ ವಿರೋಧಿಸಿ ಪ್ರತಿಭಟನೆ; ಕಾಂಗ್ರೆಸ್ ನಾಯಕ ಕೆಸಿ ವೇಣುಗೋಪಾಲ್ ಮೇಲೆ ಪೊಲೀಸರಿಂದ ಹಲ್ಲೆ
ಕೆಸಿ ವೇಣುಗೋಪಾಲ್ ಮೇಲೆ ಪೊಲೀಸರಿಂದ ಹಲ್ಲೆ
Image Credit source: Zee News
TV9kannada Web Team

| Edited By: Sushma Chakre

Jun 13, 2022 | 8:44 PM

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ (National Herald Case) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ (Rahul Gandhi) ಜಾರಿ ನಿರ್ದೇಶನಾಲಯ (ED) ಸಮನ್ಸ್ ಜಾರಿ ಮಾಡಿದ್ದನ್ನು ಖಂಡಿಸಿ ಕಾಂಗ್ರೆಸ್ ನಾಯಕರು ಮತ್ತು ಪಕ್ಷದ ಕಾರ್ಯಕರ್ತರು ಇಂದು ದೇಶಾದ್ಯಂತ ಪ್ರತಿಭಟನೆ ನಡೆಸಿದರು. ರಾಜ್ಯಸಭಾ ಸಂಸದ ಕೆಸಿ ವೇಣುಗೋಪಾಲ್ (KC Venugopal), ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ (Bhupesh Baghel) ಮತ್ತು ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಸೇರಿದಂತೆ ಹಲವಾರು ಪ್ರಮುಖ ನಾಯಕರು ಈ ‘ಸತ್ಯಾಗ್ರಹ ಮೆರವಣಿಗೆ’ಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾಗ ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಪ್ರತಿಭಟನೆಯಲ್ಲಿ ತೊಡಗಿದ್ದ ಅನೇಕ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಬಂಧನದ ವೇಳೆ ಪೊಲೀಸರು ಕೆಸಿ ವೇಣುಗೋಪಾಲ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಕಾಂಗ್ರೆಸ್‌ನ ವಂಶಿ ಚಂದ್ ರೆಡ್ಡಿ ಅವರು ವೇಣುಗೋಪಾಲ್ ಅವರ ಫೋಟೋವನ್ನು ಹಂಚಿಕೊಂಡಿದ್ದಾರೆ.

“ಕೆಸಿ ವೇಣುಗೋಪಾಲ್ ಅವರು ಈಗಷ್ಟೇ ಕೊವಿಡ್‌ನಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಆದರೆ ಅವರ ಹೋರಾಟದ ಮನಸ್ಥಿತಿ ಇನ್ನೂ ಕಡಿಮೆಯಾಗಿಲ್ಲ. ಭಾರತಕ್ಕಾಗಿ ಹೋರಾಡುವ ವ್ಯಕ್ತಿ ರಾಹುಲ್ ಗಾಂಧಿ ಅವರೊಂದಿಗೆ ಕೆಸಿ ವೇಣುಗೋಪಾಲ್ ಬಲವಾಗಿ ನಿಂತಿದ್ದಾರೆ. ಅವರ ಮೇಲೆ ಪೊಲೀಸರು ಹಲ್ಲೆ ನಡೆಸಿದದ್ಆರೆ” ಎಂದು ವಂಶಿ ಚಂದ್ ರೆಡ್ಡಿ ಟ್ವೀಟ್‌ ಮಾಡಿದ್ದಾರೆ.

ಕೆಸಿ ವೇಣುಗೋಪಾಲ್ ಅವರನ್ನು ಪೊಲೀಸರು ಕರೆದೊಯ್ದ ನಂತರ ಟ್ವಿಟರ್‌ನಲ್ಲಿ ಚಿತ್ರವನ್ನು ಹಂಚಿಕೊಂಡಿರುವ ಕಾಂಗ್ರೆಸ್‌ನ ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲಾ, ಪ್ರತಿಭಟನೆ ನಡೆಸಿದ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಆರೋಪಿಸಿದ್ದು, ಮೋದಿ ಸರ್ಕಾರವನ್ನು ಬ್ರಿಟಿಷ್ ಸಾಮ್ರಾಜ್ಯಶಾಹಿಗಳಿಗೆ ಹೋಲಿಸಿದ್ದಾರೆ.

ಇದನ್ನೂ ಓದಿ: National Herald Case: ಏನಿದು ನ್ಯಾಷನಲ್ ಹೆರಾಲ್ಡ್​ ಪ್ರಕರಣ? ಈ ಕೇಸಿನಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಪಾತ್ರವೇನು?

ಈ ಪ್ರಕರಣದಲ್ಲಿ ತನ್ನ ನಾಯಕರ ವಿರುದ್ಧದ ಆರೋಪಗಳು ಆಧಾರರಹಿತವಾಗಿವೆ ಎಂದು ಹೇಳಿರುವ ಕಾಂಗ್ರೆಸ್, ಆಡಳಿತಾರೂಢ ಬಿಜೆಪಿ ಪಕ್ಷ ಕಾಂಗ್ರೆಸ್ ಅನ್ನು ಟೀಕಿಸಿ ಭ್ರಷ್ಟಾಚಾರವನ್ನು ಆಚರಿಸುತ್ತಿದೆ ಎಂದು ಆರೋಪಿಸಿದೆ.

ಭಾರತದ ಮೊದಲ ಪ್ರಧಾನ ಮಂತ್ರಿ ಜವಾಹರಲಾಲ್ ನೆಹರು ಅವರು 1938ರಲ್ಲಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಪ್ರಾರಂಭಿಸಿದರು. ಈ ಪತ್ರಿಕೆಯನ್ನು ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (AJL) ಪ್ರಕಟಿಸಿತ್ತು. ಇದು 1937ರಲ್ಲಿ 5,000 ಇತರ ಸ್ವಾತಂತ್ರ್ಯ ಹೋರಾಟಗಾರರನ್ನು ಅದರ ಷೇರುದಾರರಾಗಿ ಸ್ಥಾಪಿಸಿತು. ಈ ಕಂಪನಿಯು ಯಾವುದೇ ಒಬ್ಬ ವ್ಯಕ್ತಿಗೆ ಸೇರಿದ್ದಲ್ಲ.

2010ರಲ್ಲಿ, ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ 1,057 ಷೇರುದಾರರನ್ನು ಹೊಂದಿತ್ತು. ಇದು ತೀವ್ರ ನಷ್ಟವನ್ನು ಅನುಭವಿಸಿತು. ಹೀಗಾಗಿ, ಅದರ ಹಿಡುವಳಿಗಳನ್ನು 2011ರಲ್ಲಿ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ (YIL)ಗೆ ವರ್ಗಾಯಿಸಲಾಯಿತು. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅದರ ನಿರ್ದೇಶಕರ ಮಂಡಳಿಯಲ್ಲಿದ್ದರು. ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ಅನ್ನು ಯಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸ್ವಾಧೀನಪಡಿಸಿಕೊಂಡಾಗ ರಾಹುಲ್ ಗಾಂಧಿ ಮತ್ತು ಅವರ ತಾಯಿ ಸೋನಿಯಾ ಅವರು ‘ವಂಚನೆ ಮತ್ತು ನಂಬಿಕೆಯ ಉಲ್ಲಂಘನೆ’ಯಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada