Rahul Gandhi: ಲೋಕಸಭೆ ವಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆ

|

Updated on: Jun 25, 2024 | 10:02 PM

ನವದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕನಾಗಿ ಕಾಂಗ್ರೆಸ್ ನಾಯಕ ಹಾಗೂ ರಾಯ್​ಬರೇಲಿ ಸಂಸದ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಹಿಂದೆಯೂ ಹಲವು ಬಾರಿ ರಾಹುಲ್ ಗಾಂಧಿ ಅವರೇ ವಿಪಕ್ಷ ನಾಯಕನಾಗಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಇಂಡಿಯಾ ಬ್ಲಾಕ್ ಸಭೆಯಲ್ಲಿ ಇತರೆ ಪಕ್ಷಗಳು ಕೂಡ ಇದಕ್ಕೆ ಬೆಂಬಲ ನೀಡಿದ್ದವು. ಆದರೆ, ಇಂದು ಈ ಕುರಿತು ಕಾಂಗ್ರೆಸ್ ಅಧಿಕೃತವಾಗಿ ಮಾಹಿತಿ ನೀಡಿದೆ.

Rahul Gandhi: ಲೋಕಸಭೆ ವಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆ
ರಾಹುಲ್ ಗಾಂಧಿ
Image Credit source: PTI
Follow us on

ನವದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕನಾಗಿ (Lok Sabha Leader of Opposition) ಕಾಂಗ್ರೆಸ್ ನಾಯಕ ಹಾಗೂ ರಾಯ್​ಬರೇಲಿ ಸಂಸದ ರಾಹುಲ್ ಗಾಂಧಿ (Rahul Gandhi) ಅವರನ್ನು ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಅವರು ದೆಹಲಿಯ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರ ನಿವಾಸದಿಂದ ಇಂಡಿಯಾ ಬ್ಲಾಕ್‌ನ ಫ್ಲೋರ್‌ ಲೀಡರ್‌ಗಳ ಸಭೆಯಲ್ಲಿ ಪಾಲ್ಗೊಂಡ ಬಳಿಕ ಇದೀಗ ನಿರ್ಗಮಿಸಿದ್ದಾರೆ. ಬುಧವಾರ ಲೋಕಸಭೆ ಸ್ಪೀಕರ್ ಚುನಾವಣೆ ನಡೆಯಲಿದೆ. ಇದರ ಬೆನ್ನಲ್ಲೇ ವಿರೋಧ ಪಕ್ಷದ ನಾಯಕನ್ನಾಗಿ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ.

ಇಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಇಂಡಿಯಾ ಬ್ಲಾಕ್‌ನ ಸಭೆ ನಡೆಯಿತು. ಈ ಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಮಾಡುವ ಬಗ್ಗೆ ಚರ್ಚೆ ನಡೆಸಲಾಯಿತು. ಇಂಡಿಯಾ ಬ್ಲಾಕ್ ಸಭೆಯ ನಂತರ ಮಾಹಿತಿ ನೀಡಿದ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಸಂಸದ ಕೆ.ಸಿ. ವೇಣುಗೋಪಾಲ್, ಈ ಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು ಸದನದ ವಿರೋಧ ಪಕ್ಷದ ನಾಯಕರನ್ನಾಗಿ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ: Robert Vadra: ಮೋದಿ ಸರ್ಕಾರಕ್ಕೆ ರಾಹುಲ್ ಗಾಂಧಿ ಸವಾಲು ಹಾಕುತ್ತಾರೆ; ರಾಬರ್ಟ್ ವಾದ್ರಾ

ಇತ್ತೀಚೆಗಷ್ಟೇ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರನ್ನಾಗಿ ಮಾಡಬೇಕೆಂದು ಒಮ್ಮತದ ಆಗ್ರಹ ಕೇಳಿಬಂದಿತ್ತು. ಈ ಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಲ್ಲಿ ಪಕ್ಷದ ನಾಯಕರನ್ನಾಗಿ ನೇಮಿಸಬೇಕು ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರು ನಿರ್ಣಯ ಅಂಗೀಕರಿಸಿದ್ದರು. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಅವರ ಹೆಸರಿನ ಪ್ರಸ್ತಾವನೆ ಅಂಗೀಕಾರವಾದಾಗ, ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರಿಗೆ ಈ ಬಗ್ಗೆ ಯೋಚಿಸಲು ಸ್ವಲ್ಪ ಸಮಯ ಕೇಳಿದ್ದರು.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ ಆರಂಭಿಕ ಭಾಷಣದಲ್ಲಿ, ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಹೋದಲ್ಲೆಲ್ಲಾ ನಾವು ಕಾಂಗ್ರೆಸ್ ಪಕ್ಷದ ಮತ ಶೇಕಡಾವಾರು ಮತ್ತು ಸ್ಥಾನಗಳ ಸಂಖ್ಯೆಯಲ್ಲಿ ಹೆಚ್ಚಳವನ್ನು ಕಂಡಿದ್ದೇವೆ ಎಂದಿದ್ದರು.

ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ಅವರನ್ನು ನೇಮಿಸುವ ನಿರ್ಧಾರವನ್ನು ತಿಳಿಸುವ ಮೂಲಕ ಸಿಪಿಪಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಂಗಾಮಿ ಸ್ಪೀಕರ್ ಭರ್ತೃಹರಿ ಮಹತಾಬ್ ಅವರಿಗೆ ಪತ್ರ ಬರೆದಿದ್ದಾರೆ ಎಂದು ವೇಣುಗೋಪಾಲ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಸ್ಪೀಕರ್ ಹುದ್ದೆಗೆ ಇಂಡಿಯಾ ಬ್ಲಾಕ್ ನಾಮನಿರ್ದೇಶನದ ಬಗ್ಗೆ ನಮ್ಮೊಂದಿಗೆ ಚರ್ಚಿಸಿಲ್ಲ; ಟಿಎಂಸಿ

ಸಂಪ್ರದಾಯದಂತೆ ಪ್ರತಿಪಕ್ಷದ ಸದಸ್ಯರಿಗೆ ಉಪಸಭಾಪತಿ ಸ್ಥಾನ ನೀಡಲಾಗುವುದು ಎಂಬ ಭರವಸೆಯನ್ನು ನಿರಾಕರಿಸಿದ ಕಾಂಗ್ರೆಸ್ ಮತ್ತು ಇಂಡಿಯಾತ ಬಣವು ಕೊನೆ ಗಳಿಗೆಯಲ್ಲಿ ಕೆ. ಸುರೇಶ್ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಮೂಲಕ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆಸಲು ನಿರ್ಧರಿಸಿದೆ. ಬಿಜೆಪಿಯಿಂದ ಆಯ್ಕೆಯಾದ ಓಂ ಬಿರ್ಲಾ ಕಳೆದ ಲೋಕಸಭೆಯಲ್ಲಿ ಸ್ಪೀಕರ್ ಆಗಿದ್ದರು. ಬುಧವಾರ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

ರಾಹುಲ್ ಗಾಂಧಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ದೇಶಾದ್ಯಂತ ಸಂಚರಿಸಿ ಕಾಂಗ್ರೆಸ್ ಹಾಗೂ ಇಂಡಿಯಾ ಬ್ಲಾಕ್ ಅಭ್ಯರ್ಥಿಗಳ ಪರವಾಗಿ ಬಿರುಸಿನ ಪ್ರಚಾರ ನಡೆಸಿದ್ದರು. ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ರಾಯ್​ಬರೇಲಿ ಮತ್ತು ಕೇರಳದ ವಯನಾಡು ಎರಡೂ ಕ್ಷೇತ್ರಗಳಿಂದ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ಎರಡೂ ಕಡೆ ಭಾರೀ ಅಂತರದಿಂದ ಜಯ ಸಾಧಿಸಿದ್ದರು. ಆದರೆ, ಎರಡು ಕ್ಷೇತ್ರಗಳಲ್ಲಿ ಒಂದು ಕ್ಷೇತ್ರವನ್ನು ಮಾತ್ರ ಆಯ್ಕೆ ಮಾಡಿಕೊಳ್ಳಬೇಕಾದ್ದರಿಂದ ವಯನಾಡನ್ನು ತ್ಯಜಿಸಿ ರಾಯ್​ಬರೇಲಿಯನ್ನು ಆಯ್ಕೆ ಮಾಡಿಕೊಂಡಿದ್ದರು. ಅವರಿಂದ ತೆರವಾಗಿರುವ ವಯನಾಡು ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:35 pm, Tue, 25 June 24