ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ (Rajiv Gandhi) ಹತ್ಯೆ ಪ್ರಕರಣದ 6 ಅಪರಾಧಿಗಳನ್ನು ಬಿಡುಗಡೆಗೊಳಿಸಿದ ಸುಪ್ರೀಂ ಕೋರ್ಟ್ನ ಆದೇಶವನ್ನು ಪ್ರಶ್ನಿಸಿ ಕಾಂಗ್ರೆಸ್ (Congress) ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಲಿದೆ. ಕೆಲವು ದಿನಗಳ ಹಿಂದೆ ಕೇಂದ್ರ ಸರ್ಕಾರ ಕೂಡ ರಾಜೀವ್ ಗಾಂಧಿ ಹತ್ಯೆ ಪ್ರಕರಣದ 6 ಅಪರಾಧಿಗಳ ಅವಧಿಪೂರ್ವ ಬಿಡುಗಡೆ ಆದೇಶವನ್ನು ಪ್ರಶ್ನಿಸಿದ ಸುಪ್ರೀಂ ಕೋರ್ಟ್‌ನಲ್ಲಿ ಮರುಪರಿಶೀಲನಾ ಅರ್ಜಿ ಸಲ್ಲಿಸಿತ್ತು.
ನವೆಂಬರ್ 11ರಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ, ಬಿವಿ ನಾಗರತ್ನ ಅವರ ನ್ಯಾಯಪೀಠ ರಾಜೀವ್ ಗಾಂಧಿ ಕೊಲೆ ಪ್ರಕರಣದಲ್ಲಿ 3 ದಶಕಗಳಿಗೂ ಹೆಚ್ಚು ಸಮಯ ಜೀವಾವಧಿ ಶಿಕ್ಷೆ ಅನುಭವಿಸಿದ 6 ಅಪರಾಧಿಗಳನ್ನು ತಕ್ಷಣ ಬಿಡುಗಡೆ ಮಾಡಲು ಆದೇಶಿಸಿತ್ತು. ಈ 6 ಅಪರಾಧಿಗಳ ಪೈಕಿ ನಾಲ್ವರು ಶ್ರೀಲಂಕಾದವರಾಗಿದ್ದಾರೆ.
“ಆದೇಶದಲ್ಲಿ ನಿಗದಿಪಡಿಸಿದ ಆಧಾರದ ಮೇಲೆ ಅಪರಾಧಿಗಳನ್ನು ಬಿಡುಗಡೆ ಮಾಡುವ ಸುಪ್ರೀಂ ಕೋರ್ಟ್ ತೀರ್ಪನ್ನು ಪ್ರಶ್ನಿಸಿ ಹೊಸ ಮರುಪರಿಶೀಲನಾ ಅರ್ಜಿಯನ್ನು ಮುಂದಿನ ಕೆಲವು ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಸಲ್ಲಿಸಲಾಗುವುದು” ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಇದನ್ನೂ ಓದಿ: Breaking News: ರಾಜೀವ್ ಗಾಂಧಿ ಹಂತಕರ ಬಿಡುಗಡೆಗೆ ಆದೇಶ ನೀಡಿದ ಸುಪ್ರೀಂ
ರಾಜೀವ್ ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರೆಲ್ಲರೂ ಶಿಕ್ಷೆಯನ್ನು ಅನುಭವಿಸಿದ್ದಾರೆ ಎಂದು ಪರಿಗಣಿಸಿದ ನಂತರ 6 ಅಪರಾಧಿಗಳನ್ನು ಅವಧಿಗೆ ಮುನ್ನ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಮೇ 21, 1991ರ ರಾತ್ರಿ ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾಜಿ ಪ್ರಧಾನಿ ಧನು ಎಂಬ ಮಹಿಳಾ ಆತ್ಮಾಹುತಿ ಬಾಂಬರ್‌ನಿಂದ ಹತ್ಯೆಗೀಡಾಗಿದ್ದರು.
2018ರ ಸೆಪ್ಟೆಂಬರ್ 9ರಂದು ನಡೆದ ಸಂಪುಟ ಸಭೆಯಲ್ಲಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ 7 ಅಪರಾಧಿಗಳ ಕ್ಷಮಾದಾನ ಅರ್ಜಿಗಳನ್ನು ಪರಿಗಣಿಸಲಾಗಿತ್ತು. ಸಂವಿಧಾನದ ಆರ್ಟಿಕಲ್ 161ರ ಅಡಿಯಲ್ಲಿ ನೀಡಲಾದ ಅಧಿಕಾರವನ್ನು ಅನ್ವಯಿಸಿ ಅವರ ಜೀವಾವಧಿ ಶಿಕ್ಷೆಯನ್ನು ಹಿಂತೆಗೆದುಕೊಳ್ಳಲು ರಾಜ್ಯಪಾಲರಿಗೆ ಶಿಫಾರಸು ಮಾಡಲು ನಿರ್ಧರಿಸಲಾಗಿತ್ತು. 1991ರ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ನಳಿನಿ ಅವರಲ್ಲದೆ, ಶ್ರೀಹರನ್, ಸಂತನ್, ಮುರುಗನ್, ರಾಬರ್ಟ್ ಪಾಯಸ್ ಮತ್ತು ರವಿಚಂದ್ರನ್ ಅವರು ಜೈಲು ಪಾಲಾಗಿದ್ದರು.
ಇದನ್ನೂ ಓದಿ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿಗಳ ಬಿಡುಗಡೆ ಆದೇಶದ ಮರುಪರಿಶೀಲನೆ ಕೋರಿ ಸುಪ್ರೀಂ ಮೊರೆ ಹೋದ ಕೇಂದ್ರ
1991ರ ಮೇ 21ರ ರಾತ್ರಿ ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಚುನಾವಣಾ ರ್ಯಾಲಿಯಲ್ಲಿ ಧನು ಎಂಬ ಮಹಿಳಾ ಆತ್ಮಾಹುತಿ ಬಾಂಬರ್ ಮಾಜಿ ಪ್ರಧಾನಿ ರಾಜೀವ್ ಗಾಂಧಿಯನ್ನು ಹತ್ಯೆ ಮಾಡಿದ್ದರು. ಇದೀಗ ಮಾಜಿ ಪ್ರಧಾನಿಯನ್ನು ಹತ್ಯೆ ಮಾಡಿದ ಅಪರಾಧಿಗಳನ್ನು ಬಿಡುಗಡೆಗೊಳಿಸುವಂತೆ ಸುಪ್ರೀಂ ಆದೇಶವನ್ನು ನೀಡಿತ್ತು.
Published On - 4:06 pm, Mon, 21 November 22