
ನವದೆಹಲಿ, ಅಕ್ಟೋಬರ್ 11: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದ ಕಾಕ್ರೋಚ್ ಜನತಾ ಪಾರ್ಟಿ (CJP) ಸಂಘಟಕ ಅಭಿಜಿತ್ ದಿಪ್ಕೆ, ಪತ್ರಕರ್ತ ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಅವರನ್ನು ನ್ಯಾಯಾಲಯ ಬಿಡುಗಡೆ ಮಾಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಯೋಜಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಶನಿವಾರ ವಿಮಾನ ನಿಲ್ದಾಣದ ಬಳಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ ದೆಹಲಿ ಕಂಟೋನ್ಮೆಂಟ್‌ನ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಿಂದ ಬಿಡುಗಡೆ ಆದೇಶ ಬಂದಿದೆ ಎಂದು ವರದಿ ತಿಳಿಸಿದೆ.
ಇದೇ ವೇಳೆ, ಪ್ರತಿಭಟನೆ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಕೈಗೊಂಡ ಭದ್ರತಾ ಕ್ರಮಗಳು, ಮೆಟ್ರೋ ಸೇವೆಗಳ ನಿರ್ವಹಣೆ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಕೆಯಾಗಿದೆ ಎನ್ನಲಾದ ನ್ಯಾಯಾಂಗ ನಿಂದನೆ ಅರ್ಜಿ ಕುರಿತು ಚರ್ಚೆ ಮುಂದುವರೆದಿದೆ.
ಮತ್ತಷ್ಟು ಓದಿ: ಸಿಜೆಪಿ ಪ್ರತಿಭಟನೆಗೆ ಬಾಂಗ್ಲಾದೇಶದ ಎನ್‌ಸಿಪಿ ಬೆಂಬಲ: ಈ ಹೋರಾಟ ನಿಮ್ಮೊಬ್ಬರದ್ದಲ್ಲ ಎಂದ ನಹಿದ್ ಇಸ್ಲಾಂ
ಅಕ್ಟೋಬರ್ 9ರಂದು ಸುಪ್ರೀಂ ಕೋರ್ಟ್, ಸಾರ್ವಜನಿಕ ಸಾರಿಗೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸದೆ ನಿಯಂತ್ರಿತವಾಗಿ ನಡೆಸಬೇಕು ಎಂದು ಸೂಚಿಸಿತ್ತು. ಆದರೆ ಅಕ್ಟೋಬರ್ 10ರಂದು ಹಲವು ಮೆಟ್ರೋ ನಿಲ್ದಾಣಗಳ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ಮುಚ್ಚಿದ್ದರಿಂದ ಜನರಿಗೆ ತೊಂದರೆಯಾಗಿದೆ ಎಂದು ವಕೀಲ ಶೈಲೇಂದ್ರ ಮಣಿ ತ್ರಿಪಾಠಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ. ಅಧಿಕಾರಿಗಳು ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದ್ದಾರೆಯೇ ಎಂಬುದನ್ನು ವಿಚಾರಣೆಯ ನಂತರವೇ ನಿರ್ಧರಿಸಬೇಕಿದೆ.
ಧ್ರುವ್ ರಾಠಿ ಸೇರಿದಂತೆ ಇತರರ ಬಿಡುಗಡೆ
ಪ್ರತಿಭಟನೆಗೆ ಸಂಬಂಧಿಸಿದಂತೆ ವಶಕ್ಕೆ ಪಡೆದಿದ್ದ ಹಲವು ಕಾರ್ಯಕರ್ತರು ಮತ್ತು ಇತರರನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ ಎಂದು ವರದಿಯಾಗಿದೆ. ಯೂಟ್ಯೂಬರ್ ಧ್ರುವ್ ರಾಠಿ ಕೂಡ ಬಿಡುಗಡೆಗೊಂಡಿದ್ದಾರೆ. ಆದರೆ ಅಕ್ಟೋಬರ್ 11ರ ಬೆಳಗಿನ ವರದಿಗಳ ಪ್ರಕಾರ, ಸಿಜೆಪಿ ಮುಖಂಡರಾದ ಅಭಿಜಿತ್ ದಿಪ್ಕೆ, ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಇನ್ನೂ ಪೊಲೀಸ್ ವಶದಲ್ಲಿದ್ದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ