Maharashtra CM: ಮಹಾರಾಷ್ಟ್ರ ಸಿಎಂ ಆಗಿ ಮತ್ತೆ ಪಟ್ಟಕ್ಕೇರಿದ ದೇವೇಂದ್ರ ಫಡ್ನವಿಸ್; ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಭಾಗಿ

|

Updated on: Dec 05, 2024 | 6:04 PM

ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಇಂದು ಸಂಜೆ ಮುಂಬೈನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ವೇಳೆ ಉಪ ಮುಖ್ಯಮಂತ್ರಿಗಳಾಗಿ ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಈ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮುಂತಾದ ಮಹಾಯುತಿ ನಾಯಕರು ಉಪಸ್ಥಿತರಿದ್ದರು.

Maharashtra CM: ಮಹಾರಾಷ್ಟ್ರ ಸಿಎಂ ಆಗಿ ಮತ್ತೆ ಪಟ್ಟಕ್ಕೇರಿದ ದೇವೇಂದ್ರ ಫಡ್ನವಿಸ್; ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಭಾಗಿ
ದೇವೇಂದ್ರ ಫಡ್ನವಿಸ್​ಗೆ ಅಭಿನಂದಿಸಿದ ಪ್ರಧಾನಿ ಮೋದಿ
Follow us on

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ದೇವೇಂದ್ರ ಫಡ್ನವಿಸ್ ಮತ್ತೊಮ್ಮೆ ಸಿಎಂ ಪಟ್ಟಕ್ಕೆ ಏರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದ ಈ ಅದ್ಧೂರಿ ಸಮಾರಂಭದಲ್ಲಿ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ದೇವೇಂದ್ರ ಫಡ್ನವೀಸ್ ಪ್ರಮಾಣ ವಚನ ಸ್ವೀಕರಿಸಿದರು. ಮಹಾರಾಷ್ಟ್ರ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ದೇವೇಂದ್ರ ಫಡ್ನವಿಸ್ ಅವರಿಗೆ ಪ್ರಮಾಣವಚನ ಬೋಧಿಸಿದರು. ಮೂರನೇ ಬಾರಿಗೆ ಸಿಎಂ ಸ್ಥಾನ ಅಲಂಕರಿಸಿದ ದೇವೇಂದ್ರ ಫಡ್ನವೀಸ್ ಇಬ್ಬರು ಉಪಮುಖ್ಯಮಂತ್ರಿಗಳೊಂದಿಗೆ ಪ್ರಮಾಣ ವಚನ ಸ್ವೀಕರಿಸಿದರು. ಎನ್​ಸಿಪಿ ನಾಯಕ ಅಜಿತ್ ಪವಾರ್ ಮತ್ತು ಶಿವಸೇನೆ ನಾಯಕ ಏಕನಾಥ್ ಶಿಂಧೆ ಇಂದು ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಇದಕ್ಕೂ ಮುನ್ನ, ಗುರುವಾರ ಪ್ರಮಾಣ ವಚನ ಸ್ವೀಕರಿಸುವುದಾಗಿ ಅಜಿತ್ ಪವಾರ್ ಹೇಳಿದ್ದರೆ, ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂಧೆ ಪಾಳಯದಿಂದ ಯಾವುದೇ ಅಧಿಕೃತ ದೃಢೀಕರಣ ಬಂದಿರಲಿಲ್ಲ. ಹೀಗಾಗಿ, ಮಹಾರಾಷ್ಟ್ರ ಸರ್ಕಾರದಲ್ಲಿ ಏಕನಾಥ್ ಶಿಂಧೆ ಪಾತ್ರವೇನು? ಎಂಬ ಬಗ್ಗೆ ಕುತೂಹಲ ಉಳಿದಿತ್ತು.

ಇದನ್ನೂ ಓದಿ: ಮಹಾರಾಷ್ಟ್ರದ ಸಿಎಂ ಆಗಲಿರುವ ದೇವೇಂದ್ರ ಫಡ್ನವಿಸ್ ಕುರಿತ ಅಚ್ಚರಿಯ ವಿಷಯಗಳಿವು

ದಕ್ಷಿಣ ಮುಂಬೈನ ಆಜಾದ್ ಮೈದಾನದಲ್ಲಿ ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು. ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಫಡ್ನವಿಸ್ ಮತ್ತು ಅವರ ಪ್ರತಿನಿಧಿಗಳಿಗೆ ಪ್ರಮಾಣ ವಚನ ಬೋಧಿಸಿದ್ದಾರೆ.


ನವೆಂಬರ್ 20ರ ರಾಜ್ಯ ವಿಧಾನಸಭಾ ಚುನಾವಣೆ ಮತ್ತು ನವೆಂಬರ್ 23ರಂದು ಫಲಿತಾಂಶದ ನಂತರ ಎರಡು ವಾರಗಳ ತೀವ್ರ ಮಾತುಕತೆಗಳ ನಂತರ ಹೊಸ ಸರ್ಕಾರ ರಚನೆಯಾಗಿದೆ. ನಾಗ್ಪುರ ನೈಋತ್ಯ ಕ್ಷೇತ್ರವನ್ನು ಪ್ರತಿನಿಧಿಸುವ 54 ವರ್ಷದ ದೇವೇಂದ್ರ ಫಡ್ನವಿಸ್ 6ನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇದೀಗ 3ನೇ ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೇರಿದ್ದಾರೆ. ಬಿಜೆಪಿಯ 288 ಸದಸ್ಯರ ಸದನದಲ್ಲಿ 132 ಸ್ಥಾನಗಳಲ್ಲಿ ಗೆಲುವು ಕಂಡಿತು. ಮಿತ್ರಪಕ್ಷಗಳಾದ ಶಿವಸೇನೆ ಮತ್ತು ಎನ್‌ಸಿಪಿಯೊಂದಿಗೆ ಬಿಜೆಪಿ ನೇತೃತ್ವದ ಮಹಾಯುತಿ ಒಕ್ಕೂಟವು 230 ಸ್ಥಾನಗಳ ಬಹುಮತವನ್ನು ಹೊಂದಿದೆ.

ಇದನ್ನೂ ಓದಿ: Maharashtra CM Oath Ceremony: ಮಹಾರಾಷ್ಟ್ರ ನೂತನ ಸಿಎಂ ಪದಗ್ರಹಣ ಸಮಾರಂಭದ ನೇರಪ್ರಸಾರ

ಇಂದು ಮುಂಬೈನಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ 42,000ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು. ಪ್ರಧಾನಿ ಮೋದಿಯವರಲ್ಲದೆ, ಹಲವಾರು ಕೇಂದ್ರ ಸಚಿವರು, ಮುಖ್ಯಮಂತ್ರಿಗಳು ಮತ್ತು ವಿವಿಧ ರಾಜ್ಯಗಳ ಉಪ ಮುಖ್ಯಮಂತ್ರಿಗಳು ಮತ್ತು ಬಾಲಿವುಡ್ ತಾರೆಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. 40,000 ಬಿಜೆಪಿ ಬೆಂಬಲಿಗರಿಗೆ ಅವಕಾಶ ಕಲ್ಪಿಸಲು ವಿಶೇಷ ವ್ಯವಸ್ಥೆ ಮಾಡಲಾಗಿತ್ತು. ವಿವಿಧ ಧರ್ಮಗಳ ಮುಖಂಡರು ಸೇರಿದಂತೆ 2,000 ವಿವಿಐಪಿಗಳಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಲಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ