ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಿಲ್ಲ ಎಂದು ದಿಗ್ವಿಜಯ ಸಿಂಗ್ ಸ್ಪಷ್ಟನೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಚುನಾವಣೆ ರಂಗೇರಿದ್ದು, ಕಾಂಗ್ರೆಸ್ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿ ಎಂದು ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಿದ್ದರಿಂದ ದಿಗ್ವಿಜಯ ಸಿಂಗ್ ಅವರು ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ.
ಅಕ್ಟೋಬರ್ 17 ರಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಶೀಘ್ರದಲ್ಲೇ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಸದ್ಯ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್ ಮೊದಲ ಆಯ್ಕೆ ಮಾಡಲಾಗಿದೆ.
ಈ ಹಿಂದೆ ಶಶಿ ತರೂರ್ ಎದುರು ದಿಗ್ವಿಜಯ ಸಿಂಗ್ ಅವರು ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಲಿದ್ದಾರೆ ಎಂದು ಹೇಳಲಾಗಿತ್ತು. ಈ ನಡುವೆ ದಿಗ್ವಿಜಯ ಸಿಂಗ್ ಅವರು ಖರ್ಗೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ನಾಮಪತ್ರ ಸಲ್ಲಿಸಲು ಸೆ.30ರಂದು ಕೊನೆಯ ದಿನವಾಗಿದ್ದು, ಖರ್ಗೆಯವರು ಇಂದೇ ನಾಮಪತ್ರ ಸಲ್ಲಿಸಲಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದ್ದು, 19ರಂದು ಫಲಿತಾಂಶ ಹೊರಬೀಳಲಿದೆ. ಕಳೆದ ರಾತ್ರಿ ಮಹತ್ವದ ಸಭೆ ನಡೆಸಿದ ಕಾಂಗ್ರೆಸ್ ಹೈಕಮಾಂಡ್, ಆಪ್ತ ಮಲ್ಲಿಕಾರ್ಜುನ ಖರ್ಗೆಗೆ ಅಧ್ಯಕ್ಷ ಚುನಾವಣೆಗೆ ಸ್ಪರ್ಧಿಸಲು ಸೂಚಿಸಿದ್ದಾರೆ. ಗಾಂಧಿ ಕುಟುಂಬದ ಮಾತಿನಂತೆ ಖರ್ಗೆ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.
ಗಾಂಧಿ ಕುಟುಂಬಸ್ಥರು ಈ ಬಾರಿ ಉನ್ನತ ಹುದ್ದೆಗೆ ಸ್ಪರ್ಧಿಸದ ಕಾರಣ, ಗ್ರ್ಯಾಂಡ್ ಓಲ್ಡ್ ಪಾರ್ಟಿ 25 ವರ್ಷಗಳ ನಂತರ ಗಾಂಧಿಯೇತರ ಅಧ್ಯಕ್ಷರನ್ನು ಪಡೆಯಲು ಸಿದ್ಧತೆ ನಡೆಸಿದೆ.
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಇನ್ನೂ ರೇಸ್‌ನಿಂದ ಹೊರಬಂದಿಲ್ಲ ಮತ್ತು ಕುಮಾರಿ ಸೆಲ್ಜಾ, ಮೀರಾ ಕುಮಾರ್ ಅವರ ಹೆಸರನ್ನು ಸಹ ಪರಿಗಣಿಸಲಾಗುತ್ತಿದೆ. ಆದರೆ ರಾಹುಲ್ ಗಾಂಧಿ ಅವರು ಕೆಸಿ ವೇಣುಗೋಪಾಲ್ ಅವರನ್ನು ಆಯ್ಕೆ ಮಾಡಿದ್ದಾರೆ.
ಹಿರಿಯ ಕಾಂಗ್ರೆಸ್ ನಾಯಕ ಕಮಲ್ ನಾಥ್ ಅವರು ಸೋಮವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ, ಅವರು ಪಕ್ಷದ ಅಧ್ಯಕ್ಷರಾಗಲು ಅವರಿಗೆ ಇಷ್ಟವಿಲ್ಲ. ಅವರು, ಮಧ್ಯಪ್ರದೇಶದಲ್ಲಿ ಪಕ್ಷಕ್ಕಾಗಿ ಕೆಲಸ ಮಾಡಲು ಬಯಸುತ್ತಾರೆ ಎಂದು ತಿಳಿಸಿದ್ದಾರೆ.
Published On - 11:46 am, Fri, 30 September 22