
ನವದೆಹಲಿ, ನವೆಂಬರ್ 27: ದೇಶದಲ್ಲಿ ಮಾದಕ ವಸ್ತುಗಳ ಬಳಕೆ ಮತ್ತು ಕಳ್ಳಸಾಗಣೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಅದರಲ್ಲೂ ಯುವಜನರು ಮಾದಕ ವ್ಯಸನದತ್ತ ಆಕರ್ಷಿತರಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲು ಕೇಂದ್ರ ಸಚಿವ ಜಿ. ಕಿಶನ್ ರೆಡ್ಡಿ ಹೈದರಾಬಾದ್‌ನಲ್ಲಿ ಮೂರು ದಿನಗಳ ಪಾದಯಾತ್ರೆ ಕೈಗೊಂಡಿದ್ದಾರೆ. ಈ ಅಭಿಯಾನಕ್ಕೆ ಪ್ರಧಾನಿ ಮೋದಿ ಕೂಡ ಬೆಂಬಲ ಸೂಚಿಸಿದ್ದು, ಯಾತ್ರೆ ಮುಂದುವರಿಸಲು ಸಚಿವ ಸಂಪುಟ ಸಭೆಯಿಂದ ಅವರಿಗೆ ವಿನಾಯಿತಿ ನೀಡಿದ್ದಾರೆ.
ನವೆಂಬರ್ 27ರಂದು ಮಧ್ಯಾಹ್ನ 1 ಗಂಟೆಗೆ ನವದೆಹಲಿಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿದೆ. ನವೆಂಬರ್ 30ರಿಂದ ಆರಂಭವಾಗಲಿರುವ ಸಂಸತ್ತಿನ ವಿಶೇಷ ಅಧಿವೇಶನಕ್ಕೂ ಮುನ್ನ ನಡೆಯುತ್ತಿರುವ ಈ ಸಭೆಗೆ ಹಾಜರಾಗಬೇಕಿದ್ದ ಕಿಶನ್ ರೆಡ್ಡಿ, ಹೈದರಾಬಾದ್‌ನಲ್ಲಿನ ತಮ್ಮ ಅಭಿಯಾನವನ್ನು ಪೂರ್ಣಗೊಳಿಸಲು ನಿರ್ಧರಿಸಿದ್ದಾರೆ.
ಕಳೆದ ಎರಡು ದಿನಗಳಿಂದ ಪಾದಯಾತ್ರೆಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಅಭಿಯಾನವನ್ನು ಮುಂದುವರಿಸಲು ಅವರಿಗೆ ವಿಶೇಷ ವಿನಾಯಿತಿ ನೀಡಲಾಗಿದೆ ಎಂದು ವರದಿಯಾಗಿದೆ.
ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಮತ್ತು ಮಾದಕ ವ್ಯಸನದ ವಿರುದ್ಧದ ಹೋರಾಟದಲ್ಲಿ ಸಾರ್ವಜನಿಕರ ಸಹಭಾಗಿತ್ವ ಹೆಚ್ಚಿಸುವುದು ಈ ಪಾದಯಾತ್ರೆಯ ಉದ್ದೇಶವಾಗಿದೆ. ನವೆಂಬರ್ 25ರಂದು ಬುಧವಾರ ಹೈದರಾಬಾದ್‌ನ ಅಂಬರ್‌ಪೇಟ್‌ನಲ್ಲಿ ಈ ಯಾತ್ರೆ ಆರಂಭವಾಯಿತು. ಹಿರಿಯ ತೆಲುಗು ನಟ ವೆಂಕಟೇಶ್ ಪಾದಯಾತ್ರೆಗೆ ಚಾಲನೆ ನೀಡಿದರು. ಹರಿಯಾಣದ ಮಾಜಿ ರಾಜ್ಯಪಾಲ ಬಂಡಾರು ದತ್ತಾತ್ರೇಯ, ತೆಲಂಗಾಣ ಬಿಜೆಪಿ ಅಧ್ಯಕ್ಷ ಎನ್. ರಾಮಚಂದರ್ ರಾವ್ ಸೇರಿದಂತೆ ಹಲವು ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮೂರು ದಿನಗಳ ಕಾಲ ನಡೆಯುವ ಈ ಪಾದಯಾತ್ರೆ ನವೆಂಬರ್ 27ರಂದು ಶುಕ್ರವಾರ ಜುಬಿಲಿ ಹಿಲ್ಸ್‌ನಲ್ಲಿ ಮುಕ್ತಾಯಗೊಳ್ಳಲಿದೆ.
ಇದನ್ನೂ ಓದಿ: ಡಿಸೆಂಬರ್ 2029ರೊಳಗೆ ಭಾರತ ‘ಡ್ರಗ್ಸ್ ಮುಕ್ತ’ ದೇಶ: ಗೃಹ ಸಚಿವ ಅಮಿತ್ ಶಾ ಘೋಷಣೆ
ಪಾದಯಾತ್ರೆಯ ಸಂದರ್ಭದಲ್ಲಿ ಮಾತನಾಡಿದ ಕಿಶನ್ ರೆಡ್ಡಿ, ಮಾದಕ ವ್ಯಸನದ ವಿರುದ್ಧದ ಹೋರಾಟದಲ್ಲಿ ಯುವಜನರು, ಪೋಷಕರು, ಶಿಕ್ಷಕರು ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಕರೆ ನೀಡಿದ್ದಾರೆ. ಭಾರತದ ಜನಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಮತ್ತು ಯುವಜನರ ಪಾಲು ಸುಮಾರು ಶೇ.25ರಷ್ಟಿದೆ. ಅವರ ಭವಿಷ್ಯವನ್ನು ಮಾದಕ ವಸ್ತುಗಳ ದುಷ್ಪರಿಣಾಮಗಳಿಂದ ರಕ್ಷಿಸುವುದು ಅತ್ಯಂತ ಮುಖ್ಯ ಎಂದು ಅವರು ಹೇಳಿದ್ದಾರೆ.
ಶಾಲಾ-ಕಾಲೇಜುಗಳು, ಕೆಲಸದ ಸ್ಥಳಗಳು ಮತ್ತು ವಸತಿ ಪ್ರದೇಶಗಳ ಸುತ್ತಮುತ್ತ ಮಾದಕ ವಸ್ತುಗಳ ಮಾರಾಟ ನಡೆಯುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಯುವಜನರನ್ನು ಆಕರ್ಷಿಸಲು ಕೆಲವು ಮಾದಕ ವಸ್ತುಗಳನ್ನು ಚಾಕೊಲೇಟ್‌ಗಳು ಮತ್ತು ಇತರ ಉತ್ಪನ್ನಗಳ ರೂಪದಲ್ಲಿ ಮರೆಮಾಚಲಾಗುತ್ತಿದೆ ಎಂದು ಎಚ್ಚರಿಸಿದ್ದಾರೆ.
ಮಾದಕ ವ್ಯಸನದ ವಿರುದ್ಧ ಸಾಮೂಹಿಕ ಹೋರಾಟಕ್ಕೆ ಕರೆ
ಮಾದಕ ವ್ಯಸನವು ಕೇವಲ ಒಬ್ಬ ವ್ಯಕ್ತಿಯ ಸಮಸ್ಯೆಯಲ್ಲ. ಅದು ಕುಟುಂಬ ಮತ್ತು ಇಡೀ ಸಮಾಜದ ಮೇಲೆ ಪರಿಣಾಮ ಬೀರುತ್ತದೆ ಎಂದು ಸಚಿವರು ಹೇಳಿದ್ದಾರೆ. ಈ ಸಮಸ್ಯೆಯನ್ನು ತಡೆಗಟ್ಟಲು ಪೋಷಕರು, ಶಿಕ್ಷಕರು, ಶಿಕ್ಷಣ ಸಂಸ್ಥೆಗಳು, ಸ್ವಯಂಸೇವಾ ಸಂಘಟನೆಗಳು ಮತ್ತು ರಾಜಕೀಯ ಪಕ್ಷಗಳು ಒಟ್ಟಾಗಿ ಕೆಲಸ ಮಾಡಬೇಕು ಎಂದು ಕರೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ‘ನಶಾ ಮುಕ್ತ ಭಾರತ’ ಗುರಿಯನ್ನು ಯಶಸ್ವಿಗೊಳಿಸಲು ಪ್ರತಿಯೊಬ್ಬ ನಾಗರಿಕರೂ ಜವಾಬ್ದಾರಿ ವಹಿಸಬೇಕು ಎಂಬುದು ಈ ಅಭಿಯಾನದ ಪ್ರಮುಖ ಸಂದೇಶವಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ