Kerala Rains: ಕೇರಳದಲ್ಲಿ ಇನ್ನು ನಾಲ್ಕು ದಿನ ಭಾರೀ ಮಳೆ, ಏಳು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್​

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jul 31, 2022 | 2:27 PM

India Meteorological Department: ಕೇರಳದ ಹಲವು ಜಿಲ್ಲೆಗಳಲ್ಲಿ ಭಾನುವಾರದಿಂದ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

Kerala Rains: ಕೇರಳದಲ್ಲಿ ಇನ್ನು ನಾಲ್ಕು ದಿನ ಭಾರೀ ಮಳೆ, ಏಳು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್​
ಪ್ರಾತಿನಿಧಿಕ ಚಿತ್ರ
Image Credit source: Hindustan Times
Follow us on

ತಿರುವನಂತಪುರ: ಕೇರಳದ ಹಲವು ಜಿಲ್ಲೆಗಳಲ್ಲಿ ಭಾನುವಾರದಿಂದ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (India Meteorological Department – IMD) ಎಚ್ಚರಿಸಿದೆ. ಅಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್ ಮತ್ತು ಮಲಪ್ಪುರಂ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್​ ಘೋಷಿಸಲಾಗಿದೆ. ಆಗಸ್ಟ್​ 4ರವರೆಗೆ ಸಮುದ್ರದಲ್ಲಿ ಮೀನುಗಾರಿಕೆ ನಡೆಸುವವರಿಗೆ ಎಚ್ಚರದಿಂದ ಇರಲು ಸೂಚಿಸಲಾಗಿದೆ. ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳಿಗೆ ಸೋಮವಾರಕ್ಕೆ ಆರೆಂಜ್ ಅಲರ್ಟ್ ನೀಡಲಾಗಿದೆ. ತಿರುವನಂತಪುರಂ, ಕೊಲ್ಲಮ್, ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ಮಂಗಳವಾರ ಮಳೆ ಮತ್ತಷ್ಟು ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಕೇರಳದಲ್ಲಿ ಜುಲೈ ತಿಂಗಳಲ್ಲಿ ವ್ಯಾಪಕ ಮಳೆಯಾಗಿದೆ. ಆದರೆ ಜೂನ್​ ತಿಂಗಳಲ್ಲಿ ವಾಡಿಕೆಯಷ್ಟು ಮಳೆಯಾಗಿಲ್ಲ. ಪ್ರಸಕ್ತ ಸಾಲಿನ ಮುಂಗಾರಿನಲ್ಲಿ ಈವರೆಗಿನ ನಿರೀಕ್ಷಿತ ಮಳೆಯ ಪೈಕಿ ಕೇರಳದಲ್ಲಿ ಶೇ 26ರಷ್ಟು ಕೊರತೆ ಕಾಣಿಸಿಕೊಂಡಿದೆ. ಮಳೆ ಕೊರತೆಯ ನಡುವೆಯೂ ಬಹುತೇಕ ಜಲಾಶಯಗಳಲ್ಲಿ ಶೇ 60ರಷ್ಟು ನೀರು ನಿಂತಿದೆ. ಮುಂಗಾರು ಮಳೆಯು ಸೆಪ್ಟೆಂಬರ್ 30ಕ್ಕೆ ಅಂತ್ಯಗೊಳ್ಳುವ ಹೊತ್ತಿಗೆ ಎಲ್ಲ ಜಲಾಶಯಗಳು ಭರ್ತಿಯಾಗುವ ಎನ್ನುವ ನಿರೀಕ್ಷೆಯಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ಕರ್ನಾಟಕದಲ್ಲಿ 3 ದಿನ ಮಳೆ

ಬೆಂಗಳೂರು: ಕಳೆದೊಂದು ವಾರದಿಂದ ಕೊಂಚ ಶಾಂತವಾಗಿದ್ದ ಮಲೆನಾಡು ಮತ್ತು ಕರಾವಳಿಯಲ್ಲಿ ಮತ್ತೆ ಮಳೆಯ (Rainfall) ಅಬ್ಬರ ಹೆಚ್ಚಾಗಿದೆ. 2 ದಿನಗಳಿಂದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಆರೆಂಜ್ ಅಲರ್ಟ್​ (Orange Alert) ಮುಂದುವರೆದಿದೆ. ಇಂದು ಕೂಡ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಮಳೆ ಹೆಚ್ಚಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಚಿತ್ರದುರ್ಗ, ತುಮಕೂರು, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರಗಿ ಮತ್ತು ಬೀದರ್‌ ಜಿಲ್ಲೆಯಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯಿದೆ. ಮಲೆನಾಡು, ಕರಾವಳಿಯಲ್ಲಿ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕರ್ನಾಟಕದಲ್ಲಿ ಹಳದಿ ಅಲರ್ಟ್‌ ಘೋಷಿಸಲಾಗಿದೆ. ಇಂದು ಬೆಳಗ್ಗೆ 8.30ರವರೆಗೆ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

Published On - 2:27 pm, Sun, 31 July 22