ದೆಹಲಿ: ದೇಶದ ವಿವಿಧೆಡೆ ಮುಂಗಾರು (Monsoor Rain) ಚುರುಕಾಗಿದ್ದು ಮಹಾರಾಷ್ಟ್ರ, ಕರ್ನಾಟಕ, ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ. ಪಶ್ಚಿಮ ಮಹಾರಾಷ್ಟ್ರದಲ್ಲಿ ಮಳೆ ಸುರಿಯುತ್ತಿರುವುದರಿಂದ ಕರ್ನಾಟಕದಲ್ಲಿ ಕೃಷ್ಣಾ ನದಿ ಹರಿಯುವ ಬೆಳಗಾವಿ, ಬಾಗಲಕೋಟೆ, ರಾಯಚೂರು ಜಿಲ್ಲೆಗಳಲ್ಲಿ ಪ್ರವಾಹದ ಭೀತಿ ತಲೆದೋರಿದೆ. ಕರ್ನಾಟಕದೊಂದಿಗೆ ಗಡಿ ಹಂಚಿಕೊಂಡಿರುವ ತೆಲಂಗಾಣದಲ್ಲಿಯೂ ಮಳೆ ಆರ್ಭಟ ಮುಂದುವರಿದಿದ್ದು, ಹಲವು ಜಿಲ್ಲೆಗಳಲ್ಲಿ ನದಿಗಳು ಉಕ್ಕಿ ಹರಿಯುತ್ತಿವೆ.
ಪಶ್ಚಿಮ ಮಹಾರಾಷ್ಟ್ರದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ಉಲ್ಬಣಿಸಿದೆ. ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಹಲವು ಗ್ರಾಮಗಳು ನೀರಿನಲ್ಲಿ ಮುಳುಗಿವೆ. ಹಿಂಗ್ಲೋಯಿ ಮತ್ತು ನಾಂದೇಡ್ ಜಿಲ್ಲೆಗಳಲ್ಲಿ ಅಸನಾ ನದಿ ಉಕ್ಕಿ ಹರಿಯುತ್ತಿದೆ. ನದಿ ಪಾತ್ರದ ಗ್ರಾಮಸ್ಥರನ್ನು ಸ್ಥಳಾಂತರ ಮಾಡಲಾಗುತ್ತಿದೆ. ಮಹಾರಾಷ್ಟ್ರದ ಕೊಂಕಣ್, ಮಧ್ಯ, ಮರಾಠವಾಡ ಪ್ರದೇಶಗಳಲ್ಲಿ ಮುಂದಿನ ನಾಲ್ಕೈದು ದಿನಗಳ ಕಾಲ ಭಾರೀ ಮಳೆ ಆಗಬಹುದು ಎಂಬ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಕರ್ನಾಟಕ, ಗೋವಾ, ಮಹಾರಾಷ್ಟ್ರ ಮತ್ತು ಗುಜರಾತ್ ಕರಾವಳಿ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಇನ್ನೂ ಕೆಲವು ದಿನಗಳ ಅವಧಿಗೆ ಇದೇ ಪರಿಸ್ಥಿತಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಒಡಿಶಾದಲ್ಲಿ ವಾಯುಭಾರ ಕುಸಿತ ಸಂಭವಿಸಿದ್ದು ಮೋಡ ಹೊತ್ತ ಮಾರುತಗಳು ಪಶ್ಚಿಮ ಭಾರತದತ್ತ ಧಾವಿಸುತ್ತಿವೆ. ಮುಂಗಾರು ಮಾರುತಗಳ ಪ್ರಭಾವವೂ ಇರುವುದರಿಂದ ಛತ್ತೀಸಗಡ, ಮಧ್ಯಪ್ರದೇಶ, ಒಡಿಶಾ, ಮಹಾರಾಷ್ಟ್ರ, ಗುಜರಾತ್, ಕೇರಳ, ಆಂಧ್ರ ಪ್ರದೇಶ, ತೆಲಂಗಾಣ ಮತ್ತು ಕರ್ನಾಟಕ ರಾಜ್ಯಗಳಲ್ಲಿ ಇನ್ನೂ ಐದು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ಕರಾವಳಿ, ಗುಜರಾತ್ನ ಸೌರಾಷ್ಟ್ರ ಮತ್ತು ಕಛ್ ಪ್ರಾಂತ್ಯಗಳಲ್ಲಿ ಸೋಮವಾರದವರೆಗೆ ಮಳೆಯ ಪ್ರಮಾಣ ಕಡಿಮೆಯಾಗುವುದಿಲ್ಲ ಎಂದು ತಿಳಿಸಿದೆ.
#WATCH | Maharashtra | A flood-like situation occurred in different areas of the Gadchiroli district due to heavy rainfall in the region (09.07) pic.twitter.com/xbldjKwqsQ
— ANI (@ANI) July 10, 2022