ನವದೆಹಲಿ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪದಗ್ರಹಣ ಸಮಾರಂಭದಲ್ಲಿ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ ಭಾಗಿಯಾಗಿದ್ದರ ಬಗ್ಗೆ ಭಾರತ ಅಧಿಕೃತವಾಗಿ ಅಮೆರಿಕದೊಂದಿಗೆ ಚರ್ಚೆ ನಡೆಸುವುದಾಗಿ ಹೇಳಿದೆ. ಈ ಬಗ್ಗೆ ಮಾತನಾಡಿದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ಗುರುಪತ್ವಂತ್ ಸಿಂಗ್ ಪನ್ನುನ್ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಿದ್ದರ ಬಗ್ಗೆ ಅಮೆರಿಕ ಸರ್ಕಾರದೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದ್ದಾರೆ.
ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿದ್ದರು ಎಂಬ ವರದಿಗಳ ನಡುವೆ, ವಿದೇಶಾಂಗ ಸಚಿವಾಲಯ (ಎಂಇಎ) ಇಂದು ಮಾಧ್ಯಮಗೋಷ್ಠಿಯಲ್ಲಿ ಭಾರತವು ಈ ವಿಷಯವನ್ನು ಅಮೆರಿಕದೊಂದಿಗೆ ಚರ್ಚಿಸಲಿದೆ ಎಂದು ಹೇಳಿದೆ. ಅಮೆರಿಕದಲ್ಲಿ ಯಾವುದೇ ಭಾರತ ವಿರೋಧಿ ಚಟುವಟಿಕೆ ನಡೆದಾಗಲೆಲ್ಲಾ ಸಂಬಂಧಪಟ್ಟ ಸರ್ಕಾರದೊಂದಿಗೆ ಈ ವಿಷಯವನ್ನು ಪ್ರಸ್ತಾಪಿಸಲಾಗುತ್ತದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.
ಇದನ್ನೂ ಓದಿ: ರಾಮ ಮಂದಿರದ ಮೇಲೆ ದಾಳಿ ನಡೆಸುವುದಾಗಿ ಖಲಿಸ್ತಾನಿ ಉಗ್ರ ಪನ್ನುನ್ ಬೆದರಿಕೆ
ವರದಿಯ ಪ್ರಕಾರ, ಪನ್ನುನ್ ಟ್ರಂಪ್ ಪದಗ್ರಹಣ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲಿ ಅವರು ಭಾರತ ವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ ಎಂದು ವರದಿಯಾಗಿದೆ. ಈ ಹಿಂದೆ ಪನ್ನುನ್ ಅಮೆರಿಕದ ಭಾರತೀಯ ರಾಯಭಾರಿ ವಿನಯ್ ಮೋಹನ್ ಕ್ವಾತ್ರಾ ಅವರಿಗೆ ಬೆದರಿಕೆ ಹಾಕಿದ್ದರು.
2020ರಲ್ಲಿ ಭಾರತದಿಂದ ಭಯೋತ್ಪಾದಕ ಎಂದು ಘೋಷಿಸಲ್ಪಟ್ಟ ಗುರುಪತ್ವಂತ್ ಸಿಂಗ್ ಪನ್ನುನ್ ದೇಶ ಬಿಟ್ಟು ಪರಾರಿಯಾಗಿದ್ದರು. ಅದಾದ ಎರಡು ತಿಂಗಳ ನಂತರ, ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯ ಸೆಕ್ಷನ್ 51A ಅಡಿಯಲ್ಲಿ ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಸರ್ಕಾರ ಆದೇಶಿಸಿತ್ತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ