ವಲಸಿಗರ ವಿಚಾರದಲ್ಲಿ ಭಾರತ ಸೂಕ್ತ ಕ್ರಮ ಕೈಗೊಳ್ಳಲಿದೆ; ಮೋದಿ ಜೊತೆಗಿನ ಮಾತುಕತೆ ಬಳಿಕ ಡೊನಾಲ್ಡ್ ಟ್ರಂಪ್ ಹೇಳಿಕೆ

|

Updated on: Jan 28, 2025 | 4:14 PM

ಅಕ್ರಮವಾಗಿ ಅಮೆರಿಕಕ್ಕೆ ಬಂದ ಭಾರತೀಯ ವಲಸಿಗರನ್ನು ವಾಪಾಸ್ ಕರೆಸಿಕೊಳ್ಳುವ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರಿಯಾದ ನಿರ್ಧಾರ ತೆಗೆದುಕೊಳ್ಳುವ ವಿಶ್ವಾಸವಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಜನವರಿ 20ರಂದು ಎರಡನೇ ಅವಧಿಗೆ ಅಮೆರಿಕದ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಪ್ರಮಾಣವಚನ ಸ್ವೀಕರಿಸಿದ ನಂತರ ಪಿಎಂ ನರೇಂದ್ರ ಮೋದಿ ಮಾಡಿದ ಮೊದಲ ದೂರವಾಣಿ ಸಂಭಾಷಣೆಯ ನಂತರ ಟ್ರಂಪ್ ಈ ಹೇಳಿಕೆ ನೀಡಿದ್ದಾರೆ.

ವಲಸಿಗರ ವಿಚಾರದಲ್ಲಿ ಭಾರತ ಸೂಕ್ತ ಕ್ರಮ ಕೈಗೊಳ್ಳಲಿದೆ; ಮೋದಿ ಜೊತೆಗಿನ ಮಾತುಕತೆ ಬಳಿಕ ಡೊನಾಲ್ಡ್ ಟ್ರಂಪ್ ಹೇಳಿಕೆ
Narendra Modi Donald Trump
Follow us on

ವಾಷಿಂಗ್ಟನ್ ಡಿಸಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಫೋನ್​ನಲ್ಲಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಆ ಇಬ್ಬರು ನಾಯಕರು ದ್ವಿಪಕ್ಷೀಯ ಸಹಕಾರವನ್ನು ವಿಸ್ತರಿಸುವ ಮತ್ತು ಇಂಡೋ-ಪೆಸಿಫಿಕ್, ಮಧ್ಯಪ್ರಾಚ್ಯ ಮತ್ತು ಯುರೋಪ್‌ನಲ್ಲಿ ಭದ್ರತೆ ಸೇರಿದಂತೆ ವಿಷಯಗಳ ಕುರಿತು ಚರ್ಚಿಸಿದ್ದಾರೆ. ಜನವರಿ 20ರಂದು ರಿಪಬ್ಲಿಕನ್ ಎರಡನೇ ಅವಧಿಗೆ ಪ್ರಮಾಣವಚನ ಸ್ವೀಕರಿಸಿದ ನಂತರ ಅಧ್ಯಕ್ಷ ಟ್ರಂಪ್ ಮತ್ತು ಪ್ರಧಾನಿ ಮೋದಿ ನಡುವಿನ ಮೊದಲ ದೂರವಾಣಿ ಸಂಭಾಷಣೆ ಇದಾಗಿದೆ.

ಫೋನ್ ಮಾತುಕತೆಯ ಬಳಿಕ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿಯಲ್ಲಿ ಅಮೆರಿಕಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. ಫೋನ್ ಕರೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಭಾರತದ ಪ್ರಧಾನಿ ಮೋದಿ ಅವರೊಂದಿಗೆ ವಲಸಿಗರ ಬಗ್ಗೆಯೂ ಚರ್ಚಿಸಿದ್ದಾರೆ. ಅಮೆರಿಕದಲ್ಲಿರುವ ಭಾರತದ ‘ಅಕ್ರಮ ವಲಸಿಗರನ್ನು’ ವಾಪಸ್ ಕರೆಸಿಕೊಳ್ಳುವ ವಿಷಯದಲ್ಲಿ ಭಾರತ ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜಾಗತಿಕ ಶಾಂತಿಗಾಗಿ ಒಟ್ಟಾಗಿ ಕೆಲಸ ಮಾಡೋಣ; ಅಮೆರಿಕ ಅಧ್ಯಕ್ಷ ಟ್ರಂಪ್ ಜೊತೆ ಪ್ರಧಾನಿ ಮೋದಿ ಚರ್ಚೆ

ಪ್ರಧಾನಿ ನರೇಂದ್ರ ಮೋದಿ ಈ ಮೊದಲು ಕಳೆದ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ಅಮೆರಿಕಕ್ಕೆ ಭೇಟಿ ನೀಡಿದ್ದರು. ಆಗಿನ ಅಧ್ಯಕ್ಷ ಜೋ ಬೈಡೆನ್ ಆಯೋಜಿಸಿದ್ದ ನಾಲ್ಕನೇ ಕ್ವಾಡ್ ನಾಯಕರ ಶೃಂಗಸಭೆಗೆ ಅವರು ಅಲ್ಲಿಗೆ ಹೋಗಿದ್ದರು. ಆಗ ಕ್ವಾಡ್ ರಾಜ್ಯಗಳ ಪ್ರಧಾನ ಮಂತ್ರಿಗಳಾದ ಆಸ್ಟ್ರೇಲಿಯಾದ ಆಂಥೋನಿ ಅಲ್ಬನೀಸ್ ಮತ್ತು ಜಪಾನ್‌ನ ಆಗಿನ ಪ್ರಧಾನಿ ಫ್ಯೂಮಿಯೊ ಕಿಶಿಡಾ ಕೂಡ ಭಾಗವಹಿಸಿದ್ದರು.

ಇದನ್ನೂ ಓದಿ: ಅಮೆರಿಕಕ್ಕೆ ಫೆಬ್ರವರಿಯಲ್ಲಿ ಪ್ರಧಾನಿ ಮೋದಿ ಭೇಟಿ ನೀಡುವ ಸಾಧ್ಯತೆ

ಅಮೆರಿಕದಲ್ಲಿ ಅಕ್ರಮ ವಲಸೆಯನ್ನು ಹತ್ತಿಕ್ಕುವುದಾಗಿ ಡೊನಾಲ್ಡ್ ಟ್ರಂಪ್ ಪ್ರತಿಜ್ಞೆ ಮಾಡಿದ್ದಾರೆ. ಅಮೆರಿಕದಲ್ಲಿ ಅಕ್ರಮವಾಗಿ ನೆಲೆಸಿರುವ ಸುಮಾರು 18,000 ಭಾರತೀಯ ವಲಸಿಗರನ್ನು ಗುರುತಿಸಲಾಗಿದೆ ಎಂದು ಬ್ಲೂಮ್‌ಬರ್ಗ್ ನ್ಯೂಸ್ ಕಳೆದ ವಾರ ವರದಿ ಮಾಡಿತ್ತು.

ಕಳೆದ ವಾರ ವಾಷಿಂಗ್ಟನ್ ಡಿ.ಸಿ.ಯಲ್ಲಿ ಡೊನಾಲ್ಡ್ ಟ್ರಂಪ್ ಅವರ ಪ್ರಮಾಣವಚನ ಸಮಾರಂಭದಲ್ಲಿ ಭಾರತದ ವಿದೇಶಾಂಗ ಸಚಿವ ಎಸ್​. ಜೈಶಂಕರ್ ಭಾರತ ಸರ್ಕಾರವನ್ನು ಪ್ರತಿನಿಧಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ