
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) 2026ನೇ ಸಾಲಿನ ಅಪ್ರೆಂಟಿಸ್ ಹುದ್ದೆಗಳ ಬೃಹತ್ ನೇಮಕಾತಿಗಾಗಿ ಅಧಿಕೃತ ಪ್ರಕಟಣೆಯನ್ನು ಹೊರಡಿಸಿದೆ. ಒಟ್ಟು 335 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಾರ್ವಜನಿಕ ವಲಯದ ಪ್ರಮುಖ ಸಂಸ್ಥೆಯಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಲು ಬಯಸುವ 10ನೇ ತರಗತಿ, ದ್ವಿತೀಯ ಪಿಯುಸಿ (PUC) ಮತ್ತು ಐಟಿಐ (ITI) ಉತ್ತೀರ್ಣರಾದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಇದು ಅತ್ಯುತ್ತಮ ಅವಕಾಶವಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ, ದ್ವಿತೀಯ ಪಿಯುಸಿ ಅಥವಾ ಐಟಿಐ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಇಲಾಖೆಯ ನಿಯಮಗಳ ಅನುಸಾರ ಸಂಬಂಧಿತ ಟ್ರೇಡ್ಗಳಲ್ಲಿ ಐಟಿಐ ಅರ್ಹತೆ ಇರುವುದು ಕಡ್ಡಾಯವಾಗಿದೆ. ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯಸ್ಸಾಗಿರಬೇಕು ಮತ್ತು ಗರಿಷ್ಠ 28 ವರ್ಷ ವಯಸ್ಸನ್ನು ಮೀರಿರಬಾರದು. ಸರ್ಕಾರಿ ನಿಯಮಗಳ ಪ್ರಕಾರ ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST), ಇತರೆ ಹಿಂದುಳಿದ ವರ್ಗಗಳು (OBC) ಮತ್ತು ಇತರೆ ಮೀಸಲಾತಿ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ನ ಅಪ್ರೆಂಟಿಷಿಪ್ ನಿಯಮಗಳ ಅನುಸಾರ ಮಾಸಿಕ ಸ್ಟೈಪೆಂಡ್ (ವೇತನ) ನಿಗದಿಪಡಿಸಲಾಗುತ್ತದೆ. ಅಭ್ಯರ್ಥಿಗಳ ಆಯ್ಕೆಯನ್ನು ಲಿಖಿತ ಪರೀಕ್ಷೆ ಮತ್ತು ದಾಖಲಾತಿ ಪರಿಶೀಲನೆಯ ಮೂಲಕ ನಡೆಸಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿದ ಅಂಕಗಳು ಹಾಗೂ ಮೂಲ ದಾಖಲೆಗಳ ಪರಿಶೀಲನೆಯ ನಂತರ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.
ಈ ನೇಮಕಾತಿಯ ವಿಶೇಷತೆಯೆಂದರೆ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಸಾಮಾನ್ಯ ವರ್ಗ, 2A, 2B, 3A, 3B, SC, ST ಹಾಗೂ ಅಂಗವಿಕಲ ಅಭ್ಯರ್ಥಿಗಳು ಸೇರಿದಂತೆ ಪ್ರತಿಯೊಬ್ಬರಿಗೂ ಅರ್ಜಿ ಸಲ್ಲಿಕೆ ಸಂಪೂರ್ಣ ಉಚಿತವಾಗಿದೆ. ಈ ನೇಮಕಾತಿಯಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕ ರಾಜ್ಯದಾದ್ಯಂತ ಇರುವ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ನ ವಿವಿಧ ಘಟಕಗಳಲ್ಲಿ ಉದ್ಯೋಗವನ್ನು ನೀಡಲಾಗುತ್ತದೆ.
ಇದನ್ನೂ ಓದಿ: ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ ನೇಮಕಾತಿ: 86 ಜವಾನ, ಬೆರಳಚ್ಚುಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಆಸಕ್ತರು IOCL ನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕಾಗುತ್ತದೆ. ಅರ್ಜಿ ಸಲ್ಲಿಸುವ ಮುನ್ನ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರೈಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳುವುದು ಸೂಕ್ತ.
ಗಮನಿಸಿ: ಕೊನೆಯ ದಿನಾಂಕದವರೆಗೂ ಕಾಯದೆ ಆಸಕ್ತ ಅಭ್ಯರ್ಥಿಗಳು ನಿಗದಿತ ಸಮಯದೊಳಗೆ ತಮ್ಮ ಆನ್ಲೈನ್ ಅರ್ಜಿಗಳನ್ನು ಸಲ್ಲಿಸಲು ಸೂಚಿಸಲಾಗಿದೆ.
ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ