ಕಲ್ಲಕುರಿಚಿ ಕಳ್ಳಭಟ್ಟಿ ದುರಂತ; ತಮಿಳುನಾಡಿನಲ್ಲಿ ವಿಷಕಾರಿ ಮದ್ಯ ಸರಬರಾಜು ಮಾಡಿದ ವ್ಯಕ್ತಿಯ ಬಂಧನ
ಈ ವಾರದ ಆರಂಭದಲ್ಲಿ ತಮಿಳುನಾಡಿನ ಕಲ್ಲಕುರಿಚಿಯಲ್ಲಿ ಸಂಭವಿಸಿದ ದುರಂತದಿಂದ 50ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಅನೇಕ ರೋಗಿಗಳು ಇನ್ನೂ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಪ್ರತಿದಿನ ಈ ಗ್ರಾಮದಿಂದ ಸಾವುಗಳು ವರದಿಯಾಗುತ್ತಿವೆ. ಇದೀಗ ತಮಿಳುನಾಡಿನಲ್ಲಿ ವಿಷಕಾರಿ ಆಲ್ಕೋಹಾಲ್ ಪೂರೈಕೆ ಮಾಡಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.

ಚೆನ್ನೈ: ತಮಿಳುನಾಡಿನ ಕಲ್ಲಕುರಿಚಿಯಲ್ಲಿ (Kallakurichi Hooch Tragedy) ನಡೆದ ವಿಷಕಾರಿ ಮದ್ಯ ದುರಂತದ ಪ್ರಮುಖ ಶಂಕಿತನನ್ನು ಪೊಲೀಸರು ಬಂಧಿಸಿದ್ದಾರೆ. ವಿಷಕಾರಿ ಮದ್ಯಕ್ಕೆ ಬಲಿಯಾದ 55 ನಿವಾಸಿಗಳಿಂದ ಶೋಕದಲ್ಲಿರುವ ಕರುಣಾಪುರಂ ಗ್ರಾಮಕ್ಕೆ ಡಿಸ್ಟಿಲ್ಡ್ ಮದ್ಯವನ್ನು ಪೂರೈಸಿದವರು ಚಿನ್ನದೊರೈ ಎಂದು ಪೊಲೀಸರು ಹೇಳಿದ್ದಾರೆ. ಈ ವಾರದ ಆರಂಭದಲ್ಲಿ ಸಂಭವಿಸಿದ ಕಳ್ಳಭಟ್ಟಿ ದುರಂತದಿಂದ ಅನೇಕ ರೋಗಿಗಳು ಇನ್ನೂ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಪ್ರತಿದಿನ ಸಾವಿನ ಸಂಖ್ಯೆ ಹೆಚ್ಚುತ್ತಲೇ ಇದೆ.
ನಿನ್ನೆ ಸಂಜೆಯವರೆಗೂ 29 ಸಂತ್ರಸ್ತರ ಶವಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಯಿತು. ಅವರ ಅಂತ್ಯಕ್ರಿಯೆ ಮಾಡಲಾಯಿತು ಎಂದು ಜಿಲ್ಲಾಧಿಕಾರಿ ಎಂ.ಎಸ್. ಪ್ರಶಾಂತ್ ತಿಳಿಸಿದ್ದಾರೆ. ಚಿಕಿತ್ಸೆ ಪಡೆಯುತ್ತಿದ್ದ ಮೂವರು ಪುರುಷರು ಚೇತರಿಸಿಕೊಂಡಿದ್ದಾರೆ. ಆದರೆ ಡಜನ್ಗಟ್ಟಲೆ ಇತರರ ಸ್ಥಿತಿ ಇನ್ನೂ ಗಂಭೀರವಾಗಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ಕಲ್ಲಕುರಿಚಿ ಕಳ್ಳಭಟ್ಟಿ ದುರಂತ; ಮೃತರ ಕುಟುಂಬಕ್ಕೆ ಸಿಎಂ ಸ್ಟಾಲಿನ್ 10 ಲಕ್ಷ ರೂ. ಪರಿಹಾರ ಘೋಷಣೆ
ನ್ಯಾಯಮೂರ್ತಿ ಬಿ. ಗೋಕುಲದಾಸ್ ಅವರನ್ನೊಳಗೊಂಡ ಏಕವ್ಯಕ್ತಿ ಆಯೋಗವು ಈ ಘಟನೆಯ ತನಿಖೆಯನ್ನು ಪ್ರಾರಂಭಿಸಿದೆ. ವರದಿ ಸಲ್ಲಿಸಲು 3 ತಿಂಗಳ ಕಾಲಾವಕಾಶ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಲವು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದ್ದು, ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಿದೆ.
ಅಕ್ರಮ ಮದ್ಯ ಸೇವಿಸಿ ಮೃತಪಟ್ಟವರ ಕುಟುಂಬಗಳಿಗೆ ಸಿಎಂ ಸ್ಟಾಲಿನ್ 10 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಹೆಚ್ಚುವರಿಯಾಗಿ, ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ 50,000 ರೂ. ನೀಡಲಾಗುತ್ತದೆ. ಕಳ್ಳಭಟ್ಟಿ ದುರಂತದ ಬಗ್ಗೆ ಸಮಗ್ರ ತನಿಖೆಯನ್ನು ಖಚಿತಪಡಿಸಿಕೊಳ್ಳಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಸಿಬಿ-ಸಿಐಡಿ ತನಿಖೆಗೆ ಆದೇಶಿಸಿದ್ದಾರೆ. ಕಲ್ಲಕುರಿಚಿಯಲ್ಲಿ ಕಲಬೆರಕೆಯ ಮದ್ಯ ಸೇವಿಸಿ ಜನರು ಸಾವನ್ನಪ್ಪಿದ ಸುದ್ದಿ ಕೇಳಿ ನನಗೆ ಆಘಾತವಾಗಿದೆ. ಈ ಅಪರಾಧದಲ್ಲಿ ಭಾಗಿಯಾದವರನ್ನು ಬಂಧಿಸಲಾಗಿದೆ. ಈ ದುರಂತವನ್ನು ತಡೆಯುವಲ್ಲಿ ವಿಫಲರಾದ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ. ಇಂತಹ ಅಪರಾಧಗಳಲ್ಲಿ ಭಾಗಿಯಾದವರ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದರೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹೇಳಿದ್ದಾರೆ.
ಇದನ್ನೂ ಓದಿ: Kallakurichi Hooch Tragedy: ಕಳ್ಳಭಟ್ಟಿ ದುರಂತ; ಸ್ಟಾಲಿನ್ ಸರ್ಕಾರದ ವಿರುದ್ಧ ದಳಪತಿ ವಿಜಯ್ ಟೀಕೆ
ಈ ಘಟನೆಯ ನಂತರ ಕ್ರಿಮಿನಲ್ ಇತಿಹಾಸ ಹೊಂದಿರುವ ಮೂವರು ಆರೋಪಿಗಳನ್ನು ಸಹ ಬಂಧಿಸಲಾಗಿದೆ. ಅಕ್ರಮ ಮದ್ಯ ದಂಧೆಗೆ ಕಬ್ಬಿಣದ ಕಡಲೆ ಕಡಿವಾಣ ಹಾಕುವುದಾಗಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹೇಳಿದ್ದಾರೆ. ಆದರೆ ಪ್ರತಿಪಕ್ಷಗಳು ಅವರ ರಾಜೀನಾಮೆಗೆ ಒತ್ತಾಯಿಸಿವೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




