Kalyan Singh Health Update: ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಆರೋಗ್ಯ ಸ್ಥಿತಿ ಗಂಭೀರ; ವೆಂಟಿಲೇಟರ್ ಅಳವಡಿಕೆ

'ಬಿಜೆಪಿ ನಾಯಕ ಕಲ್ಯಾಣ್ ಸಿಂಗ್ ಅವರ ಆರೋಗ್ಯ ಅಸ್ಥಿರವಾಗಿದೆ. ಉಸಿರಾಟದ ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ ಅವರಿಗೆ ವೆಂಟಿಲೇಟರ್ ಅಳವಡಿಸಲಾಗಿದೆ' ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

Kalyan Singh Health Update: ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಆರೋಗ್ಯ ಸ್ಥಿತಿ ಗಂಭೀರ; ವೆಂಟಿಲೇಟರ್ ಅಳವಡಿಕೆ
ಕಲ್ಯಾಣ್ ಸಿಂಗ್

ಲಕ್ನೋ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ (Kalyan Singh) ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ. ಬಿಜೆಪಿ ನಾಯಕ ಕಲ್ಯಾಣ್ ಸಿಂಗ್ ಅವರನ್ನು ಮಂಗಳವಾರ ರಾತ್ರಿಯಿಂದ ವೆಂಟಿಲೇಟರ್​ನಲ್ಲಿ ಇರಿಸಲಾಗಿದೆ. ಹಲವು ಬಿಜೆಪಿ ನಾಯಕರು ಈಗಾಗಲೇ ಕಲ್ಯಾಣ್ ಸಿಂಗ್ ಅವರಿರುವ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಇದ್ದಕ್ಕಿದ್ದಂತೆ ದೇಹ ಊದಿಕೊಂಡು, ಪ್ರಜ್ಞಾ ಹೀನರಾದ ಹಿನ್ನೆಲೆಯಲ್ಲಿ ಜುಲೈ 4ರಂದು ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಲಕ್ನೋದ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಲ್ಯಾಣ್ ಸಿಂಗ್ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ. ಕಲ್ಯಾಣ್ ಸಿಂಗ್ ಅವರ ಆರೋಗ್ಯದ ಬಗ್ಗೆ ತಜ್ಞ ವೈದ್ಯರ ತಂಡ ನಿರಂತರವಾಗಿ ಗಮನ ಹರಿಸುತ್ತಿದೆ. ಕಾರ್ಡಿಯಾಲಜಿ, ನೆಫ್ರಾಲಜಿ, ನ್ಯೂರಾಲಜಿ, ಎಂಡೋಕ್ರಿನಾಲಜಿ ವೈದ್ಯರು ಸಿಂಗ್ ಅವರ ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾ ಇಟ್ಟಿದ್ದಾರೆ.

‘ಬಿಜೆಪಿ ನಾಯಕ ಕಲ್ಯಾಣ್ ಸಿಂಗ್ ಅವರ ಆರೋಗ್ಯ ಅಸ್ಥಿರವಾಗಿದೆ. ಉಸಿರಾಟದ ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ ಅವರಿಗೆ ವೆಂಟಿಲೇಟರ್ ಅಳವಡಿಸಲಾಗಿದೆ’ ಎಂದು ಸಂಜಯ್ ಗಾಂಧಿ ಆಸ್ಪತ್ರೆ ವೈದ್ಯರು ನಿನ್ನೆ ಸಂಜೆ ತಿಳಿಸಿದ್ದಾರೆ. ನಿನ್ನೆ ಸಂಜೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಕೂಡ ಆಸ್ಪತ್ರೆಗೆ ತೆರಳಿ ಕಲ್ಯಾಣ್ ಸಿಂಗ್ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದರು. ಈಗಾಗಲೇ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಅನೇಕರು ಕಲ್ಯಾಣ್ ಸಿಂಗ್ ಅವರಿರುವ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

89 ವರ್ಷದ ಕಲ್ಯಾಣ್ ಸಿಂಗ್ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಯಾಗಿದ್ದರು. ರಾಜಸ್ಥಾನದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು. ಜುಲೈ 4ರಂದು ಅವರ ದೇಹ ಊದಿಕೊಂಡು, ಪ್ರಜ್ಞೆ ತಪ್ಪಿತ್ತು. ಅಂದಿನಿಂದಲೂ ಅವರು ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಅವರಿಗೆ ವೆಂಟಿಲೇಟರ್ ಅಳವಡಿಕೆ ಮಾಡಲಾಗಿದೆ.

ಇದನ್ನೂ ಓದಿ: ಉತ್ತರ ಪ್ರದೇಶದ ಮಾಜಿ ಸಿಎಂ, ಬಿಜೆಪಿ ನಾಯಕ ಕಲ್ಯಾಣ್ ಸಿಂಗ್ ಆರೋಗ್ಯ ಸ್ಥಿತಿಯಲ್ಲಿ ಸುಧಾರಣೆ; ಶೀಘ್ರ ಗುಣಮುಖರಾಗಲು ಮೋದಿ ಪ್ರಾರ್ಥನೆ

(Former Uttar Pradesh CM Kalyan Singh health condition critical put on Life Support System)