Kerala Rain: ಕೇರಳದಲ್ಲಿ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

| Updated By: ಸುಷ್ಮಾ ಚಕ್ರೆ

Updated on: Oct 16, 2021 | 4:21 PM

Kerala Floods: ಇಂದು ಕೂಡ ಕೇರಳದಾದ್ಯಂತ ಭಾರೀ ಮಳೆ ಮುಂದುವರೆದಿದ್ದು, ಪ್ರವಾಹದ ಭೀತಿ ಎದುರಾಗಿದೆ. ಹೀಗಾಗಿ, ವಿಪರೀತ ಮಳೆಯಾಗುತ್ತಿರುವ ಪಥನಾಂತಿಟ್ಟ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ 'ರೆಡ್ ಅಲರ್ಟ್' ಘೋಷಿಸಲಾಗಿದೆ.

Kerala Rain: ಕೇರಳದಲ್ಲಿ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ
Follow us on

ತಿರುವನಂತಪುರಂ: ಕೇರಳದಲ್ಲಿ ಐದಾರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಅರ್ಧ ರಾಜ್ಯವೇ ನೀರಿನಿಂದ ಆವರಿಸಿಕೊಂಡಿದೆ. ಇನ್ನೂ 2-3 ದಿನ ಕೇರಳದಲ್ಲಿ ಮಳೆಯಾಗುವ ಹಿನ್ನೆಲೆಯಲ್ಲಿ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕೇರಲದ ರಸ್ತೆಗಳು ಸಂಪೂರ್ಣ ನೀರಿನಿಂದ ಆವೃತವಾಗಿದ್ದು, ನದಿಗಳು ಉಕ್ಕಿ ಹರಿಯುತ್ತಿವೆ. ಈ ಹಿನ್ನೆಲೆಯಲ್ಲಿ ಹಲವು ಡ್ಯಾಂಗಳ ಗೇಟುಗಳನ್ನು ತೆರೆಯಲಾಗಿದೆ.

ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕೇರಳದಲ್ಲಿ ನಿನ್ನೆ ಸಂಜೆಯಿಂದ ಮಳೆ ಹೆಚ್ಚಾಗಿದೆ. ಇಂದು ಕೂಡ ಕೇರಳದಾದ್ಯಂತ ಭಾರೀ ಮಳೆ ಮುಂದುವರೆದಿದ್ದು, ಪ್ರವಾಹದ ಭೀತಿ ಎದುರಾಗಿದೆ. ಹೀಗಾಗಿ, ವಿಪರೀತ ಮಳೆಯಾಗುತ್ತಿರುವ ಪಥನಾಂತಿಟ್ಟ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ತಿರುವನಂತಪುರ, ಕೊಲ್ಲಂ, ಅಲಪ್ಪುಳ, ಪಲಕ್ಕಾಡ್, ಮಲಪ್ಪುರಂ, ಕೋಯಿಕ್ಕೋಡ್ ಮತ್ತು ವಯನಾಡ್ ಜಿಲ್ಲೆಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುವ ಮುನ್ಸೂಚನೆ ಇರುವ ಕಾರಣ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ನಾಳೆಯವರೆಗೂ ಕೇರಳದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಗಾಗಿ, ಸಾರ್ವಜನಿಕರು ಹೆಚ್ಚು ಎಚ್ಚರಿಕೆಯಿಂದ ಇರಬೇಕು, ಆಯಾ ಜಿಲ್ಲೆಗಳ ಅಧಿಕಾರಿಗಳು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

ತಿರುವನಂತಪುರ ಜಿಲ್ಲೆಯ ಚೆಂಪಕಮಂಗಲದಲ್ಲಿ ಶುಕ್ರವಾರ ರಾತ್ರಿ ಸುರಿದ ಮಳೆಗೆ, ಮನೆಯ ಗೋಡೆ ಕುಸಿದಿದೆ. ಮನೆಯೊಳಗಿದ್ದ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಯ್ಯಾರ್ ಡ್ಯಾಂನ ಶಟರ್​ಗಳನ್ನು ಏರಿಕೆ ಮಾಡಲಾಗಿದೆ. ಕೇರಳದ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 18ರಂದು ವಿಪರೀತ ಮಳೆಯಾಗಲಿದೆ.

ಕರ್ನಾಟಕ ಸೇರಿ 4 ರಾಜ್ಯಗಳಲ್ಲಿ ಮಳೆ ಹೆಚ್ಚಾಗಿದ್ದು, ಕರ್ನಾಟಕ, ಆಂಧ್ರ ಪ್ರದೇಶ, ತಮಿಳುನಾಡು, ಕೇರಳದಲ್ಲಿ ಹೈ ಅಲರ್ಟ್​ ಘೋಷಿಸಲಾಗಿದೆ. ಕರ್ನಾಟಕದ ಮಲೆನಾಡು, ಕರಾವಳಿ, ಬೆಂಗಳೂರು ಹಾಗೂ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಕೂಡ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ: ಬೆಂಗಳೂರು: ಭಾರೀ ಮಳೆಯಿಂದ ಅವಾಂತರ; ಮನೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ವಸ್ತುಗಳಿಗೆ ಹಾನಿ

Karnataka Weather Today: ಬೆಂಗಳೂರು, ಶಿವಮೊಗ್ಗ, ಉಡುಪಿ, ಉತ್ತರ ಕರ್ನಾಟಕದಲ್ಲಿ ಇನ್ನೂ 3 ದಿನ ಮಳೆ

Published On - 4:15 pm, Sat, 16 October 21